ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಲ್ಲಿನ ವಿಮಾನ ನಿಲ್ದಾಣಕ್ಕೆ ಹೊಂದಿಕೊಂಡಂತಿರುವ ಪ್ರದೇಶದಲ್ಲಿ ಹೊಟೇಲ್, ಮಾಲ್ ಹಾಗೂ ವಾಣಿಜ್ಯ ಸಂಕೀರ್ಣಗಳ ನಿರ್ಮಾಣಕ್ಕೆ ಕನಿಷ್ಠ 30 ವರ್ಷಗಳ ಅವಧಿಗೆ ಖಾಸಗಿಯವರಿಗೆ ಗುತ್ತಿದೆ ಆಧಾರದ ಮೇಲೆ ನೀಡಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ್ ಹೇಳಿದರು.
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ #Shivamogga Airport ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಗಳನ್ನು ಅವಲೋಕಿಸಿದ ನಂತರ ಅವರು ಮಾತನಾಡಿದರು.
ವಿಮಾನ ನಿಲ್ದಾಣಕ್ಕೆ ಕಾಯ್ದಿರಿಸಲಾಗಿದ್ದ ವಿಶಾಲವಾದ 780 ಎಕರೆ ಭೂ ಪ್ರದೇಶದಲ್ಲಿ ಸುಮಾರು 111 ಎಕರೆ ಭೂ ಪ್ರದೇಶವನ್ನು ಹೋಟೆಲ್, ಮಾಲ್ ಗಳ ನಿರ್ಮಾಣ ಮತ್ತು ವಾಣಿಜ್ಯ ಸಂಕೀರ್ಣಗಳ ನಿರ್ಮಾಣಕ್ಕೆ ಕನಿಷ್ಠ 30ವರ್ಷಗಳ ಅವಧಿಗೆ ಖಾಸಗಿಯವರಿಗೆ ಗುತ್ತಿಗೆ ಆಧಾರದ ಮೇಲೆ ನೀಡಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.
ವಿಮಾನ ನಿಲ್ದಾಣಕ್ಕೆ ಹೊಂದಿಕೊಂಡ ಪ್ರದೇಶದಲ್ಲಿ ಪ್ರಯಾಣಿಕರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವುದರಿಂದಾಗಿ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದರು.
ಪ್ರಮುಖವಾಗಿ ಇಲ್ಲಿನ ಅನೇಕ ಬಾಕಿ ಇರುವ ಕೆಲಸಗಳನ್ನು ಗಮನಿಸಲಾಗಿದೆ. ಈ ಸಂಬಂಧ ಅ.17ರಂದು ಬೆಂಗಳೂರಿನಲ್ಲಿ ನಡೆಯಲಿರುವ ಆಡಳಿತ ಮಂಡಳಿ ಸಭೆಯಲ್ಲಿ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದರು.
ವಿಮಾನ ನಿಲ್ದಾಣದಲ್ಲಿ ಬಾಕಿ ಇರುವ ಕೆಲವು ಸಿವಿಲ್ ಕಾಮಗಾರಿಗಳು, ಲೈಟಿಂಗ್ ವ್ಯವಸ್ಥೆ ಮತ್ತು ನೈಟ್ ಲ್ಯಾಂಡಿಂಗ್’ಗೆ ಸಂಬಂಧಿಸಿದ ಕಾಮಗಾರಿಗಳಿಗಾಗಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಈ ಕಾಮಗಾರಿ ಅತ್ಯಲ್ಪ ಅವಧಿಯಲ್ಲಿ ಪೂರ್ಣಗೊಂಡು ಸಾರ್ವಜನಿಕ ಸೇವೆಗೆ ಮುಕ್ತವಾಗಲಿದೆ ಎಂದರು.
ವಿಮಾನ ನಿಲ್ದಾಣದಲ್ಲಿ ಸದ್ಯ ಹಗಲು ಮಾತ್ರ ವಿಮಾನಯಾನ ಸೇವೆ ಲಭ್ಯವಿದ್ದು, ಮುಂದಿನ ನಾಲ್ಕಾರು ತಿಂಗಳಲ್ಲಿ ರಾತ್ರಿ ವಿಮಾನ ಸಂಚಾರಕ್ಕೂ ಕ್ರಮ ಕೈಗೊಳ್ಳಲಾಗುವುದು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post