ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ದಾವಣಗೆರೆಯಿಂದ ಭದ್ರಾವತಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಕ್ಕೆ ಬಿದ್ದಿರುವ ಘಟನೆ ಭದ್ರಾವತಿ ತಾಲೂಕಿನ ವೀರಾಪುರ ಸಮೀಪದ ಕಾಗೆಹಳ್ಳದಲ್ಲಿ ಇಂದು ಸಂಭವಿಸಿದೆ.
ಚಲಿಸುತ್ತಿದ್ದ ಖಾಸಗಿ ಬಸ್ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಪರಿಣಾಮ ಬಸ್ಸಿನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚನ್ನಗಿರಿಯಿಂದ ಭದ್ರಾವತಿಗೆ ಬರುತ್ತಿದ್ದ ಶ್ರೀ ರೇಣುಕಾಂಬ’ ಹೆಸರಿನ ಖಾಸಗಿ ಬಸ್ ಕಾಗೆಹಳ್ಳ ಗ್ರಾಮದ ಸಮೀಪವಿರುವ ಹಳ್ಳಕ್ಕೆ ಬಿದ್ದಿದೆ. ಬಸ್ ಚಲಿಸುತ್ತಿದ್ದ ವೇಳೆಯೇ ಈ ಅವಘಡ ಸಂಭವಿಸಿದ್ದು, ಹಳ್ಳಕ್ಕೆ ಬಿದ್ದ ರಭಸಕ್ಕೆ ಬಸ್ ಜಖಂಗೊಂಡಿದೆ.
ಅಪಘಾತದ ಸಮಯದಲ್ಲಿ ಬಸ್ಸಿನಲ್ಲಿ ಸುಮಾರು 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಈ ಪೈಕಿ ಎಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ತಕ್ಷಣವೇ ಸ್ಥಳೀಯರ ನೆರವಿನೊಂದಿಗೆ ಭದ್ರಾವತಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬಸ್ ಚಾಲಕನ ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಈ ಅಪಘಾತಕ್ಕೆ ನೇರ ಕಾರಣ ಎಂದು ಸ್ಥಳೀಯರು ಹಾಗೂ ಪ್ರಯಾಣಿಕರು ದೂರಿದ್ದಾರೆ.
ಕಿರಿದಾದ ರಸ್ತೆಯಲ್ಲಿ ವೇಗವಾಗಿ ಬಂದ ಚಾಲಕ, ನಿಯಂತ್ರಣ ಕಳೆದುಕೊಂಡು ಬಸ್ ಹಳ್ಳಕ್ಕೆ ಬಿದ್ದಿದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕೂಡಲೇ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news





















