ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕ್ರಿಸ್ ಮಸ್ ಹಬ್ಬದ ವೇಳೆ ಸರಣಿ ರಜೆಯಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್’ಆರ್’ಟಿಸಿ #KSRTC ವತಿಯಿಂದ 1000 ಹೆಚ್ಚುವರಿ ಬಸ್ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.
ಈ ಕುರಿತಂತೆ ನಿಗಮ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದ್ದು, ಡಿ.22ರಿಂದ ಡಿ.25ರವರೆಗೂ ರಾಜ್ಯ ಹಾಗೂ ಅಂತಾರಾಜ್ಯ ನಗರಗಳಿಗೆ ಪ್ರಯಾಣಿಕರ ಅನುಕೂಲಕ್ಕಾಗಿ ಒಂದು ಸಾವಿರ ಹೆಚ್ಚುವರಿ ಬಸ್’ಗಳು ಸಂಚರಿಸಲಿವೆ.
ಎಲ್ಲೆಲ್ಲಿಗೆ ಹೆಚ್ಚುವರಿ ಬಸ್ ಸಂಚಾರ?
ಬೆಂಗಳೂರಿನ #Bengaluru ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಸಾರಿಗೆ ತೆರಳಿದೆ.
ಮೈಸೂರು #Mysore ರಸ್ತೆ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆಗೆ.
ಶಾಂತಿನಗರದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ವಿಶೇಷ ಬಸ್’ಗಳು ಸಂಚರಿಸಲಿವೆ.
ಮುಂಗಡ ಟಿಕೇಟ್ ಬುಕ್ ಮಾಡಿ
ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯವನ್ನು ಕಲ್ಪಿಸಲಾಗಿದೆ.
ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‌ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ.
ಇ-ಟಿಕೇಟ್ ಬುಕಿಂಗ್‌ನ್ನು www.ksrtc.karnataka.gov.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ.
ಶೇ.10ರವರೆಗೂ ರಿಯಾಯ್ತಿ
ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ಅಂತರರಾಜ್ಯದಲ್ಲಿ ಇರುವ 691 ಗಣಕೀಕೃತ ಬುಕಿಂಗ್ ಕೌಂಟರ್‌ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.
ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇ.5 ರಷ್ಟು ರಿಯಾಯ್ತಿ ದೊರೆಯುತ್ತದೆ. ಅಲ್ಲದೇ, ಹೋಗುವ ಬರುವ ಪ್ರಯಾಣದ ಟಿಕೇಟನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇ. 10 ರಷ್ಟು ರಿಯಾಯ್ತಿ ನೀಡಲಾಗುತ್ತದೆ.
ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೇರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ.
ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್ಜಾಲ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್’ಸೈಟ್’ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post