ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ High Court bench ಸ್ಥಾಪಿಸುವಂತೆ ಬುಧವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ CM Siddaramaiah ಅವರನ್ನು ಭೇಟಿಯಾಗಿ ಪೀಠ ಸ್ಥಾಪನೆಯ ಅವಶ್ಯಕತೆಯ ಮನವರಿಕೆ ಮಾಡಿಕೊಟ್ಟಿದ್ದು, ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಜಿ.ಆರ್. ರಾಘವೇಂದ್ರ ಸ್ವಾಮಿ ತಿಳಿಸಿದರು.
ಅವರು ಇಂದು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ವಕೀಲರ ಸಂಘದಿಂದ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಆಗ್ರಹಿಸಿ ಹಮ್ಮಿಕೊಂಡ ನಾಲ್ಕನೇ ದಿನದ ಧರಣಿಯಲ್ಲಿ ಧರಣಿನಿರತರನ್ನುದ್ದೇಶಿಸಿ ಮಾತನಾಡಿದರು.
ಮಂಗಳೂರು ಪೀಠಕ್ಕೆ ಶಿವಮೊಗ್ಗವನ್ನು ಸೇರಿಸಿದ್ದಾಗಿ ತಿಳಿದು ಬಂದಿದೆ. ಅದರಿಂದ ಶಿವಮೊಗ್ಗದವರಿಗೆ ಅನುಕೂಲಕ್ಕಿಂತ ಅನಾನುಕೂಲವೇ ಜಾಸ್ತಿ. ಆದ್ದರಿಂದ ಮಂಗಳೂರು ಪೀಠಕ್ಕೆ ಶಿವಮೊಗ್ಗ ಸೇರಿಸಿದ್ದನ್ನು ಕೈಬಿಟ್ಟು ಶಿವಮೊಗ್ಗದಲ್ಲಿಯೇ ಪೀಠ ಸ್ಥಾಪಿಸಿ ಎಂದು ಕೇಳಿಕೊಂಡಿದ್ದೇವೆ. ಮಂಗಳೂರು ಪೀಠಕ್ಕೆ ಸೇರಿಸಿದ ಶಿವಮೊಗ್ಗದ ಹೆಸರನ್ನು ಕೈಬಿಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ಆದರೆ, ಶಿವಮೊಗ್ಗದಲ್ಲಿ ಪೀಠ ಸ್ಥಾಪನೆಯ ಬಗ್ಗೆ ಯಾವುದೇ ಅಭಿಪ್ರಾಯವನ್ನು ತಿಳಿಸಿಲ್ಲ. ಜೂ. 1ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಶಿವಮೊಗ್ಗಕ್ಕೆ ಆಗಮಿಸಲಿದ್ದು, ಅಂದು ನಮ್ಮ ನಿಯೋಗ ಅವರನ್ನು ಭೇಟಿಯಾಗಲಿದೆ. ಶಿವಮೊಗ್ಗದಲ್ಲಿ ಪೀಠ ಸ್ಥಾಪನೆಯಾಗುವವರೆಗೆ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದರು.
Also read: ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು: ಕೆಡ್ಲ್ಯೂಜೆ ಆಗ್ರಹ
ಹಿಂದುಳಿದ ಜನ ಜಾಗೃತಿ ವೇದಿಕೆ, ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆ, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸಂಘ, ಬೀದಿ ಬದಿ ವ್ಯಾಪಾರಸ್ಥರ ಸಂಘ, ಕರ್ನಾಟಕ ಆದಿ ಜಾಂಬವ ಸಂಘ ಮೊದಲಾದ ಸಂಘಟನೆಗಳು ಇಂದು ವಕೀಲರ ಸಂಘದ ಧರಣಿಯಲ್ಲಿ ಪಾಲ್ಗೊಂಡು ಬೆಂಬಲ ಸೂಚಿಸಿದವು.
ಈ ಸಂದರ್ಭದಲ್ಲಿ ಹಿರಿಯ ವಕೀಲರಾದ ಬಸಪ್ಪಗೌಡ, ಅಶೋಕ್ ಜಿ. ಭಟ್, ಕೆ.ಪಿ. ಶ್ರೀಪಾಲ್, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಕೆ.ಸಿ. ಬಸವರಾಜ್, ರೈತಸಂಘದ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ, ಎಸ್.ವಿ. ರಾಜಮ್ಮ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















