Read - < 1 minute
ಬೆಂಗಳೂರು, ಸೆ.30: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಅ.3 ಮತ್ತು 4 ರಂದು ರಾಜ್ಯ ಬಿಜೆಪಿ ಕಾರ್ಯಾಕಾರಿಣಿ ಸಭೆ ನಡೆಯಲಿದ್ದು, ಪ್ರಮುಖವಾಗಿ ಮೂರು ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅ. 3 ರಂದು ಬೆಳಿಗ್ಗೆ 10 ಗಂಟೆಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಉದ್ಘಾಟಿಸುವರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವರಾದ ಅನಂತ್ ಕುಮಾರ್, ಡಿ.ವಿ. ಸದಾನಂದಗೌಡ, ರಮೇಶ್ ಜಿಗಜಿಣಗಿ, ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ರಾಮ್ಲಾಲ್, ಸಹ ಸಂಘಟನಾ ಕಾರ್ಯದರ್ಶಿ ಸಂತೋಷ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುರಳೀಧರರಾವ್ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಕಾರ್ಯಕಾರಿಣಿಗೆ ಸುಮಾರು 600 ಪದಾಧಿಕಾರಿಗಳಿಗೆ ಆಹ್ವಾನ ನೀಡಲಾಗಿದೆ. ಸಂಸದರು, ಶಾಸಕರು, ರಾಷ್ಟ್ರೀಯ ಹಾಗೂ ರಾಜ್ಯ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು ಭಾಗವಹಿಸಲಿದ್ದಾರೆ.
ಸಭೆಯಲ್ಲಿ ಮೂರು ನಿರ್ಣಯ ಕೈಗೊಳ್ಳಲಾಗುವುದು. ರಾಜ್ಯ ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಪರಿಹಾರ, ಕೇಂದ್ರದಲ್ಲಿರುವ ನರೇಂದ್ರ ಮೋದಿ ಸರ್ಕಾರದ ಸಾಧನೆಗಳು, ಪಕ್ಷದ ಸಂಘಟನೆ ಬಗ್ಗೆ ನಿರ್ಣಯ ಕೈಗೊಳ್ಳಲಿದ್ದೇವೆ ಎಂದು ಹೇಳಿದರು.
ಅ.4ರಂದು ರಾಮ್ಲಾಲ್ ಪಾಲ್ಗೊಂಡು ಮಾರ್ಗದರ್ಶನ ನೀಡಲಿದ್ದಾರೆ. ನ.23ರಂದು ಲಿಂಗಸಗೂರಿನಲ್ಲಿ ಎಸ್ಟಿ ಸಮಾವೇಶ, 27ರಂದು ಬೆಂಗಳೂರಿನಲ್ಲಿ ಒಬಿಸಿ ಸಮಾವೇಶ ಹಮ್ಮಿಕೊಳ್ಳುತ್ತೇವೆ ಎಂದು ರವಿಕುಮಾರ್ ತಿಳಿಸಿದರು.
Discussion about this post