ಸದಾ ಒತ್ತಡದಲ್ಲಿ ಕಾರ್ಯ ನಿರ್ವಹಿಸುವ ಪತ್ರಕರ್ತರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್. ಗೋಪಿನಾಥ್ ಹೇಳಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆ ವತಿಯಿಂದ ಉಡುಪಿಯ ಪ್ರಸಾದ್ ನೇತ್ರಾಲಯದ ಸಹಯೋಗದಲ್ಲಿ ವಾಣಿಜ್ಯ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ ಉಚಿತ ನೇತ್ರ ತಪಾಸಣೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಪತ್ರಕರ್ತರು ಆರೋಗ್ಯ ಕಾಪಾಡಿಕೊಳ್ಳುವುದರ ಜೊತೆಗೆ ಕಣ್ಣಿನ ಕಾಳಜಿ ವಹಿಸಬೇಕು. ಈ ನಿಟ್ಟಿನಲ್ಲಿ ಪತ್ರಕರ್ತರಿಗೆ ನೇತ್ರ ತಪಾಸಣೆ, ಕನ್ನಡಕ ವಿತರಣೆ ಶಿಬಿರ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಪತ್ರಕರ್ತರ ಸಂಘದ ಜಿಲ್ಲಾ ಉಪಾಧ್ಯಕ್ಷ ಆರ್.ಎಸ್. ಹಾಲಸ್ವಾಮಿ ಮಾತನಾಡಿ, ಪತ್ರಕರ್ತರು ಕಂಪ್ಯೂಟರ್, ಲ್ಯಾಪ್ಟಾಪ್, ಮೊಬೈಲ್ ಸ್ಕ್ರೀನ್ ನೋಡುವುದು, ಪತ್ರಿಕೆಗಳನ್ನು ಓದುವುದರಿಂದ ಕಣ್ಣಿನ ಮೇಲೆ ಒತ್ತಡ ಬೀಳುತ್ತದೆ. ಕಣ್ಣು ಮತ್ತು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು.
ಡಾ. ಅಭಿಷೇಕ್ ಮಾತನಾಡಿ, 40 ವರ್ಷದ ನಂತರ ಸಮೀಪ ದೃಷ್ಟಿ ದೋಷ ಸಾಮಾನ್ಯವಾಗಿದೆ. ಮುಖ್ಯವಾದ ಅಂಗ ಕಣ್ಣಿನ ಬಗ್ಗೆ ಕಾಳಜಿ ವಹಿಸಬೇಕು. ಶಿಬಿರದಲ್ಲಿ ಪತ್ರಕರ್ತರಿಗೆ ನೇತ್ರ ತಪಾಸಣೆ ಮಾಡಿ ಕನ್ನಡಕ ವಿತರಿಸಲಾಗುವುದು ಎಂದರು.
ವೇದಿಕೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ನಿರ್ದೇಶಕ ಎನ್. ರವಿಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಟಿ. ಅರುಣ್, ಡಾ. ಕೃಷ್ಣಕಾಂತ್ ಮೊದಲಾದವರು ಇದ್ದರು.
ಶಿಬಿರದಲ್ಲಿ 80ಕ್ಕೂ ಅಧಿಕ ಪತ್ರಕರ್ತರಿಗೆ ನೇತ್ರ ತಪಾಸಣೆ ಮಾಡಲಾಯಿತು.
Discussion about this post