ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ (Shivamogga) ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ (Heavy Rain) ಹಿನ್ನೆಲೆಯಲ್ಲಿ ತೀರ್ಥಹಳ್ಳಿ ಹಾಗೂ ಸಾಗರ ತಾಲ್ಲೂಕಿನ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಆಗಸ್ಟ್ 3 (ಸೋಮವಾರ) ರಂದು ರಜೆ ಘೋಷಿಸಲಾಗಿದೆ.
ತೀರ್ಥಹಳ್ಳಿ (Thirthahalli) ತಹಸೀಲ್ದಾರ್ ರಂಜಿತ್ ಅವರು ಆದೇಶ ಹೊರಡಿಸಿ, ತಾಲ್ಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆ ಮತ್ತು ಶೀತ ಗಾಳಿಯ ಪರಿಣಾಮ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳು, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.
Also Read>> ಯಡಕುಮರಿ ಬಳಿ ಭೂಕುಸಿತ | ಕಾರವಾರ – ಬೆಂಗಳೂರು ನಡುವಿನ 3 ರೈಲುಗಳು ರದ್ದು
ತುಂಗಾ ನದಿ (Tunga River) ಅಪಾಯ ಮಟ್ಟ ಮೀರಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ನದಿ ಹತ್ತಿರ ಹೋಗಬಾರದು, ಮಕ್ಕಳನ್ನು ಹಳ್ಳ-ಕೊಳ್ಳಗಳ ಸಮೀಪ ಬಿಡಬಾರದು ಎಂದು ಎಚ್ಚರಿಕೆ ನೀಡಲಾಗಿದೆ. ಯಾವುದೇ ತುರ್ತು ಪರಿಸ್ಥಿತಿ ಉಂಟಾದಲ್ಲಿ ತಾಲೂಕು ಕಚೇರಿಯ ಸಹಾಯವಾಣಿ ಸಂಪರ್ಕಿಸುವಂತೆ ಸೂಚಿಸಲಾಗಿದೆ.
Heavy Rain : ಸಾಗರ ತಾಲ್ಲೂಕಿನಲ್ಲೂ ಭಾರೀ ಮಳೆ : ರಜೆ
ಇನ್ನೊಂದೆಡೆ, ಸಾಗರ (Sagar) ತಾಲ್ಲೂಕಿನಲ್ಲೂ ಭಾರೀ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 3ರಂದು ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಸಾಗರ ತಹಸೀಲ್ದಾರ್ ಆರ್. ಪ್ರತಿಭಾ ಅವರು ಆದೇಶ ಹೊರಡಿಸಿದ್ದು, ಹವಾಮಾನ ಇಲಾಖೆ ನೀಡಿರುವ ಭಾರೀ ಮಳೆಯ ಮುನ್ಸೂಚನೆಯನ್ನು ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪಿಯುಸಿ, ಡಿಪ್ಲೋಮಾ ಹಾಗೂ ಐಟಿಐ ಕಾಲೇಜುಗಳಿಗೆ ಒಂದು ದಿನದ ರಜೆ ಘೋಷಿಸಲಾಗಿದೆ.
ಮಲೆನಾಡು ಭಾಗದಲ್ಲಿ ನಿರಂತರ ಮಳೆಯ ಪರಿಣಾಮ ನದಿಗಳು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಹಲವು ಗ್ರಾಮೀಣ ರಸ್ತೆಗಳಲ್ಲೂ ನೀರು ನಿಂತಿರುವುದು ಹಾಗೂ ಕೆಲವೆಡೆ ಸಂಚಾರಕ್ಕೆ ಅಡಚಣೆ ಉಂಟಾಗಿರುವ ವರದಿಗಳು ಬಂದಿವೆ. ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತ ಈ ತೀರ್ಮಾನ ಕೈಗೊಂಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









