ಕಲ್ಪ ಮೀಡಿಯಾ ಹೌಸ್ | ಬೆಳ್ತಂಗಡಿ |
ತಾಲೂಕಿನ ವೇಣೂರು ಗ್ರಾಮದಲ್ಲಿ 14 ವರ್ಷದ ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ (Rape) ಅತ್ಯಾಚಾರ ಎಸಗಿದ ಆರೋಪದ ಮೇಲೆ ಆಟೋ ರಿಕ್ಷಾ ಚಾಲಕನನ್ನು (Belthangady) ಬೆಳ್ತಂಗಡಿಯ ವೇಣೂರು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೊಳಪಡಿಸಿದ್ದಾರೆ.
ವೇಣೂರು ನಿವಾಸಿ ಜಮಾಲುದ್ದೀನ್ ಆರೋಪಿಯಾಗಿದ್ದಾನೆ. ಈತ ತನ್ನ ಆಟೋ ರಿಕ್ಷಾದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಬಾಲಕಿಯನ್ನು ಶಾಲೆಗೆ ಕರೆದೊಯ್ಯುತ್ತಿದ್ದನು ಎನ್ನಲಾಗಿದೆ. ಈ ವೇಳೆ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದ ಆರೋಪಿ, ಆಕೆ ಪ್ರತಿರೋಧ ವ್ಯಕ್ತಪಡಿಸಿದಾಗ ಜೀವಬೆದರಿಕೆ ಒಡ್ಡುತ್ತಿದ್ದನು ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಭೀತಿಗೊಳಗಾಗಿದ್ದ ಬಾಲಕಿ ಈ ವಿಷಯವನ್ನು ಯಾರಿಗೂ ತಿಳಿಸಿರಲಿಲ್ಲ. ಆದರೆ, ಆಗಸ್ಟ್ 13ರಂದು ಸಂಜೆ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದ ಸಂದರ್ಭದಲ್ಲಿ ಆರೋಪಿ ಮನೆಗೆ ಅಕ್ರಮವಾಗಿ ಪ್ರವೇಶಿಸಿ, ಬೆದರಿಕೆಯೊಡ್ಡಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
Also read>> ಕ್ರೈಸ್ಟ್ಕಿಂಗ್ ಪಿಯು ಕಾಲೇಜಿನಲ್ಲಿ ಎನ್ಎಸ್ಎಸ್ ಚಟುವಟಿಕೆಗಳಿಗೆ ಚಾಲನೆ, ತರಬೇತಿ ಕಾರ್ಯಕ್ರಮ
ಈ ಕುರಿತು ಸಂತ್ರಸ್ತ ಬಾಲಕಿ ಆಗಸ್ಟ್ 15ರಂದು ನೀಡಿದ ದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 75(2), 64(1), 65(1), 351(3) ಹಾಗೂ ಪೋಕ್ಸೋ ಕಾಯ್ದೆ (POCSO Act) 2012ರ ಕಲಂ 4(2), 8 ಮತ್ತು 12ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ಕುರಿತು ವೇಣೂರು ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 









