ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೆವಾಲ ಅವರು ಮಾ. 4ರಂದು ನಗರಕ್ಕೆ ಆಗಮಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ತಿಳಿಸಿದರು.
ಅವರು ಇಂದು ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಅಂದು ಪಕ್ಷದ ಪ್ರಮುಖರ ಸಭೆ ನಡೆಯಲಿದೆ. ಬೆಳಿಗ್ಗೆ 10.30ಕ್ಕೆ ಲಗಾನ್ ಕಲ್ಯಾಣ ಮಂದಿರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಇದು ಕಾರ್ಯಕರ್ತರ ಸಭೆಯಲ್ಲ. ಪ್ರಮುಖರ ಸಭೆ ಮಾತ್ರ. ಪ್ರಮುಖರಾದ ಧ್ರುವ ನಾರಾಯಣ, ಜಿಲ್ಲಾ ಕಾಂಗ್ರೆಸ್ ಪ್ರಮುಖರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದರು.
ಪಕ್ಷದ ಗ್ಯಾರಂಟಿ ಕಾರ್ಡ್ ವಿತರಣೆಗೂ ಅಂದು ಸುರ್ಜೆವಾಲ ಚಾಲನೆ ನೀಡಲಿದ್ದಾರೆ. ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್, ಪ್ರತಿ ಮಹಿಳೆಯ ಖಾತೆಗೆ ತಿಂಗಳಿಗೆ 2000ರೂ. ಕೊಡುವ ಘೋಷಣೆಯನ್ನು ಪಕ್ಷ ಈಗಾಗಲೇ ಮಾಡಿದೆ. ಅದನ್ನೇ ಗ್ಯಾರಂಟಿ ಕಾರ್ಡ್‌ನಲ್ಲಿ ತಿಳಿಸಲಾಗಿದೆ. ಪ್ರತಿ ಬಿಪಿಎಲ್ ಕುಟುಂಬದ ಸದಸ್ಯರಿಗೆ 10 ಕೆಜಿ ಅಕ್ಕಿ ಕೊಡಲಾಗುವುದು ಎಂದರು.
Also read: ಕೆಎಸ್ ಡಿಎಲ್ ನಿಗಮ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ
ಬೆಲೆ ಏರಿಕೆಯಿಂದಾಗಿ ಜನರು ಜೀವನ ಮಾಡುವುದೇ ಕಷ್ಟವಾಗಿದೆ. ಕೇಂದ್ರದಿಂದ ದಿನನಿತ್ಯ ತೆರಿಗೆ ವಿಧಿಸಲಾಗುತ್ತಿದೆ. ಜಿಎಸ್‌ಟಿ ಸಂಗ್ರಹ ಮಾಡಿರುವುದೇ ಇವರ ಸಾಧನೆ ಆಗಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಬ್ಯಾರೆಲ್‌ಗೆ 100 ಡಾಲರ್‌ನಿಂದ 77 ಡಾಲರ್‌ಗೆ ಇಳಿದಿದೆ. ಆದರೂ ಇಲ್ಲಿ ಗ್ಯಾಸ್ ಬೆಲೆ ಹೆಚ್ಚಳ ಮಾಡಲಾಗಿದೆ. ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆ ಮಾಡುತ್ತಿಲ್ಲ ಎಂದು ದೂರಿದರು.
ಇತ್ತೀಚೆಗೆ ವಿಮಾನ ನಿಲ್ದಾಣ ಉದ್ಘಾಟನೆಗೆ ಪ್ರಧಾನಿ ಮೋದಿ ಬಂದು ಹೋಗಿರುವುದರಿಂದ ಜಿಲ್ಲೆಗೆ ಯಾವ ಪ್ರಯೋಜನವೂ ಆಗಿಲ್ಲ. ಇಲ್ಲಿ ಬಂದು ನದಿ, ಕಾಡು ಹೆಸರು ಹೇಳಿ, ಯಡಿಯೂರಪ್ಪರಿಗೆ ಶುಭಾಶಯ ಕೋರಿ ಹೋಗಿದ್ದಾರೆ. ಸರ್ಕಾರದ ಹಣದಲ್ಲಿ ಬಿಜೆಪಿ ಸಮಾವೇಶ ಮಾಡಿದ್ದಾರೆ ಎಂದು ಟೀಕಿಸಿದರು.
ವಿಮಾನ ನಿಲ್ದಾಣ ನಿರ್ಮಾಣ ಮಾಡಿರುವುದು ದೊಡ್ಡ ಸಾಧನೆಯೇನೂ ಅಲ್ಲ. 2006ರಲ್ಲಿ ಮನಮೋಹನ್ ಸಿಂಗ್ ಸರ್ಕಾರ ಇದ್ದಾಗಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಜಾಗ ನೋಡಲಾಗಿತ್ತು. ಇದಕ್ಕೆ ಸಿದ್ದರಾಮಯ್ಯ ಕೂಡ ಹಣ ಬಿಡುಗಡೆ ಮಾಡಿದ್ದಾರೆ. ಹುಬ್ಬಳ್ಳಿ, ಬೀದರ್, ಬೆಳಗಾವಿ, ಮಂಗಳೂರಿನಲ್ಲಿ ಕಾಂಗ್ರೆಸ್ ಸರ್ಕಾರವೇ ವಿಮಾನ ನಿಲ್ದಾಣ ನಿರ್ಮಿಸಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಚಂದ್ರಭೂಪಾಲ್, ಚಂದ್ರಶೇಖರ್, ಲಗಾನ್ ಸತ್ಯನಾರಾಯಣ, ಚಂದನ್, ನೇತಾಜಿ, ಎಂ.ಎನ್. ಗಂಗಾಧರ್, ಅಕ್ರಂ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post