Read - < 1 minute
ನವದೆಹಲಿ, ಸೆ.7: ಕಣಿವೆ ರಾಜ್ಯ ಕಾಶ್ಮೀರದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಭಾರತೀಯ ಸೇನಾ ಮುಖ್ಯಸ್ಥ ದಲ್ಬೀರ್ ಸಿಂಗ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಕಾಶ್ಮೀರದಲ್ಲಿ ಶಾಂತಿ ಮರುಸ್ಥಾಪನೆ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮುಂದಿನ ಕಾರ್ಯತಂತ್ರಗಳ ಬಗ್ಗೆ ಸೇನಾ ಮುಖ್ಯಸ್ಥರು ಹಾಗೂ ಗೃಹ ಸಚಿವರು ಚರ್ಚೆ ನಡೆಸಿದ್ದಾರೆ. ಈ ವೇಳೆ ಕೇಂದ್ರ ಗೃಹ ಕಾರ್ಯದರ್ಶಿ ರಾಜೀವ್ ಮೆಹ್ರಿಶಿ ಕೂಡ ಉಪಸ್ಥಿತರಿದ್ದರು.
ಉಗ್ರ ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ನಿರ್ಮಾಣವಾಗಿರುವ ಹಿಂಸಾಚಾರ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಂತಿ ಸ್ಥಾಪನೆ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ರಾಜಧಾನಿ ದೆಹಲಿಯಲ್ಲಿ ಸರ್ವಪಕ್ಷ ಸಭೆ ನಡೆಯುತ್ತಿದ್ದು, ಸಭೆಗೂ ಮುನ್ನ ಕಾಶ್ಮೀರ ಪರಿಸ್ಥಿತಿ ಕುರಿತಂತೆ ರಾಜನಾಥ್ ಸಿಂಗ್ ಅವರು ಸೇನಾ ಮುಖ್ಯಸ್ಥರನ್ನು ಭೇಟಿಯಾಗಿ ಚರ್ಚೆ ನಡೆಸಿದರು.
ಕಾಶ್ಮೀರ ವಿವಾದ ಕುರಿತಂತೆ ಕೆಲ ದಿನಗಳ ಹಿಂದಷ್ಟೇ ರಾಜನಾಥ್ ಸಿಂಗ್ ನೇತೃದಲ್ಲಿ ಕಾಶ್ಮೀರದಲ್ಲಿ ಸರ್ವಪಕ್ಷ ಸಭೆಯೊಂದು ನಡೆದಿತ್ತು. ಎರಡು ದಿನಗಳ ಕಾಲ ಕಾಶ್ಮೀರಕ್ಕೆ ಭೇಟಿ ನೀಡಿದ್ದ ಗೃಹ ಸಚಿವರು ಪರಿಸ್ಥಿತಿಯನ್ನು ಅವಲೋಕಿಸಿದ್ದರು.
Discussion about this post