ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲಾ ಆರ್ಯ ಈಡಿಗರ ಸಂಘದವ ತಿಯಿಂದ ಬಾಪೂಜಿನಗರದ ಈಡಿಗರ ಬಾಲಕರ ವಿದ್ಯಾರ್ಥಿ ನಿಲಯದ ಹೆಚ್ಚುವರಿ ಕಟ್ಟಡದ ಶಂಕುಸ್ಥಾಪನಾ ಸಮಾರಂಭ ಮಾ.3ರಂದು ಬೆಳಿಗ್ಗೆ 10.30ಕ್ಕೆ ಜರುಗಲಿದೆ ಎಂದು ಜಿಲ್ಲಾ ಆರ್ಯ ಈಡಿಗರ ಸಂಘದ ಅಧ್ಯಕ್ಷ ಆರ್. ಶ್ರೀಧರ್ ಹುಲ್ತಿಕೊಪ್ಪ ತಿಳಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಈಡಿಗರ ಬಾಲಕರ ವಿದ್ಯಾರ್ಥಿನಿಲಯ ಬಾಪೂಜಿ ನಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅದರ ಮೇಲಂತಸ್ತಿನಲ್ಲಿ 1.25 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ಈ ಹೆಚ್ಚುವರಿ ಕಟ್ಟಡದ ನಿರ್ಮಾಣ ನಡೆಯಲಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆಯ ಸಚಿವ ಎಸ್.ಮಧು ಬಂಗಾರಪ್ಪ ಹಾಗೂ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಸ್ಥಾನದ ಧರ್ಮದರ್ಶಿ ಎಸ್.ರಾಮಪ್ಪ ಅವರು ಉಪಸ್ಥಿತರಿರುವರು ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಕಾಂಗ್ರೆಸ್ಸಿನ ಹಿರಿಯ ಮುಖಂಡ, ಎಂ.ಎಲ್.ಸಿ. ಬಿ.ಕೆ.ಹರಿಪ್ರಸಾದ್, ಸಂಸದ ಬಿ.ವೈ.ರಾಘವೇಂದ್ರ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ, ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಬಲ್ಕೀಶ್‍ಬಾನು, ಡಿ.ಎಸ್.ಅರುಣ್, ಡಾ. ಧನಂಜಯ ಸರ್ಜಿ ಆಗಮಿಸುವರು. ಆರ್ಯ ಈಡಿಗರ ಸಂಘದ ಜಿಲ್ಲಾಧ್ಯಕ್ಷ ಆರ್.ಶ್ರೀಧರ್ ಹುಲ್ತಿಕೊಪ್ಪ ಅಧ್ಯಕ್ಷತೆ ವಹಿಸುವರು ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಸಿ. ರಾಮಚಂದ್ರ, ಖಜಾಂಚಿ ಹೆಚ್.ರಾಮಪ್ಪ ಕಾಗೋಡು, ಪ್ರೊ.ಕಲ್ಲಣ್ಣ, ಪರಶುರಾಮಪ್ಪ, ಜಿ.ಡಿ.ಮಂಜುನಾಥ್, ಉದಯ್‍ಕುಮಾರ್, ರಮೇಶ್, ರಾಜಪ್ಪ ತೇಕ್ಲೆ, ಮೊದಲಾದವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















