ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಲ್ಲಿ ನಕಲಿ ಜಾತಿ ಪ್ರಮಾಣ ಪತ್ರದ ಅವ್ಯವಹಾರಕ್ಕೆ ಕಡಿವಾಣ ಹಾಕಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.
ಈ ಕುರಿತಂತೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಹಾಗೂ ಪಂಗಡದ ಪ್ರಮಾಣಪತ್ರ ವಿತರಣೆಯಾಗುತ್ತಿರುವ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳು ಸಿಆರ್’ಇ ಸೆಲ್ ನಲ್ಲಿ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು. ರಾಯಚೂರು, ಬಿಜಾಪುರ, ಭಾಗದಲ್ಲಿ ಕೋಲಿ, ಕಬ್ಬಲಿಗ, ತಳವಾರರ ಸಮುದಾಯಗಳನ್ನು ಎಸ್’ಟಿ ಗೆ ಸೇರಿಸಬೇಕು ಎನ್ನುವ ಬೇಡಿಕೆ ಇದೆ ಎಂದರು.
ಕೋಲಿ ಸಮಾಜದವರು ತಳವಾರರು ಎಂದೇ ಹೇಳುತ್ತಾರೆ. ಈ ಗೊಂದಲಗಳ ಬಗ್ಗೆಯೂ ತೀರ್ಮಾನವಾಗಬೇಕು. ನಾಯಕ ಸಮುದಾಯದ ತಳವಾಲರರನ್ನು ಮಾತ್ರ ಎಸ್.ಟಿ ಗೆ ಸೇರಿಸಲಾಗಿದ್ದು ಇವೆಲ್ಲಾ ಅತ್ಯಂತ ಸೂಕ್ಷ್ಮ ವಿಚಾರವಾಗಿರುವುದರಿಂದ ಸಂವಿಧಾನ ಮತ್ತು ಕಾನೂನು ತಜ್ಞರ ಜತೆ ಚರ್ಚೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಪರಿಶಿಷ್ಟ ಪಂಗಡಕ್ಕೆ ಸ್ಥಾಪನೆಯಾಗಿರುವ ಪ್ರತ್ಯೇಕ ಸಚಿವಾಲಯಕ್ಕೆ ಕಾರ್ಯದರ್ಶಿ ನೇಮಕಾತಿ ಮಾಡಲಾಗುವುದು. ಬುಡಕಟ್ಟು ಸಲಹಾ ಮಂಡಳಿ ಸ್ಥಾಪನೆ ಬಗ್ಗೆ ವರದಿ ನೀಡಿದಲ್ಲಿ ಪರಿಶೀಲಿಸಿ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಮೀಸಲಾತಿಯನ್ನು ಸಂವಿಧಾನದ 9 ನೇ ಪರಿಚ್ಛೇಧಕ್ಕೆ ಸೇರಿಸಲು ನಮ್ಮ ಸರ್ಕಾರ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡುತ್ತದೆ. ಅದಕ್ಕೆ ಮೊದಲು ಬಿಜೆಪಿ ಸರ್ಕಾರ ಸೃಷ್ಟಿಸಿದ ಎಲ್ಲಾ ಗೊಂದಲಗಳನ್ನು ನಿವಾರಿಸಿಕೊಳ್ಳುವ ಅನಿವಾರ್ಯತೆ ಇದೆ ಎಂದರು.
ಸಹಕಾರ ಸಚಿವ ರಾಜಣ್ಣ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ವಾಲ್ಮೀಕಿ ಸಮುದಾಯದ 14 ಶಾಸಕರು, ಮುಖಂಡರು ಹಾಗೂ ಜನಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post