ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ಕಾಂಗ್ರೆಸ್ ಸರ್ಕಾರ ಪಡಿತರ ಚೀಟಿಗಳನ್ನು ಕಡಿತ ಮಾಡುತ್ತಿರುವುದನ್ನು ಗಮನಿಸಿದರೆ ರಾಜ್ಯದ ಆರ್ಥಿಕ ಸ್ಥಿತಿ ದಿವಾಳಿಯಾಗಿರುವ ಸೂಚನೆ ನೀಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ #Pralhad Joshi ವ್ಯಂಗ್ಯವಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳನ್ನು #Guarantee Project ನಿರ್ವಹಿಸಲು ವಿಫಲವಾಗುತ್ತಿರುವ ಹಿನ್ನೆಲೆಯಲ್ಲಿ ಸಾಲು ಸಾಲಾಗಿ ಯೋಜನೆಗಳನ್ನು ಹಿಂಪಡೆಯುತ್ತಿದೆ ಎಂದರು.
ಕಾಂಗ್ರೆಸ್ ಸರಕಾರ 10 ಕೆ.ಜಿ ಅಕ್ಕಿ ಘೋಷಣೆ ಮಾಡಿದರೂ ಭರವಸೆ ಈಡೇರಿಸುವಲ್ಲಿ ವಿಫಲವಾಗಿದೆ. ರಾಜ್ಯದಲ್ಲಿ ಪ್ರಸ್ತುತ ಕೇಂದ್ರ ನೀಡುತ್ತಿರುವ 5 ಕೆಜಿ ಅಕ್ಕಿಯನ್ನು ಮಾತ್ರ ವಿತರಿಸಲಾಗುತ್ತಿದೆ. ಕೇಂದ್ರ ಸರ್ಕಾರವು ಆಹಾರ ಭದ್ರತೆಗಾಗಿ ವಾರ್ಷಿಕ 2.11 ಲಕ್ಷ ಕೋಟಿ ರೂಪಾಯಿಗಳನ್ನು ಖರ್ಚು ಮಾಡುತ್ತದೆ, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿಯಲ್ಲಿ ಶೇ.50ರಷ್ಟು ನಗರ ಮತ್ತು ಶೇ.75ರಷ್ಟು ಗ್ರಾಮೀಣ ಜನರಿಗೆ ಉಚಿತ ಆಹಾರವನ್ನು ಒದಗಿಸುತ್ತದೆ. ಪ್ರತಿಯೊಬ್ಬ ಅರ್ಹ ಪಡಿತರರಿಗೂ 5 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿದೆ. ಕನಿಷ್ಠ ಬೆಂಬಲ ಬೆಲೆಯಲ್ಲಿ ಗೋಧಿ, ಭತ್ತ ಹಾಗೂ ಇತರೆ ಕೃಷಿ ಉತ್ಪನ್ನಗಳನ್ನು ಖರೀದಿ ಮಾಡಲಾಗುತ್ತಿದೆ. ಇಷ್ಟಾದರೂ ದಿಢೀರನೇ ಬಿಪಿಎಲ್ ಕಾರ್ಡ್ ಏಕೆ ಕಡಿತ ಮಾಡಲಾಗುತ್ತಿದೆ ಎಂಬುದೇ ಅರ್ಥವಾಗುತ್ತಿಲ್ಲ. ಈ ಕುರಿತು ರಾಜ್ಯದ ಆಹಾರ ಸಚಿವರೊಂದಿಗೆ ಚರ್ಚೆ ನಡೆಸುತ್ತೇನೆಂದು ತಿಳಿಸಿದರು.
ಗೃಹ ಲಕ್ಷ್ಮಿ ಯೋಜನೆ #Gruhalakshmi ಕುರಿತು ಮಾತನಾಡಿ, ಒಂದು ಕಡೆ ಸರ್ಕಾರ ಸಹಾಯಧನ ನೀಡುತ್ತಿದೆ. ಮತ್ತೊಂದೆಡೆ ವಿದ್ಯುತ್ ದರವನ್ನು ಹೆಚ್ಚಿಸಿದೆ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಸಮರ್ಪಕವಾಗಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿಲ್ಲ. ಕೊಡಲೂ ಆಗದೆ, ಬಿಡಲೂ ಆಗದ ಸ್ಥಿತಿಯಲ್ಲಿದ್ದು, ಬಹುತೇಕ ಎಲ್ಲಾ ಗ್ಯಾರಂಟಿಗಳು ಅರ್ಧಕ್ಕೆ ನಿಂತಿವೆ. ಇದನ್ನೆಲ್ಲಾ ನೋಡಿದರೆ ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿಯತ್ತ ಮುಖ ಮಾಡಿದೆ ಎಂಬುದು ಗೊತ್ತಾಗುತ್ತಿದೆ ಎಂದು ಕಿಡಿಕಾರಿದರು.
ಶಕ್ತಿ ಯೋಜನೆಯನ್ನು #Shakthi Yojane ಟೀಕಿಸಿದ ಅವರು, ಹಾಗೂ ರಾಜ್ಯದ ಹಲವಾರು ಭಾಗಗಳಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳು ಸೂಕ್ತ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ. ಹಲವು ಮಾರ್ಗಗಳಲ್ಲಿ ಸೇವೆ ನಿಲ್ಲಿಸಲಾಗಿದೆ ಎಂದು ವಾಗ್ದಾಳಿ ನಡೆಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post