ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯ ಎಲ್ಲಾ ತಾಲೂಕುಗಳ ಪ್ರಸ್ತಾವಿತ ಕುಡಿಯುವ ನೀರಿನ 138.4 ಲಕ್ಷ ಮೊತ್ತದ 87 ಕಾಮಗಾರಿಗಳಿಗೆ ಜಿಲ್ಲಾ ಮಟ್ಟದ ಸಮಿತಿ ಅನುಮೋದನೆ ನೀಡಿದೆ.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗವು ಏರ್ಪಡಿಸಿದ್ದ 2020-21ನೇ ಸಾಲಿನ ತುರ್ತು ಕುಡಿಯುವ ನೀರಿನ ಕಾಮಗಾರಿಗಳ ಕ್ರಿಯಾ ಯೋಜನೆಯ ಅನುಷ್ಠಾನಕ್ಕಾಗಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಲಜೀವನ್ ಮಿಷನ್‍ನ ಜಿಲ್ಲಾ ಅಧ್ಯಕ್ಷೆ ಶ್ರೀಮತಿ ಎಂ.ಎಲ್.ವೈಶಾಲಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅನುಮೋದನೆ ದೊರೆತಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈಗಾಗಲೆ ರಾಜ್ಯದ ಬರಪೀಡಿತವಲ್ಲದ ಪ್ರತಿ ತಾಲೂಕುಗಳಿಗೆ ಸರ್ಕಾರವು ಈಗಾಗಲೇ ಘೋಷಿಸಿರುವಂತೆ 25ಲಕ್ಷ ರೂ.ಗಳನ್ನು ಮಂಜೂರು ಮಾಡಿದ್ದು, ಎರಡು ಹಂತದಲ್ಲಿ ಈಗಾಗಲೇ ಪ್ರತಿ ತಾಲೂಕಿಗೆ 20ಲಕ್ಷ ರೂ.ಗಳ ಅನುದಾನ ಬಿಡುಗಡೆ ಮಾಡಿದೆ. ಈ ಪೈಕಿ ಆಯಾ ವಿಧಾನಸಭಾ ಕ್ಷೇತ್ರದ ಶಾಸಕರ ಅಧ್ಯಕ್ಷತೆಯಲ್ಲಿ ನಡೆಯುವ ತಾಲೂಕು ಮಟ್ಟದ ಟಾಸ್ಕ್‍ಫೋರ್ಸ್ ಸಮಿತಿಯಲ್ಲಿ ಅನುಮೋದನೆಗೊಂಡ ಕಾಮಗಾರಿಗಳಿಗೆ ಜಿಲ್ಲಾ ಮಟ್ಟದ ಸಮಿತಿ ಅನುಮೋದನೆ ನೀಡಲಿದೆ. ಅಲ್ಲದೆ ಉಳಿದ 5 ಲಕ್ಷ ರೂ.ಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಮ್ಮ ವಿವೇಚನೆಯಂತೆ ಬಳಸಲು ಅವಕಾಶ ನೀಡಲಾಗಿದೆ ಎಂದರು.
ಪ್ರಸಕ್ತ ಬೇಸಿಗೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಎಲ್ಲಿಯೂ ಕುಡಿಯುವ ನೀರು ಸರಬರಾಜಿಗೆ ಅಡಚಣೆ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಇಂಜಿನಿಯರುಗಳಿಗೆ ಸೂಚಿಸಿದ ಅವರು, ಅತೀ ಅಗತ್ಯವೆನಿಸುವ, ತೀವ್ರ ಪ್ರಮಾಣದ ಸಮಸ್ಯಾತ್ಮಕ ಹಾಗೂ ಸಾರ್ವಜನಿಕರಿಗೆ, ಎಲ್ಲಾ ವರ್ಗದ ಜನರಿಗೆ ಅನುಕೂಲವಾಗಬಹುದಾದ ಗ್ರಾಮದ ಪ್ರಮುಖ ಪ್ರದೇಶಗಳಲ್ಲಿ ಕೊಳವೆಬಾವಿಗಳನ್ನು ಕೊರೆಸಲು ಸ್ಥಳಗಳನ್ನು ಗುರುತಿಸುವಂತೆ ಸೂಚಿದರು. ಈ ಸಂದರ್ಭದಲ್ಲಿ ಆಯಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಅನುಮತಿಪತ್ರವನ್ನು ಪಡೆಯುವಂತೆಯೂ ಅವರು ಸೂಚಿಸಿದರು.
ಈಗಾಗಲೆ ಸ್ಥಾಪಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ವಚ್ಚವಾಗಿಟ್ಟುಕೊಳ್ಳುವಂತೆ ಸೂಚಿಸಿದ ಅವರು, ಕೈಗೊಳ್ಳುವ ಕುಡಿಯುವ ನೀರಿನ ಕಾಮಗಾರಿಗಳನ್ನು ಸಕಾಲದಲ್ಲಿ ಪೂರ್ಣಗೊಳಿಸಿ, ವರ್ಷವಿಡೀ ನೀರು ಸರಬರಾಜು ಆಗುವಂತೆ ನೋಡಿಕೊಳ್ಳಲು ಸೂಚಿಸಿದರು. ಅಲ್ಲದೇ ಮುಂದಿನ ವರ್ಷಗಳಲ್ಲಿ ಎದುರಾಗಬಹುದಾದ ಸಮಸ್ಯೆಗಳಿಗೆ ಪೂರಕವಾಗಿ ಕೇಂದ್ರ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಯಂತೆ ಪ್ರತಿ ಮನೆಮನೆಗೂ ಹಂತಹಂತವಾಗಿ ನೀರು ಸರಬರಾಜು ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶ್ರೀಧರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರ ಜಿ.ಎನ್.ಕುಮಾರ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ. ಕಿರಣ್‍ಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎನ್.ಎಂ.ರಮೇಶ್ ಸೇರಿದಂತೆ ಎಲ್ಲಾ ತಾಲೂಕುಗಳ ಇಂಜಿನಿಯರುಗಳು ಉಪಸ್ಥಿತರಿದ್ದರು.
Get in Touch With Us info@kalpa.news Whatsapp: 9481252093
Discussion about this post