ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ದಸರಾ ಕ್ರೀಡಾಕೂಟ ವಿವಿಧ ಕ್ರೀಡೆಗಳಿಗೆ ಉತ್ತಮ ವೇದಿಕೆಯಾಗಿದ್ದು, ಕ್ರೀಡಾಪಟುಗಳು ಇದನ್ನು ಸದುಪಯೋಗಪಡೆಸಿಕೊಳ್ಳಬೇಕು ಎಂದು ನಗರಸಭೆ ಅಧ್ಯಕ್ಷೆ ಶೃತಿ ವಸಂತಕುಮಾರ್ ಹೇಳಿದರು.
ನಗರಸಭೆ ವತಿಯಿಂದ ನಾಡಹಬ್ಬ ದಸರಾ ಅಂಗವಾಗಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ಆಯೋಜಿಸಲಾಗಿರುವ ಕ್ರೀಡಾಕೂಟಕ್ಕೆ ಅವರು ಮಂಗಳವಾರ ಚಾಲನೆ ನೀಡಿ ಮಾತನಾಡಿ, ಕೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆ ಅನಾವರಣಗೊಳಿಸುವ ಮೂಲಕ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಪೌರಾಯುಕ್ತ ಎಚ್.ಎಂ. ಮನುಕುಮಾರ್ ಮಾತನಾಡಿ, ಕ್ರೀಡಾಪಟುಗಳಿಗೆ ಶಿಸ್ತು ಬಹಳ ಮುಖ್ಯ. ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ದೇಹ ಸದೃಢವಾಗುವುದರ ಜೊತೆಗೆ ಮಾನಸಿಕವಾಗಿಯೂ ಗಟ್ಟಿಗೊಳ್ಳಲು ಸಾಧ್ಯ ಎಂದರು.
Also read: ಬರ ಹಿನ್ನೆಲೆ | ಒಂದು ವಾರಕ್ಕಿಂತ ಮುನ್ನವೇ ಕಬ್ಬು ಅರೆಯುವಿಕೆ ಆರಂಭ: ಸಚಿವ ಶಿವಾನಂದ ಪಾಟೀಲ್
ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಸುದೀಪ್ ಕುಮಾರ್ ಮಾತನಾಡಿ, ಕ್ರೀಡಾಪಟುಗಳಲ್ಲಿ ಕ್ರೀಡಾ ಮನೋಭಾವ ಬಹಳ ಮುಖ್ಯವಾಗಿದ್ದು, ಕ್ರೀಡೆಯಲ್ಲಿ ಸೋಲು ಗೆಲುವಿಗಿಂತಲೂ ಪಾಲ್ಗೊಳ್ಳುವಿಕೆ ಮುಖ್ಯ ಎಂದರು.
ಇದಕ್ಕೂ ಮೊದಲು ಏಕಲವ್ಯ ಪ್ರಶಸ್ತಿ ಪುರಸ್ಕೃತ ಖೋ ಖೋ ಕ್ರೀಡಾಪಟು ಮುನೀರ್ ಬಾಷಾ ನಗರಸಭೆ ಮುಂಭಾಗದಿಂದ ಕನಕಮಂಟಪ ಮೈದಾನದವರೆಗೂ ಕ್ರೀಡಾಜ್ಯೋತಿಯೊಂದಿಗೆ ಆಗಮಿಸಿ ವೇದಿಕೆಯಲ್ಲಿ ಹಸ್ತಾಂತರಿಸಿದರು. ಕ್ರೀಡಾ ಪ್ರತಿಜ್ಞೆ ಸ್ವೀಕರಿಸಲಾಯಿತು.
ವೇದಿಕೆಯಲ್ಲಿ ನಗರಸಭೆ ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ದಸರಾ ಕ್ರೀಡಾ ಸಮಿತಿ ಅಧ್ಯಕ್ಷ ಚನ್ನಪ್ಪ ಹಾಗು ವಿವಿಧ ಸಮಿತಿಗಳ ಅಧ್ಯಕ್ಷರು, ಸದಸ್ಯರಾದ ಬಸವರಾಜ್, ಜಾರ್ಜ್, ಆರ್. ಮೋಹನ್ ಕುಮಾರ್, ಬಷೀರ್ ಅಹಮದ್, ಅನುಸುಧಾ ಮೋಹನ್ ಪಳನಿ, ಲತಾ ಚಂದ್ರಶೇಖರ್, ಪ್ರೇಮ ಬದರಿನಾರಾಯಣ, ಶಶಿಕಲಾ ನಾರಾಯಣಪ್ಪ, ಗೀತಾ ರಾಜ್‌ಕುಮಾರ್, ಅನುಪಮ ಚನ್ನೇಶ್, ಕಾಂತರಾಜ್, ಕೋಟೇಶ್ವರರಾವ್, ಉದಯ್‌ಕುಮಾರ್, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಪ್ರಭು, ದೈಹಿಕ ಶಿಕ್ಷಣ ಶಿಕ್ಷಕರಾದ ಶಿವಲಿಂಗೇಗೌಡ, ಚರಣ್ ಸಿಂಗ್, ಇಮ್ರಾನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post