ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕಲ್ಬುರ್ಗಿ ಜಿಲ್ಲೆ ಚಿಂಚೋಳಿಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಸೇರಿದ ಸಿದ್ದಸಿರಿ ಸೌಹಾರ್ದ ಸಹಕಾರಿ ಸಕ್ಕರೆ ಕಾರ್ಖಾನೆಗೆ ಕಾರ್ಯಾಚರಣೆ ಸಮ್ಮತಿ ಪತ್ರ ನೀಡುವಂತೆ ಹೈಕೋರ್ಟ್ ತೀರ್ಪನ್ನು ಪರಿಶೀಲಿಸಿ, ಕಾಲಮಿತಿಯೊಳಗೆ ಕ್ರಮ ವಹಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ #Minister Eshwar Khandre ತಿಳಿಸಿದ್ದಾರೆ.
ವಿಧಾನಸೌಧದಲ್ಲಿಂದು ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರ ನೀಡಿದ ಅವರು, ಸಿದ್ದಸಿರಿ ಕಾರ್ಖಾನೆ ಈ ಹಿಂದೆ ಅನುಮತಿ ಇಲ್ಲದೆ ಬಾಯ್ಲರ್ ಸ್ಥಾಪನೆ ಮಾಡಿದ್ದು, ತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣ ಹಂತದಲ್ಲಿದ್ದರೂ ನಿಯಮ ಉಲ್ಲಂಘಿಸಿ ಲಕ್ಷಾಂತರ ಟನ್ ಕಬ್ಬು ಅರೆದಿತ್ತು ಹೀಗಾಗಿ ಮಂಡಳಿ ನಿಯಮಾನುಸಾರ ಕ್ರಮ ವಹಿಸಿತ್ತು ಎಂದರು.

Also read: ಶರೀರ ಭಗವಂತ ನೀಡಿದ ಅನರ್ಘ್ಯ ರತ್ನ: ರಾಘವೇಶ್ವರ ಶ್ರೀ
ಪೂರ್ವಾನುಮತಿ ಇಲ್ಲದೆ ಕಾರ್ಖಾನೆ ಮತ್ತೆ ಲಕ್ಷಾಂತರ ಟನ್ ಕಬ್ಬು ನುರಿಸಿ ಎಥನಾಲ್ ಉತ್ಪಾದಿಸಿರುವುದೇ ಅಲ್ಲದೆ, ನದಿಗೆ ತ್ಯಾಜ್ಯ ಹರಿಯಬಿಟ್ಟಿರುವ ಆರೋಪವೂ ಇದೆ. ಇದು ಜಲ ಕಾಯಿದೆ ಮತ್ತು ಪರಿಸರ ಸಂರಕ್ಷಣಾ ಕಾಯಿದೆಯ ಉಲ್ಲಂಘನೆಯಾಗುತ್ತದೆ ಎಂದರು.
ಪ್ರಸ್ತುತ ಹೈಕೋರ್ಟ್ ಆದೇಶ ನೀಡಿದೆ. ನಿನ್ನೆಯಷ್ಟೇ ಯತ್ನಾಳ್ ಅವರು ಕೋರ್ಟ್ ಆದೇಶದ ದೃಢೀಕೃತ ಪ್ರತಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಮಂಡಳಿ, ಕಾನೂನು ವಿಭಾಗದೊಂದಿಗೆ ಚರ್ಚಿಸಿ ಮುಂದಿನ ಕ್ರಮ ವಹಿಸುತ್ತದೆ. ನ್ಯಾಯಾಲಯ 4 ವಾರ ಕಾಲಾವಕಾಶ ನೀಡಿರುವಾಗ ಯತ್ನಾಳ್ ಅವರು ಒಂದೇ ದಿನದಲ್ಲಿ ಅನುಮತಿ ಪತ್ರ ನೀಡಬೇಕು ಎಂದು ಪ್ರತಿಭಟನೆ ನಡೆಸುತ್ತಿರುವುದು ಸರಿಯಲ್ಲ. ಮಂಡಳಿ ಅಧಿಕಾರಿಗಳಿಗೆ ಕೆಲಸ ಮಾಡಲು ಕಾಲಾವಕಾಶ ನೀಡಬೇಕು ಎಂದು ಹೇಳಿದರು.

ತಾವು ಯಾವುದೇ ಕಾರಣಕ್ಕೂ ದ್ವೇಷದ ರಾಜಕಾರಣ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ ಈಶ್ವರ ಖಂಡ್ರೆ, ಬಿಜೆಪಿ ಶಾಸಕರು ಕೂಡ ಇದರಲ್ಲಿ ರಾಜಕೀಯ ಬೆರೆಸುವುದು ಸರಿಯಲ್ಲ ಎಂದು ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post