ಕಲಬುರಗಿ, ಸೆ.27: ಬೀದರ್, ಕಲಬುರ್ಗಿ ಸೇರಿದಂತೆ ಹೈದರಾಬಾದ್ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅತಿವೃಷ್ಠಿಯಿಂದಾಗಿ ಉಂಟಾಗಿರುವ ಹಾನಿಗೆ ಪರಿಹಾರ ನೀಡಲು ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ಮನವಿ ಮಾಡಲು ಮುಖ್ಯಮಂತ್ರಿ ಸಿದ್ಧರಾಮಯ್ಯ ನಿರ್ಧರಿಸಿದ್ದಾರೆ.
ಇಂದು ಕಲಬುರಗಿ ಜಿಲ್ಲೆಯ ಮಳೆ ಮತ್ತು ಪ್ರವಾಹ ಹಾನಿಗೊಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆಯನ್ನು ನಡೆಸಿದ ಬಳಿಕ ಚಿತ್ತಾಪುರ ತಾಲೂಕಿನ ಕೋರವಾರ ಗ್ರಾಮದಲ್ಲಿ ಸುದ್ದಿಗಾರರಿಗೆ ಅವರು ತಿಳಿಸಿದರು.
ಕಲಬುರಗಿ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆ ಮತ್ತು ಪ್ರವಾಹದಿಂದ ಉಂಟಾದ ಹಾನಿಗೆ ಸಂಬಂಧಪಟ್ಟಂತೆ ನಿಯಮಾವಳಿ ಪ್ರಕಾರ ತುರ್ತು ಪರಿಹಾರವನ್ನು ನಾಳೆಯಿಂದಲೇ 25 ಕೋಟಿ ರೂ. ವಿತರಿಸುವಂತೆ ಆದೇಶಿಸಲಾಗಿದೆ. ಸರ್ಕಾರದಿಂದ ಮ್ಯಾಚಿಂಗ್ ಗ್ರ್ಯಾಂಟ್ ನೀಡುವ ಬಗ್ಗೆ ಯೋಚಿಸಲಾಗುವುದು. ಜಿಲ್ಲೆಯಲ್ಲಿ ಪ್ರಾಥಮಿಕ ವರದಿ ಪ್ರಕಾರ 35 ಸಾವಿರ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದೆ. ಇದಲ್ಲದೇ 1410 ಮನೆಗಳು ಜಖಂ ಆಗಿದ್ದು, ನಿಯಮಾವಳಿ ಪ್ರಕಾರ ಪರಿಹಾರ ನೀಡುವಂತೆ ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಭಾರಿ ಮಳೆ ಮತ್ತು ಪ್ರವಾಹದಿಂದ ಉಂಟಾದ ಹಾನಿಯ ಸಮೀಕ್ಷೆಯನ್ನು ಒಂದು ವಾರದೊಳಗೆ ಪೂರ್ಣಗೊಳಿಸಿ ಸಮೀಕ್ಷೆಯ ಸ್ಪಷ್ಟ ಹಾಗೂ ಖಚಿತವಾದ ವರದಿ ನೀಡುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ.
ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಅನಾವೃಷ್ಟಿ ಮತ್ತು ಕೆಲವು ಜಿಲ್ಲೆಗಳಲ್ಲಿ ಅತೀವೃಷ್ಟಿ ತಲೆದೋರಿರುವ ಹಿನ್ನೆಲೆಯಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಸಾಂಪ್ರದಾಯಿಕ ಮತ್ತು ಸರಳವಾಗಿ ಆಚರಿಸುವಂತೆ ತಿಳಿಸಲಾಗಿದೆ. ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಸುಪ್ರಿಂಕೋರ್ಟ್ ನೀಡಿರುವ ಆದೇಶದ ಪೂರ್ಣ ಪಾಠ ಗೊತ್ತಾಗಿಲ್ಲ. ನಮ್ಮ ನ್ಯಾಯವಾದಿಗಳ ಜೊತೆಗೂ ಮಾತಾಡಿಲ್ಲ. ಕಾನೂನು ತಜ್ಞರ ಜೊತೆಗೆ ಮಾತಾನಾಡುವವರೆಗೆ ಸುಪ್ರಿಂಕೋರ್ಟ್ ನೀಡಿದ ಆದೇಶದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲವೆಂದು ಇಂದು ಸಂಜೆ ಬೆಂಗಳೂರಿಗೆ ಹಿಂದುರುಗಿದ ಬಳಿಕ ಸುಪ್ರಿಂಕೋರ್ಟ್ ಆದೇಶದ ಬಗ್ಗೆ ಎಲ್ಲರೊಂದಿಗೆ ಚರ್ಚಿಸುವುದಾಗಿ ಹೇಳಿದರು.
ಇದಕ್ಕೂ ಮುನ್ನ ಮುಖ್ಯಮಂತ್ರಿಗಳು ಎಲ್ಲ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ ಹಾನಿಯ ಪ್ರಾಥಮಿಕ ವರದಿಯನ್ನು ಪಡೆದರು. ಸಭೆಯಲ್ಲಿ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ, ವೈದ್ಯಕೀಯ ಶಿಕ್ಷಣ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ. ಶರಣಪ್ರಕಾಶ ಪಾಟೀಲ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಪ್ರವಾಸೋದ್ಯಮ ರಾಜ್ಯ ಸಚಿವ ಪ್ರಿಯಾಂಕ್ ಖರ್ಗೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಸದೀಯ ಕಾರ್ಯದರ್ಶಿ ಡಾ. ಉಮೇಶ ಜಾಧವ, ಶಾಸಕ ಅಜಯಸಿಂಗ್, ಕಂದಾಯ ಇಲಾಖೆಯ ರಾಜ್ಯ ವಿಪತ್ತು ನಿರ್ವಹಣಾ ವಿಭಾಗದ ಕಾರ್ಯದರ್ಶಿ ಗಂಗಾರಾಮ್ ಬಡೇರಿಯಾ, ಮುಖ್ಯಮಂತ್ರಿಗಳ ಕಾರ್ಯದರ್ಶಿ ತುಷಾರ್ ಗಿರಿನಾಥ, ಪ್ರಾದೇಶಿಕ ಆಯುಕ್ತ ಅಮ್ಲನ್ ಅದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ಉಜ್ವಲ್ಕುಮಾರ್ ಘೋಷ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಿರುದ್ಧ ಶ್ರವಣ ಪಿ., ಮಹಾನಗರ ಪಾಲಿಕೆ ಆಯುಕ್ತ ಪಿ. ಸುನೀಲಕುಮಾರ ಹಾಗೂ ವಿವಿಧ ಇಲಾಖೆಗಳ ಎಲ್ಲ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
Discussion about this post