ಕಲ್ಪ ಮೀಡಿಯಾ ಹೌಸ್ | ಬೆಂಗಳೂರು/ಚಿತ್ರದುರ್ಗ |
ಖಾಸಗಿ ಟ್ರಾವೆಲ್ ಬಸ್‌ಗೆ ಕಂಟೇನರ್ ಲಾರಿ ಡಿಕ್ಕಿ #Chitradurga Bus Accident ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು, 11 ಮಂದಿ ಸಜೀವ ದಹನವಾಗಿರುವ #11 people burned alive ಘಟನೆ ಜಿಲ್ಲೆಯ ಹಿರಿಯೂರಿನ ಜವನಗೊಂಡನಹಳ್ಳಿ ಬಳಿ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿ 48ರಲ್ಲಿ #NH 48 ಬುಧವಾರ ತಡರಾತ್ರಿ ಖಾಸಗಿ ಸ್ಲೀಪರ್ ಕೋಚ್ ಬಸ್ ಬೆಂಗಳೂರಿನಿಂದ ಶಿವಮೊಗ್ಗದ ಮೂಲಕ ಗೋಕರ್ಣಕ್ಕೆ ಹೊರಟಿತ್ತು. ಈ ಸಂದರ್ಭದಲ್ಲಿ ಹಿರಿಯೂರಿನ ಜವನಗೊಂಡನಹಳ್ಳಿಯ ಗೊರ್ಲತ್ತು ಕ್ರಾಸ್ ಬಳಿ ಕಂಟೇನರ್ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಲಾರಿ ಹಾಗೂ ಬಸ್ ಎರಡೂ ಬೆಂಕಿ ಹೊತ್ತಿಕೊಂಡಿದ್ದವು. ಬಸ್ ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಅದರಲ್ಲಿದ್ದ 9 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಲಾರಿ ಚಾಲಕ ಕೂಡ ಸಜೀವ ದಹನವಾಗಿದ್ದಾನೆ. ಬಸ್ನಲ್ಲಿ ಸುಮಾರು 30 ಮಂದಿ ಪ್ರಯಾಣಿಕರು ಇದ್ದರು ಎಂದು ತಿಳಿದುಬಂದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ಮೋದಿ ತೀವ್ರ ಸಂತಾಪ
ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ 11 ಮಂದಿ ಸಜೀವ ದಹನಗೊಂಡ ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು #PM Narendra Modi ತೀವ್ರ ಸಂತಾಪ ಸೂಚಿಸಿದ್ದಾರೆ.
ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು. ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ವಿಷಾದನೀಯ ಎಂದು ಹೇಳಿದ್ದಾರೆ.
ಅಪಘಾತದ ಬಗ್ಗೆ ಸೂಕ್ತ ತನಿಖೆ ನಡೆಸಿ, ಕಾರಣವನ್ನು ಪತ್ತೆಹಚ್ಚಲಾಗುವುದು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅಪಘಾತದಲ್ಲಿ ಮಡಿದ ಕುಟುಂಬಸ್ಥರ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆಂದು ತಿಳಿಸಿದ್ದಾರೆ.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿ, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಬಸ್ ಮತ್ತು ಟ್ರಕ್ ನಡುವೆ ಹಿರಿಯೂರು ಬಳಿ ಅಪಘಾತ ಸಂಭವಿಸಿ ಹಲವರು ಸಜೀವ ದಹನಗೊಂಡಿರುವ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ಮೃತಪಟ್ಟವರಿಗೆ ನನ್ನ ಸಂತಾಪಗಳನ್ನು ತಿಳಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಇಂತಹ ದುರಂತಗಳು ಮರುಕಳಿಸದಿರಲಿ ಎಂದು ಹೇಳಿದ್ದಾರೆ.
ಮೃತರ ಕುಟುಂಬಕ್ಕೆ 2 ಲಕ್ಷ ರೂ.ಪರಿಹಾರ ಘೋಷಣೆ
ಈ ನಡುವೆ ಸಾಮಾಜಿಕ ಜಾಲತಾಣ ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಮೃತರ ಕುಟುಂಬಕ್ಕೆ ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ.ಪರಿಹಾರ ಘೋಷಣೆ ಮಾಡಿದ್ದಾರೆ.
ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿದೆ ಎಂದು ತಿಳಿದು ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಮೃತರ ಸಂಬಂಧಿಕರಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿ (ಪಿಎಂಎನ್‌ಆರ್‌ಎಫ್)ಯಿಂದ 2 ಲಕ್ಷ ರೂ. ತಾತ್ಕಾಲಿಕ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ಘೋಷಣೆ
ಏತನ್ಮಧ್ಯೆ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.50,000 ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ.
ಘಟನೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು, ಸಂತ್ರಸ್ತರ ನೆರವಿಗೆ ನಿಲ್ಲುವಂತೆ ಸೂಚಿಸಿದ್ದೇನೆ. ಈ ಬಗ್ಗೆ ತನಿಖೆ ನಡೆಸಿ, ಅಪಘಾತಕ್ಕೆ ಕಾರಣ ಪತ್ತೆ ಮಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಘಟನೆಯಲ್ಲಿ ಗಾಯಗೊಂಡವರು ಆದಷ್ಟು ಶೀಘ್ರ ಗುಣಮುಖರಾಗಲಿ ಹಾಗೂ ಮೃತರ ಆತ್ಮಕ್ಕೆ ಶಾಂತಿ ಲಭಿಸಲಿ ಎಂದು ಮತ್ತೊಮ್ಮೆ ಪ್ರಾರ್ಥಿಸುತ್ತೇನೆಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















