ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕರೋನಾ ವೈರಸ್ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಜನರು ಗುಂಪುಗೂಡುವುದನ್ನು ತಪ್ಪಿಸಲು ಜಿಲ್ಲೆಯಾದ್ಯಂತ ಕಲಂ 144 ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ತಿಳಿಸಿದರು.
ಸಾರ್ವಜನಿಕ ಸ್ಥಳಗಳಲ್ಲಿ 5ಕ್ಕಿಂತ ಹೆಚ್ಚು ಮಂದಿ ಗುಂಪು ಸೇರುವುದನ್ನು ನಿಷೇಧಿಸಲಾಗಿದ್ದು, ಈ ಆದೇಶ ಇಂದಿನಿಂದ ಮಾರ್ಚ್ 25ರವರೆಗೆ ಜಾರಿಯಲ್ಲಿರುವುದು. ಅಂತ್ಯಕ್ರಿಯೆ ಮೆರವಣಿಗೆ ಮತ್ತು ಪರೀಕ್ಷೆಯಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಮೂಲಕ ಕರೋನಾ ವೈರಸ್ ಹರಡುವುದನ್ನು ತಡೆಯಬಹುದಾಗಿದೆ. ಪ್ರತಿಯೊಬ್ಬ ನಾಗರಿಕರು ತಮ್ಮ ಜವಾಬ್ದಾರಿಯನ್ನು ಅರಿತು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಅವರು ಮನವಿ ಮಾಡಿದರು.
ರಸ್ತೆ ಬದಿ ಆಹಾರ ತಿಂಡಿ ಮಾರಾಟ ನಿಷೇಧ
ಶಿವಮೊಗ್ಗ ಮಹಾನಗರ ಪಾಲಿಕೆ ಮತ್ತು ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿ ಆಹಾರ ತಿಂಡಿಗಳನ್ನು ಮಾರಾಟ ಮಾಡುವುದನ್ನು ಮುಂದಿನ ಆದೇಶದವರೆಗೆ ನಿಷೇಧಿಸಲಾಗಿದೆ.
ನಿಯಂತ್ರಣಕ್ಕೆ ಕ್ರಮ
ಜಿಲ್ಲೆಯಲ್ಲಿ ಕರೋನಾ ವೈರಸ್ ನಿಯಂತ್ರಣಕ್ಕೆ ನಿರಂತರ ನಿಗಾ ವಹಿಸಲಾಗಿದೆ. ಪರಿಸ್ಥಿತಿಗೆ ಅನುಗುಣವಾಗಿ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈಗಾಗಲೇ ರೈಲ್ವೇ ನಿಲ್ದಾಣ ಮತ್ತು ಬಸ್ ನಿಲ್ದಾಣಗಳಲ್ಲಿ ಹೊರ ರಾಜ್ಯಗಳಿಂದ ಹಾಗೂ ಕೆಲವು ನಿರ್ದಿಷ್ಟ ನಗರಗಳಿಂದ ಆಗಮಿಸುವ ಪ್ರಯಾಣಿಕರ ಥರ್ಮರ್ ಸ್ಕ್ಯಾನರ್ ಮುಖಾಂತರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ 150 ಹಾಸಿಗೆ ಇರುವ ಪ್ರತ್ಯೇಕ ವಾರ್ಡ್ ಸಜ್ಜುಗೊಳಿಸಲಾಗಿದೆ. ವಿದೇಶಗಳಿಂದ ಆಗಮಿಸಿರುವ ರೆಕಾರ್ಡ್ ಹೊಂದಿರುವ 76 ಮಂದಿಯ ಮೇಲೆ ನಿಗಾ ಇರಿಸಲಾಗಿದೆ. 6ಮಂದಿಯನ್ನು ಆಸ್ಪತ್ರೆಯಲ್ಲಿ ಐಸೋಲೇಶನ್ ಘಟಕದಲ್ಲಿರಿಸಲಾಗಿದೆ ಎಂದು ಮಾಹಿತಿ ನೀಡಿದರು.
ಮನವಿ
ಜಾತ್ರೆ, ಪ್ರಾರ್ಥನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಸೇರುವುದನ್ನು ತಪ್ಪಿಸುವಂತೆ ಈಗಾಗಲೇ ಎಲ್ಲಾ ಧಾರ್ಮಿಕ ಕೇಂದ್ರಗಳಿಗೆ ಮನವಿ ಮಾಡಲಾಗಿದೆ. ಇದೇ ರೀತಿ ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರು ಸೇವೆ ಪಡೆಯುವ ಇಲಾಖೆಗಳಲ್ಲಿ ಟೋಕನ್ ವ್ಯವಸ್ಥೆ ಮಾಡುವ ಮೂಲಕ ಜನರು ಒಂದೆಡೆ ಸೇರುವುದನ್ನು ತಪ್ಪಿಸಲು ಸೂಚನೆ ನೀಡಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿಯೂ ಇಂತಹ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಲಾಗುವುದು ಎಂದರು.
ಕಾನೂನು ಕ್ರಮ
ಕರೋನಾ ವೈರಸ್ ಕುರಿತು ಸಾಮಾಜಿಕ ಜಾಲ ತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವುದರ ವಿರುದ್ಧ ಈಗಾಗಲೇ ಹಲವು ಬಾರಿ ಎಚ್ಚರಿಕೆ ನೀಡಲಾಗಿದೆ. ಇನ್ನು ಮುಂದೆ ಅಂತಹ ಪ್ರವೃತ್ತಿ ಮುಂದುವರೆಸಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ಹಕ್ಕಿ ಜ್ವರ
ಜಿಲ್ಲೆಯಲ್ಲಿ ಹಕ್ಕಿಜ್ವರದ ಪ್ರಕರಣ ಇದುವರೆಗೆ ದೃಢಪಟ್ಟಿಲ್ಲವಾದರೂ, ನೆರೆಯ ಜಿಲ್ಲೆಯಲ್ಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ಮತ್ತು ಶಿಕಾರಿಪುರ ತಾಲೂಕಿನಲ್ಲಿ ಇಂದಿನಿಂದ ಪೌಲ್ಟ್ರಿ ಮಾಂಸ ಮಾರಾಟ ನಿಷೇಧಿಸಲು ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಜಿ. ಅನುರಾಧ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ, ಡಾ.ಕಿರಣ್, ಶಿಮ್ಸ್ ನಿರ್ದೇಶಕ ಡಾ.ಲೇಪಾಕ್ಷಿ ಉಪಸ್ಥಿತರಿದ್ದರು.
Get in Touch With Us info@kalpa.news Whatsapp: 9481252093
Discussion about this post