ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಮಹತ್ವದ ಹೆಜ್ಜೆಯಾಗಿ (Shivamogga) ಶಿವಮೊಗ್ಗದ ಬಿ.ಎಚ್. ರಸ್ತೆಯಲ್ಲಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ (Karnataka Public School) ಆವರಣದಲ್ಲಿ ₹13.5 ಕೋಟಿ ವೆಚ್ಚದ ನೂತನ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ಶಂಕುಸ್ಥಾಪನೆ ನೆರವೇರಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಶಿವಮೊಗ್ಗ ಎಜಾಕ್ಸ್ ಇಂಜಿನಿಯರಿಂಗ್ ಲಿಮಿಟೆಡ್ ಹಾಗೂ ಎಜಾಕ್ಸ್ ಇಂಜಿನಿಯರಿಂಗ್ ಚಾರಿಟಬಲ್ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ, ಟ್ರಸ್ಟ್‌ನ ಸಿಎಸ್‌ಆರ್ ನಿಧಿಯಡಿ ನೂತನ ಕಟ್ಟಡ ನಿರ್ಮಾಣವಾಗುತ್ತಿದೆ.
ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಮಕ್ಕಳ ಉತ್ತಮ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯಲ್ಲಿ ಹಲವು ಮಹತ್ವದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ಸಮಾಜದ ಸಹಭಾಗಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ‘ನಮ್ಮ ಶಾಲೆ, ನಮ್ಮ ಜವಾಬ್ದಾರಿ’ ಪರಿಕಲ್ಪನೆಯಡಿ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ತರಲು ಪ್ರಯತ್ನಿಸಲಾಗುತ್ತಿದೆ ಎಂದರು.
ದೇವಸ್ಥಾನಗಳಿಗಿಂತ ಶಾಲೆಗಳ ಅಭಿವೃದ್ಧಿಗೆ ಆದ್ಯತೆ ಬೇಕು
ಸಮಾಜದಲ್ಲಿ ದೇವಸ್ಥಾನಗಳ ಅಭಿವೃದ್ಧಿಯಷ್ಟೇ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೂ ಹೆಚ್ಚಿನ ಆದ್ಯತೆ ನೀಡುವ ಮನೋಭಾವ ಬೆಳೆಸಿಕೊಳ್ಳಬೇಕು. ಮಕ್ಕಳ ಭವಿಷ್ಯವನ್ನು ರೂಪಿಸುವ ಶಿಕ್ಷಣ ಇಲಾಖೆಯ ಜವಾಬ್ದಾರಿ ಅತ್ಯಂತ ದೊಡ್ಡದಾಗಿದೆ ಎಂದು ಸಚಿವರು ಹೇಳಿದರು.
ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಎಲ್‌ಕೆಜಿಯಿಂದ ದ್ವಿತೀಯ ಪಿಯುಸಿವರೆಗೆ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡುವುದು ಇದರ ಉದ್ದೇಶವಾಗಿದೆ ಎಂದರು.
ಶಿವಮೊಗ್ಗ ಜಿಲ್ಲೆಯಲ್ಲಿ ಈಗಾಗಲೇ 11 ಕೆಪಿಎಸ್ ಶಾಲೆಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ. ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ ನೆರವಿನಡಿ ಜಿಲ್ಲೆಯಲ್ಲಿ ಮತ್ತಷ್ಟು 24 ಕೆಪಿಎಸ್ ಶಾಲೆಗಳಿಗೆ ಅನುಮೋದನೆ ದೊರೆತಿದೆ ಎಂದು ತಿಳಿಸಿದರು.
ಶಿವಮೊಗ್ಗ ಜಿಲ್ಲೆಯಲ್ಲಿ 35 ಕೆಪಿಎಸ್ ಶಾಲೆಗಳ ಗುರಿ
ಸಿಎಸ್‌ಆರ್ ನಿಧಿಯಡಿ ರಾಜ್ಯಾದ್ಯಂತ 1,000 ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳನ್ನು ಅಭಿವೃದ್ಧಿಪಡಿಸುವ ಯೋಜನೆ ಸರ್ಕಾರದ ಮುಂದಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 35 ಕೆಪಿಎಸ್ ಶಾಲೆಗಳನ್ನು ಸ್ಥಾಪಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಸಚಿವರು ತಿಳಿಸಿದರು.
ಎಜಾಕ್ಸ್ ಇಂಜಿನಿಯರಿಂಗ್ ಚಾರಿಟಬಲ್ ಟ್ರಸ್ಟ್ ನೆರವಿನಿಂದ ನಿರ್ಮಾಣವಾಗಲಿರುವ ನೂತನ ಕಟ್ಟಡದಲ್ಲಿ 35 ಸುಸಜ್ಜಿತ ತರಗತಿ ಕೊಠಡಿಗಳು, ಅಗತ್ಯ ಶೌಚಾಲಯಗಳು ಹಾಗೂ ಅಕ್ಷರ ದಾಸೋಹ ಭವನ ನಿರ್ಮಾಣವಾಗಲಿದೆ.
ಕಟ್ಟಡ ಕಾಮಗಾರಿಯನ್ನು ಒಂದರಿಂದ ಎರಡು ವರ್ಷಗಳೊಳಗೆ ಪೂರ್ಣಗೊಳಿಸಿ ಶಿಕ್ಷಣ ಇಲಾಖೆಗೆ ಹಸ್ತಾಂತರಿಸುವ ಗುರಿ ಹೊಂದಲಾಗಿದೆ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಾರಿಗೆ ವ್ಯವಸ್ಥೆ ಕಲ್ಪಿಸುವ ಉದ್ದೇಶವೂ ಇದೆ ಎಂದು ಮಧು ಬಂಗಾರಪ್ಪ ಹೇಳಿದರು.
‘ತಾವು ಓದಿದ ಶಾಲೆಯನ್ನು ತಮ್ಮ ಮನೆಯಂತೆ ಭಾವಿಸಿ’
ಎಜಾಕ್ಸ್ ಇಂಜಿನಿಯರಿಂಗ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಕೆ. ವಿಜಯ್ ಕುಮಾರ್ ಮಾತನಾಡಿ, ಪ್ರತಿಯೊಬ್ಬರೂ ತಾವು ಓದಿದ ಶಾಲೆಯನ್ನು ತಮ್ಮ ಮನೆಯಂತೆ ಭಾವಿಸಿ ಅದರ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದರು.
ಸಮಾಜದ ಪ್ರತಿಯೊಬ್ಬರಿಗೂ ಉತ್ತಮವಾಗಿ ಬದುಕುವ ಹಕ್ಕಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ಸಮಾಜದ ಜವಾಬ್ದಾರಿಯಾಗಿದೆ. ಜಿಲ್ಲೆ, ರಾಜ್ಯ ಹಾಗೂ ದೇಶದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಶಿಕ್ಷಣ ಕ್ಷೇತ್ರಕ್ಕೆ ಸಂಸ್ಥೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಹೇಳಿದರು.
ಏಳು ವರ್ಷಗಳ ಹಿಂದೆ ಎಜಾಕ್ಸ್ ಸಂಸ್ಥೆಯನ್ನು ಸ್ಥಾಪಿಸಲಾಗಿದ್ದು, ಅಂದಿನಿಂದ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಮುಂದಿನ ಐದು ವರ್ಷಗಳಲ್ಲಿ ರಾಜ್ಯದ 10 ಜಿಲ್ಲೆಗಳಲ್ಲಿ ಪಬ್ಲಿಕ್ ಶಾಲೆಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಗೌರಿಬಿದನೂರು, ಬಾಣಾವರ ಸೇರಿದಂತೆ ವಿವಿಧೆಡೆ ಶಾಲೆಗಳನ್ನು ನಿರ್ಮಿಸಲಾಗಿದ್ದು, ಶಿವಮೊಗ್ಗದಲ್ಲಿ ನಿರ್ಮಾಣವಾಗುತ್ತಿರುವುದು ಸಂಸ್ಥೆಯ ಐದನೇ ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿದೆ ಎಂದರು.
ಮಕ್ಕಳ ಕಲಿಕೆ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ವಿವಿಧ ರೀತಿಯಲ್ಲಿ ಹಣವನ್ನು ವಿನಿಯೋಗಿಸಲಾಗುತ್ತಿದೆ. ಕೆಪಿಎಸ್ ಶಾಲೆಗಳಲ್ಲಿ ಒಂದೇ ಸೂರಿನಡಿ ವಿವಿಧ ಹಂತಗಳ ಶಿಕ್ಷಣ ಪಡೆಯಲು ಅವಕಾಶವಿದ್ದು, ಮಕ್ಕಳಿಗೆ ಉತ್ತಮ ಶೈಕ್ಷಣಿಕ ವಾತಾವರಣ ಕಲ್ಪಿಸುವುದು ಸಂಸ್ಥೆಯ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.
ಶಿಕ್ಷಣ ಮಾತ್ರವಲ್ಲದೆ ಹಲವು ಸಮಾಜಮುಖಿ ಕ್ಷೇತ್ರಗಳಿಗೂ ಸಂಸ್ಥೆ ಹಣವನ್ನು ವಿನಿಯೋಗಿಸುತ್ತಿದೆ. “ನಮ್ಮ ಕೆಲಸ ಇಲ್ಲಿಗೆ ಮುಗಿಯುವುದಿಲ್ಲ. ಮಕ್ಕಳ ಹಾಗೂ ಸಮಾಜದ ಒಳಿತಿಗಾಗಿ ನಮ್ಮ ಸೇವೆ ನಿರಂತರವಾಗಿ ಮುಂದುವರಿಯಲಿದೆ” ಎಂದು ವಿಜಯ್ ಕುಮಾರ್ ತಿಳಿಸಿದರು.
ಕನ್ನಡ ಮಾಧ್ಯಮ ಶಾಲೆಗಳ ಬಗ್ಗೆಯೂ ಚಿಂತನೆ ಅಗತ್ಯ: ಡಿ.ಎಸ್. ಅರುಣ್
ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಮಾತನಾಡಿ, ಭಾರತ ವೈವಿಧ್ಯಮಯ ದೇಶವಾಗಿದ್ದು, ಶಿಕ್ಷಣ ಕ್ಷೇತ್ರದಲ್ಲಿಯೂ ಹಲವು ಬದಲಾವಣೆಗಳು ಅಗತ್ಯವಿದೆ ಎಂದರು.
ಕನ್ನಡ ಭಾಷೆಗೆ ತನ್ನದೇ ಆದ ಇತಿಹಾಸ ಹಾಗೂ ಮಹತ್ವವಿದ್ದು, ಕನ್ನಡ ಮಾಧ್ಯಮ ಶಾಲೆಗಳ ಭವಿಷ್ಯದ ಬಗ್ಗೆಯೂ ಚಿಂತನೆ ನಡೆಸಬೇಕು. ಶಾಲೆಗಳಿಗೆ ಅಗತ್ಯವಿರುವ ಶಿಕ್ಷಕರನ್ನು ಆದಷ್ಟು ಬೇಗ ನೇಮಕ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ವಿದ್ಯಾದಾನವೇ ಶ್ರೇಷ್ಠ ದಾನ: ಬಾಲ್ಕಿಶ್ ಬಾನು
ವಿಧಾನ ಪರಿಷತ್ ಸದಸ್ಯೆ ಬಾಲ್ಕಿಶ್ ಬಾನು ಮಾತನಾಡಿ, ಎಲ್ಲ ದಾನಗಳಿಗಿಂತ ವಿದ್ಯಾದಾನವೇ ಶ್ರೇಷ್ಠ. ಶಿಕ್ಷಣಕ್ಕೆ ನೀಡುವ ಕೊಡುಗೆ ಸಮಾಜದ ಅಭಿವೃದ್ಧಿಗೆ ಪೂರಕವಾಗಿದ್ದು, ಮಕ್ಕಳ ಭವಿಷ್ಯ ರೂಪಿಸುವ ಕಾರ್ಯದಲ್ಲಿ ಕೈಜೋಡಿಸುವುದು ಅತ್ಯಂತ ಶ್ರೇಷ್ಠವಾದ ಕಾರ್ಯವಾಗಿದೆ ಎಂದರು.
Also read>> ಶರಣರ ದಾಸೋಹ ಕಲ್ಪನೆ ಅತ್ಯಂತ ಶ್ರೇಷ್ಠ: ಪ್ರಶಾಂತ ಕುಬಸದ ಅಭಿಮತ
ಶಿವಮೊಗ್ಗದ ಶಿಕ್ಷಣ ಇತಿಹಾಸದಲ್ಲಿ ಮೈಲುಗಲ್ಲು: ಶಾಸಕ ಚನ್ನಬಸಪ್ಪ
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ಮಾತನಾಡಿ, ಇದು ಶಿವಮೊಗ್ಗಕ್ಕೆ ಅವಿಸ್ಮರಣೀಯ ದಿನವಾಗಿದ್ದು, ಶಿಕ್ಷಣ ಕ್ಷೇತ್ರಕ್ಕೆ ಹೊಸ ಶಕ್ತಿ ತುಂಬುವ ಕಾರ್ಯಕ್ಕೆ ಚಾಲನೆ ದೊರೆತಿದೆ ಎಂದರು.
₹13.5 ಕೋಟಿ ವೆಚ್ಚದ ಯೋಜನೆ ಸಣ್ಣ ವಿಷಯವಲ್ಲ. ಎಜಾಕ್ಸ್ ಸಂಸ್ಥೆ ಹಾಗೂ ವಿಜಯ್ ಕುಮಾರ್ ಅವರ ಶಿಕ್ಷಣದ ಮೇಲಿನ ಕಾಳಜಿ ಮತ್ತು ಸಮಾಜಮುಖಿ ಕಾರ್ಯ ಶ್ಲಾಘನೀಯವಾಗಿದೆ. ಇಂತಹ ಯೋಜನೆಗಳು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹೊಸ ದಿಕ್ಕು ನೀಡಲಿವೆ ಎಂದು ಹೇಳಿದರು.
ಹಿಂದೆ ಸರ್ಕಾರಿ ಶಾಲೆಗಳ ಸಣ್ಣಪುಟ್ಟ ದುರಸ್ತಿ ಕಾರ್ಯಗಳಿಗೂ ಅನುದಾನದ ಕೊರತೆ ಎದುರಾಗುತ್ತಿತ್ತು. ಆದರೆ ಈಗ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ದೊಡ್ಡ ಮಟ್ಟದ ಯೋಜನೆಗಳು ಜಾರಿಯಾಗುತ್ತಿರುವುದು ಸಂತಸದ ಸಂಗತಿ ಎಂದರು.
ರಾಜಕೀಯವು ಚುನಾವಣೆಗೆ ಮಾತ್ರ ಸೀಮಿತವಾಗಬೇಕು; ಚುನಾವಣೆಯ ನಂತರ ಅಭಿವೃದ್ಧಿಯೇ ಎಲ್ಲರ ಮಂತ್ರವಾಗಬೇಕು ಎಂದು ತಿಳಿಸಿದ ಅವರು, ಸಚಿವ ಮಧು ಬಂಗಾರಪ್ಪ ಅವರ ಮಾರ್ಗದರ್ಶನದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗಳು ಆಗುತ್ತಿವೆ ಎಂದರು.
ಶ್ರಾವಣ ಮಾಸದಲ್ಲಿ ಶಂಕುಸ್ಥಾಪನೆ ನೆರವೇರಿಸಿರುವುದು ಶುಭ ಸಂಕೇತವಾಗಿದ್ದು, ನೂತನ ಕಟ್ಟಡ ಶೀಘ್ರದಲ್ಲೇ ಪೂರ್ಣಗೊಂಡು ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸೌಲಭ್ಯ ಕಲ್ಪಿಸಲಿ ಎಂದು ಆಶಿಸಿದರು.
ಗಣ್ಯರ ಉಪಸ್ಥಿತಿ
ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ, ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ, ಎಜಾಕ್ಸ್ ಇಂಜಿನಿಯರಿಂಗ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಕೆ. ವಿಜಯ್ ಕುಮಾರ್, ಕಲ್ಯಾಣಿ ವಿಜಯ್, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್. ಅರುಣ್, ಬಾಲ್ಕಿಶ್ ಬಾನು, ಪಲ್ಲವಿ, ಜಿಲ್ಲಾ ಪಂಚಾಯಿತಿ ಸಿಇಒ ಹೇಮಂತ್ ಎನ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಮಾಜಿ ಕಾರ್ಪೊರೇಟರ್ ಪ್ರಭಾಕರ್, ಚೇತನ್ ಕೆ. ಗೌಡ, ಯೋಗೀಶ್, ಚಂದ್ರಭೂಪಾಲ್, ಮಧು ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.
ನೂತನ ಕೆಪಿಎಸ್ ಕಟ್ಟಡ ನಿರ್ಮಾಣವು ಶಿವಮೊಗ್ಗದ ಸರ್ಕಾರಿ ಶಾಲಾ ಶಿಕ್ಷಣ ವ್ಯವಸ್ಥೆಗೆ ಹೊಸ ಶಕ್ತಿ ನೀಡಲಿದ್ದು, ಜಿಲ್ಲೆಯ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಯಲ್ಲಿ ಇದು ಮಹತ್ವದ ಮೈಲುಗಲ್ಲಾಗಲಿದೆ ಎಂದು ಗಣ್ಯರು ಅಭಿಪ್ರಾಯಪಟ್ಟರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 







