ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಮಹಿಳೆಯೊಬ್ಬರ ಮನೆಗೆ ನುಗ್ಗಿ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿ, ಕೊಲೆ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಎರಡು ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ತಲಾ 1 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
ಜೂನ್ 6, 2023ರಂದು ರಾತ್ರಿ ಅಂತರಗಂಗೆ ಗ್ರಾಮದ ನಿವಾಸಿಗಳಾದ ನವೀನ (25), ಮನು (31), ಸಂತೋಷ ಕೆ (31), ಮಂಜುನಾಥ ವಿ (33) ಹಾಗೂ ಅಭಿಷೇಕ್ (24) ಎಂಬುವವರು ಅದೇ ಗ್ರಾಮದ ರಾಧಾ ಎಂಬುವವರ ಮನೆಗೆ ಅಕ್ರಮವಾಗಿ ನುಗ್ಗಿದ್ದರು. ಈ ವೇಳೆ ಮಹಿಳೆಯ ಮೇಲೆ ಹಲ್ಲೆ ನಡೆಸಿ, ಅವಾಚ್ಯವಾಗಿ ನಿಂದಿಸಿರುವುದಲ್ಲದೆ, ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿದ್ದರು. ಈ ಕುರಿತು ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಎಎಸ್‌ಪಿ ಜಿತೇಂದ್ರ ಕುಮಾರ್ ದಯಾಮ ಅವರು ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಅವರು, ಆರೋಪಿಗಳ ಮೇಲಿನ ಅಪರಾಧ ದೃಢಪಟ್ಟ ಹಿನ್ನೆಲೆಯಲ್ಲಿ ಐವರಿಗೂ ತಲಾ 2 ವರ್ಷ ಜೈಲು ಶಿಕ್ಷೆ ಹಾಗೂ ಒಟ್ಟು 1,00,000 ರೂಪಾಯಿ ದಂಡ ವಿಧಿಸಿ ಆದೇಶಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















