ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹ ಧಾಮದಲ್ಲಿ #Thyavarekoppa Tiger and Lion Safari ಕರ್ತವ್ಯ ನಿರ್ವಹಿಸುತ್ತಿದ್ದ ಪಶುವೈದ್ಯೆಯೊಬ್ಬರು ನೀರಾನೆ ದಾಳಿಯಿಂದ #Hippopotamus attack ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಬೆಂಗಳೂರು ಮೂಲದ ಡಾ. ಸಮೀಕ್ಷಾ ರೆಡ್ಡಿ (27) #Dr. Sameeksha Reddy ಮೃತ ದುರ್ದೈವಿ.
ಡಾ. ಸಮೀಕ್ಷಾ ಅವರು ಸಫಾರಿಯಲ್ಲಿ ಪಶುವೈದ್ಯ ಅಧಿಕಾರಿಯಾಗಿ ಆಯ್ಕೆಯಾಗಿ ತರಬೇತಿ ಪಡೆಯುತ್ತಿದ್ದರು. ಗುರುವಾರ ರಾತ್ರಿ ಅವರು ಸನ್ ಕಾನರ್ ಹಕ್ಕಿಯ ಚಿಕಿತ್ಸೆಗಾಗಿ ಮೃಗಾಲಯದ ಆಸ್ಪತ್ರೆಗೆ ತೆರಳಿದ್ದರು. ಬಳಿಕ ಗರ್ಭಿಣಿ ನೀರಾನೆಯ ದೇಹದ ಉಷ್ಣತೆಯನ್ನು ಥರ್ಮಲ್ ಕ್ಯಾಮೆರಾ ಮೂಲಕ ಪರೀಕ್ಷಿಸಲು ಅದರ ಆವರಣದ ಒಳಗೆ ಹೋದಾಗ, ನೀರಾನೆ ಹಠಾತ್ತಾಗಿ ಅವರ ಮೇಲೆ ದಾಳಿ ಮಾಡಿದೆ.
ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಶಿವಮೊಗ್ಗದ ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ಶಿವಮೊಗ್ಗ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉನ್ನತ ಮಟ್ಟದ ತನಿಖೆಗೆ ಆದೇಶ, ಸಚಿವರ ಸಂತಾಪ
ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹ ಧಾಮದಲ್ಲಿ ಚಿಕಿತ್ಸೆ ನೀಡಲು ತೆರಳಿದ್ದ ಸಂದರ್ಭ ನೀರಾನೆ ದಾಳಿಯಿಂದ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಮೃತಪಟ್ಟ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ, ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ.
ದುರಂತದ ಕುರಿತು ಹಿರಿಯ ಪಶುವೈದ್ಯರು ಹಾಗೂ ಅರಣ್ಯಾಧಿಕಾರಿಗಳ ತಂಡವು ಕೂಲಂಕಷವಾಗಿ ತನಿಖೆ ನಡೆಸಲಿದೆ. ಘಟನೆ ಸಂಭವಿಸಲು ಕಾರಣಗಳೇನು ಮತ್ತು ಸುರಕ್ಷತಾ ಲೋಪಗಳಿವೆಯೇ ಎಂಬ ಬಗ್ಗೆ ಪರಾಮರ್ಶಿಸಿ, ಮುಂದಿನ 7 ದಿನಗಳಲ್ಲಿ ವರದಿ ಸಲ್ಲಿಸಬೇಕು ಎಂದು ಸಚಿವರು ಸೂಚಿಸಿದ್ದಾರೆ.
ವನ್ಯಜೀವಿಗಳಿಗೆ ಚಿಕಿತ್ಸೆ ನೀಡುವ ಸಂದರ್ಭ ಪಾಲಿಸಬೇಕಾದ ಪ್ರಮಾಣಿತ ಕಾರ್ಯಚರಣೆ ವಿಧಾನವನ್ನು ರಾಜ್ಯದ ಎಲ್ಲಾ ಮೃಗಾಲಯಗಳಲ್ಲಿ ಕಡ್ಡಾಯವಾಗಿ ಜಾರಿಗೊಳಿಸಬೇಕು. ವೈದ್ಯರು ಮತ್ತು ಸಿಬ್ಬಂದಿ ವನ್ಯಜೀವಿಗಳ ಹತ್ತಿರ ಹೋಗುವಾಗ ಹೆಚ್ಚಿನ ಜಾಗರೂಕತೆ ವಹಿಸಬೇಕು ಎಂದು ಸಚಿವರು ನಿರ್ದೇಶನ ನೀಡಿದ್ದಾರೆ.
ಮೃತ ವೈದ್ಯೆಯ ಕುಟುಂಬಕ್ಕೆ ನಿಯಮಾನುಸಾರ ತಕ್ಷಣವೇ ಪರಿಹಾರ ವಿತರಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದು ದುರದೃಷ್ಟಕರ ಘಟನೆ. ಪ್ರತಿ ಜೀವವೂ ಅಮೂಲ್ಯ. ಸರ್ಕಾರವು ಮೃತ ವೈದ್ಯರ ಕುಟುಂಬದ ಪರವಾಗಿ ನಿಲ್ಲಲಿದೆ, ಎಂದು ಸಂತಾಪ ಸೂಚಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















