ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ನಗರದಲ್ಲಿ ನಿರಂತರ ಶಾಂತಿಯನ್ನು ಕಾಪಾಡಲು ಜಿಲ್ಲಾಡಳಿತ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ DC Selvamani ಅವರು ಮನವಿ ಮಾಡಿದರು.
ಇತ್ತೀಚಿಗೆ ನಗರದಲ್ಲಿ ನಡೆದ ಕೆಲವು ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದ್ದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.

ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮೀ ಪ್ರಸಾದ್ ಅವರು ಮಾತನಾಡಿ, ಶಿವಮೊಗ್ಗದಲ್ಲಿ ಗಾಂಜಾ ಹಾವಳಿಯನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಬಹುತೇಕ ಕಡಿವಾಣ ಹಾಕಲಾಗಿದೆ. ಇದಕ್ಕೆ ಪೊಲೀಸರೊಂದಿಗೆ ಸಾರ್ವಜನಿಕರ ಸಹಕಾರ ಅತಿ ಅಗತ್ಯ. ಮಕ್ಕಳು ಹಣ ವೆಚ್ಚ ಮಾಡುವುದರ ಬಗ್ಗೆ ಪಾಲಕರು ನಿಗಾ ಇರಿಸಬೇಕು. ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸುವ ಕುರಿತು ಸ್ಥಳೀಯ ಸಂಸ್ಥೆಗಳು ಮುತುವರ್ಜಿ ವಹಿಸಬೇಕು. ಸ್ಮಾರ್ಟ್ ಸಿಟಿ ವತಿಯಿಂದ ಶಿವಮೊಗ್ಗ ನಗರದಲ್ಲಿ 135 ಸಿಸಿ ಕ್ಯಾಮೆರಾ ಅಳವಡಿಸಲಾಗುತ್ತಿದೆ. ವಾರ್ಡ್‍ವಾರು ಶಾಂತಿ ಸಭೆಯನ್ನು ನಿಯಮಿತವಾಗಿ ನಡೆಸಲು ಸೂಚನೆಗಳನ್ನು ಈಗಾಗಲೇ ನೀಡಲಾಗಿದೆ ಎಂದು ಹೇಳಿದರು.

Also read: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೆ ಜೀವ ಬೆದರಿಕೆ: ಸಂಪೂರ್ಣ ತನಿಖೆಗೆ ಸಿಎಂ ಆದೇಶ
ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಕುರಿತು ವಿವಿಧ ಸಮುದಾಯಗಳ ನಾಯಕರು ತಮ್ಮ ಅಭಿಪ್ರಾಯಗಳನ್ನು ಸಭೆಯಲ್ಲಿ ವ್ಯಕ್ತಪಡಿಸಿದರು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಗಣೇಶೋತ್ಸವಕ್ಕೆ ಯಾವುದೇ ಭಂಗವಾಗದಂತೆ ಎಚ್ಚರಿಕೆ ವಹಿಸಬೇಕು. ಗಾಂಜಾ ಚಟುವಟಿಕೆಗಳನ್ನು ನಿಯಂತ್ರಿಸಿದರೆ ಬಹುತೇಕ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಿದೆ. ಪ್ರಚೋದನೆ ಮಾಡುವವರು ಯಾರೇ ಆಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ನಗರದಲ್ಲಿ ಅನಧಿಕೃತ ಫ್ಲೆಕ್ಸ್ ಅಳವಡಿಸುವುದನ್ನು ನಿಯಂತ್ರಿಸಬೇಕು ಎಂದು ಹಲವು ಮುಖಂಡರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.










Discussion about this post