ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಉತ್ತಮ ಅಂಕ ಗಳಿಕೆಗೆ ಮಾತ್ರ ಸೀಮಿತವಾಗದೆ, ಇಂದಿನ ಜಾಗತಿಕ ವಿದ್ಯಮಾನಗಳಿಗೆ ಅಗತ್ಯವಾದ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು ಎಂದು ಪಿಇಎಸ್ ಟ್ರಸ್ಟ್ನ ಕುಲಸಚಿವರಾದ ಡಾ. ನಾಗರಾಜ್ ಆರ್. ಅವರು ಹೇಳಿದರು.
ನಗರದ ಪಿಇಎಸ್ ಐಎಎಂಎಸ್ ಕಾಲೇಜು ವತಿಯಿಂದ ಆಯೋಜಿಸಲಾಗಿದ್ದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ‘ಆದ್ಯ-2026’ ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿವಿಧ ಉದ್ದಿಮೆ ಹಾಗೂ ಕೈಗಾರಿಕೆಗಳಿಗೆ ಅಗತ್ಯವಿರುವ ಕೌಶಲ್ಯಗಳನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ಕಲಿಯುವುದು ಅನಿವಾರ್ಯವಾಗಿದೆ. ಪದವಿ ಪಡೆದ ಇಂಜಿನಿಯರ್ಗಳು ಹಾಗೂ ವಿವಿಧ ವಿಶ್ವವಿದ್ಯಾಲಯಗಳಿಂದ ಪದವಿ ಮುಗಿಸಿದವರಿಗೂ ಉದ್ಯೋಗ ದೊರೆಯದಿರುವುದಕ್ಕೆ ಅಗತ್ಯ ಕೌಶಲ್ಯಗಳ ಕೊರತೆಯೇ ಪ್ರಮುಖ ಕಾರಣವಾಗಿದೆ ಎಂದು ಹೇಳಿದರು.
ಇತ್ತೀಚಿನ ಅಂಕಿಅಂಶಗಳ ಪ್ರಕಾರ ಶೇ.42ರಷ್ಟು ಪದವೀಧರರು ಮಾತ್ರ ಉದ್ಯೋಗ ಪಡೆಯುತ್ತಿದ್ದಾರೆ. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಕ್ಷೇತ್ರಕ್ಕೆ ಸಂಬಂಧಿಸಿದ ತಾಂತ್ರಿಕ ಕೌಶಲ್ಯಗಳ ಜೊತೆಗೆ ಪರಿಸ್ಥಿತಿಗೆ ಹೊಂದಿಕೊಳ್ಳುವ ಸಾಮರ್ಥ್ಯ, ನಾಯಕತ್ವ ಗುಣ, ಸಂವಹನ ಕೌಶಲ್ಯ ಹಾಗೂ ನಿರಂತರ ಕಲಿಕೆಯ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಈ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬಹುದು ಎಂದು ಸಲಹೆ ನೀಡಿದರು.
ಸಂಸ್ಥೆಯು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಉತ್ತಮ ಸಾಧನೆ ಮಾಡಬೇಕು ಎಂದು ಕರೆ ನೀಡಿದರು.
Also read>> ರಾಯಲ್ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಸಂಭ್ರಮದ ಗುರುಪೂರ್ಣಿಮೆ ಆಚರಣೆ
ಸಮಯದ ಸದ್ಬಳಕೆ ಮುಖ್ಯ: ಡಾ. ಸುದರ್ಶನ್ ಜಿ.ಎಂ.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪಿಇಎಸ್ ಐಎಎಂಎಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುದರ್ಶನ್ ಜಿ.ಎಂ. ಮಾತನಾಡಿ, ಸಮಯವು ಅತ್ಯಮೂಲ್ಯವಾಗಿದ್ದು ಅದರ ಸದ್ಬಳಕೆ ಪ್ರತಿಯೊಬ್ಬರಿಗೂ ಅಗತ್ಯವಾಗಿದೆ ಎಂದು ಹೇಳಿದರು.
ಕಳೆದುಹೋದ ಸಮಯವನ್ನು ಮರಳಿ ಪಡೆಯಲು ಸಾಧ್ಯವಿಲ್ಲ. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸ್ಪಷ್ಟವಾದ ಗುರಿಯನ್ನು ಹೊಂದಿ, ಅದನ್ನು ಸಾಧಿಸಲು ನಿರಂತರ ಪರಿಶ್ರಮ, ಉತ್ತಮ ವ್ಯಕ್ತಿತ್ವ, ಸಕಾರಾತ್ಮಕ ಮನೋಭಾವ, ಜ್ಞಾನ ಸಂಪಾದನೆಯ ಹಂಬಲ ಹಾಗೂ ಕುತೂಹಲವನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.
ಭವಿಷ್ಯದ ಬಗ್ಗೆ ಸ್ಪಷ್ಟ ಗುರಿ ಹೊಂದಿ ಉತ್ತಮ ಸಾಧನೆ ಮಾಡುವ ಮೂಲಕ ಸಮಾಜಕ್ಕೂ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ
ಸಮಾರಂಭದಲ್ಲಿ ಪ್ರಥಮ ವರ್ಷದಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಬುಕ್ ಕೂಪನ್ಗಳನ್ನು ವಿತರಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ವಿಭಾಗದ ಸಂಚಾಲಕರಾದ ಡಾ. ಅಶ್ವಿನಿ ವಿ., ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ರೂಪ ಡಿ.ಎಸ್., ನಿರ್ವಹಣಾಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀ ಮೋಹನ್ ಡಿ., ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಮಂಜುನಾಥ್ ಎಚ್.ಆರ್., ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ಯಶಸ್ವಿತ ಚವಾಣ್ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ಕಾರ್ಯಕ್ರಮದಲ್ಲಿ ಉಲ್ಲಾಸ್ ಅವರು ಪ್ರಾರ್ಥಿಸಿದರು. ಕಂಪ್ಯೂಟರ್ ಸೈನ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಆಸ್ಮಾ ನೂರೈನ್ ಸ್ವಾಗತಿಸಿದರು. ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪ್ರದೀಪ್ ಶೆಟ್ಟಿ ಕೆ. ವಂದಿಸಿದರು. ವಾಣಿಜ್ಯ ಮತ್ತು ನಿರ್ವಹಣಾಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಸಿಂಚನ ಕೆ.ಎಸ್. ಕಾರ್ಯಕ್ರಮ ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 









