Read - < 1 minute
ಬೆಂಗಳೂರು, ಅ.13: ರಾಜ್ಯದಲ್ಲಿ ತಲೆದೋರಿರುವ ತೀವ್ರ ಬರದಿಂದಾಗಿ ಸುಮಾರು ಆರು ಸಾವಿರ ಕೋಟಿ ರೂ. ನಷ್ಟು ಹಾನಿಯುಂಟಾಗಿದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದರು.
ತಮ್ಮನ್ನು ಭೇಟಿಯಾದ ಸುದ್ದಿಗಾರರ ಜತೆ ಮಾತನಾಡಿದ ಅವರು, ಈಗಾಗಲೇ 110 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಲಾಗಿದೆ. ಬರಪೀಡಿತ ಪ್ರದೇಶಗಳು ಇನ್ನು ಹೆಚ್ಚಾಗುವ ಸಾಧ್ಯತೆ ಇದೆ ಎಂದರು.
ಸದ್ಯದಲ್ಲೇ ಬೆಳೆ ಹಾನಿ ಸೇರಿದಂತೆ ಮತ್ತಿತರ ಹಾನಿಗಳ ಬಗ್ಗೆ ಅಂದಾಜಿಸಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಆನಂತರ ಕೇಂದ್ರದಿಂದ ತಜ್ಞರ ತಂಡ ರಾಜ್ಯಕ್ಕೆ ಬರಲಿದೆ ಎಂದರು.
ರಾಜ್ಯದಲ್ಲಿ ಕುಡಿಯುವ ನೀರು, ಜಾನುವಾರುಗಳ ಮೇವು, ಉದ್ಯೋಗಕ್ಕೆ ತೊಂದರೆಯಾಗದ ರೀತಿ ನೋಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಇನ್ನೂ ಬರ ಪರಿಹಾರ ಕಾಮಗಾರಿ ಎಲ್ಲೂ ಪ್ರಾರಂಭವಾಗಿಲ್ಲ. ಎಂತಹ ಪರಿಸ್ಥಿತಿ ಇದ್ದರೂ ತುರ್ತು ಕ್ರಮಕೈಗೊಳ್ಳುವಂತೆ ಆದೇಶಿಸಲಾಗಿದೆ ಎಂದು ತಿಳಿಸಿದರು.
ಬಗರ್ ಹುಕುಂ ಸಾಗುವಳಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿಯನ್ನು ಡಿಸೆಂಬರ್ ಒಳಗೆ ಮುಗಿಸಲು ಸೂಚಿಸಲಾಗಿತ್ತು. ಪ್ರತಿವಾರ ಕಡ್ಡಾಯವಾಗಿ ಸಭೆ ನಡೆಸಲು ನಿರ್ದೇಶಿಸಲಾಗಿದೆ. ಸೆಪ್ಟೆಂಬರ್ ಪ್ರಾರಂಭದಲ್ಲಿ ಹಾಗೂ ಸೆಪ್ಟೆಂಬರ್ ಅಂತ್ಯದ ವೇಳೆಗೆ ವಿಲೇವಾರಿಯಾದ ಬಗರ್ ಹುಕುಂ ಸಾಗುವಳಿ ಅರ್ಜಿಗಳ ವರದಿ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಈರುಳ್ಳಿ, ಟೊಮೆಟೋಗೆ ಬೆಂಬಲ ಬೆಲೆ ನಿಗದಿಯಾಗಿಲ್ಲ. ಬೆಲೆ ಕುಸಿತವಾಗಿ ರೈತರು ಸಂಕಷ್ಟಕ್ಕೀಡಾಗಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಕೃಷಿ ಸಚಿವರ ಜೊತೆ ಈ ಬಗ್ಗೆ ಚರ್ಚಿಸಿ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.
ನೆರೆ ಹಾವಳಿಗೆ ತುತ್ತಾಗಿದ್ದ ಬೀದರ್ ಜಿಲ್ಲೆಗೆ 50 ಕೋಟಿ ರೂ, ಕಲಬುರಗಿ ಜಿಲ್ಲೆಗೆ 25 ಕೋಟಿ ರೂ. ಪರಿಹಾರ ಧನ ಬಿಡುಗಡೆಯಾಗಿದೆ. ಬರ ಮತ್ತು ಪ್ರವಾಹಕ್ಕೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಮನವಿ ಪತ್ರ ಸಿದ್ಧಪಡಿಸಿ ನೆರವಿಗಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಕಾಗೋಡು ತಿಮ್ಮಪ್ಪ ತಿಳಿಸಿದರು.
Discussion about this post