ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಕೊಲೆ ಯತ್ನ ಸೇರಿದಂತೆ ವಿವಿಧ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದ ಭದ್ರಾವತಿ (Bhadravathi) ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ್ (B.K. Sangamesh) ಹಾಗೂ ಇತರ ಆರೋಪಿಗಳನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕರಣದಿಂದ ಮುಕ್ತಗೊಳಿಸಿದೆ. ಪ್ರಕರಣದಲ್ಲಿ ಆರೋಪಗಳು ಸಾಬೀತಾಗದ ಹಿನ್ನೆಲೆಯಲ್ಲಿ ಎಲ್ಲ ಆರೋಪಿಗಳನ್ನು ನಿರಪರಾಧಿಗಳೆಂದು ಘೋಷಿಸಿ ನ್ಯಾಯಾಲಯ ಆದೇಶ ನೀಡಿದೆ.
ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣದಿಂದ ಆರೋಪಮುಕ್ತಗೊಳಿಸುವಂತೆ ಕೋರಿ ಶಾಸಕ ಬಿ.ಕೆ. ಸಂಗಮೇಶ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ.ಬಿ. ಶಿವಪ್ರಸಾದ್ ಅವರು ಈ ಆದೇಶ ನೀಡಿದ್ದಾರೆ.
ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ದೂರು?
ಪ್ರಕರಣದ ವಿಚಾರಣೆ ವೇಳೆ ಆರೋಪಿಗಳ ಪರ ವಕೀಲರು, ದೂರುದಾರ ಸಿ. ಮಹೇಶ್ ಕುಮಾರ್ ಅವರು ರಾಜಕೀಯ ಎದುರಾಳಿಯಾಗಿದ್ದು, ಉದ್ದೇಶಪೂರ್ವಕವಾಗಿ ಶಾಸಕ ಬಿ.ಕೆ. ಸಂಗಮೇಶ್ ಹಾಗೂ ಇತರರ ವಿರುದ್ಧ ದೂರು ನೀಡಿದ್ದಾರೆ ಎಂದು ವಾದಿಸಿದ್ದರು. ಅಲ್ಲದೆ, ವಿಚಾರಣೆ ಸಂದರ್ಭದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಸಾಕ್ಷ್ಯಗಳನ್ನು ನೀಡಲಾಗಿದೆ ಎಂಬುದನ್ನೂ ಆರೋಪಿಗಳ ಪರ ವಕೀಲರು ನ್ಯಾಯಾಲಯದ ಗಮನಕ್ಕೆ ತಂದಿದ್ದರು.
ಈ ವಾದಗಳನ್ನು ಪರಿಗಣಿಸಿರುವ ನ್ಯಾಯಾಲಯ, ಪ್ರಕರಣದಲ್ಲಿ ಸಲ್ಲಿಕೆಯಾಗಿರುವ ಸಾಕ್ಷ್ಯಗಳು ಮತ್ತು ವಿಚಾರಣೆಯ ವೇಳೆ ಸಾಕ್ಷಿಗಳ ಹೇಳಿಕೆಗಳನ್ನು ಪರಿಶೀಲಿಸಿದೆ. ಪ್ರಮುಖ ಸಾಕ್ಷಿಯಾಗಿದ್ದ ದೂರುದಾರರ ಅಕ್ಕ ಜಯಮ್ಮ ಅವರು ವಿಶ್ವಾಸಾರ್ಹ ಸಾಕ್ಷ್ಯ ನೀಡಲು ವಿಫಲರಾಗಿರುವುದನ್ನು ನ್ಯಾಯಾಲಯ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ.
Also Read>> ಬರ ಸಮಸ್ಯೆಗೆ ಸಮಗ್ರ ಮತ್ತು ಶಾಶ್ವತ ಪರಿಹಾರ ರೂಪಿಸಿ: ಡಾ. ಧನಂಜಯ ಸರ್ಜಿ
ಜಯಮ್ಮ ಅವರು ನಂಬಲರ್ಹವಾದ ಸಾಕ್ಷ್ಯ ನುಡಿಯಲು ವಿಮುಖರಾಗಿರುವ ಹಿನ್ನೆಲೆಯಲ್ಲಿ ಪ್ರಕರಣದಲ್ಲಿ ಆರೋಪಗಳನ್ನು ದೃಢಪಡಿಸಲು ಅಗತ್ಯವಾದ ಸಾಕ್ಷ್ಯಾಧಾರಗಳು ಲಭ್ಯವಾಗಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಹೀಗಾಗಿ ಆರೋಪಿಗಳ ವಿರುದ್ಧದ ಆರೋಪಗಳು ಸಾಬೀತಾಗದ ಹಿನ್ನೆಲೆಯಲ್ಲಿ ಎಲ್ಲ ಆರೋಪಿಗಳನ್ನು ಪ್ರಕರಣದಿಂದ ಮುಕ್ತಗೊಳಿಸಲಾಗಿದೆ.
Bhadravathi : 2010ರಲ್ಲಿ ನಡೆದಿದ್ದ ಘಟನೆ
ಪ್ರಕರಣದ ಹಿನ್ನೆಲೆಯ ಪ್ರಕಾರ, ಭದ್ರಾವತಿ ನಗರದ ಹಳದಮ್ಮ ದೇವಿ ಜಾತ್ರೆಯ ಅಂಗವಾಗಿ 2010ರ ಮೇ 21ರಂದು ಕುಸ್ತಿ ಪಂದ್ಯಾವಳಿಯ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮ ಮುಗಿಸಿಕೊಂಡು ಬಿ.ಕೆ. ಸಂಗಮೇಶ್ ಹಾಗೂ ಅವರ ಬೆಂಬಲಿಗರು ಕಾರುಗಳಲ್ಲಿ ಬರುತ್ತಿದ್ದ ವೇಳೆ ತಮ್ಮ ಮನೆಗೆ ನುಗ್ಗಿ ತಮ್ಮ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ ಎಂದು ಸಿ. ಮಹೇಶ್ ಕುಮಾರ್ ಆರೋಪಿಸಿದ್ದರು.
ಹಲ್ಲೆ ನಡೆಯುತ್ತಿದ್ದ ಸಂದರ್ಭದಲ್ಲಿ ತಮ್ಮನ್ನು ಬಿಡಿಸಲು ಬಂದಿದ್ದ ತಮ್ಮ ಅಕ್ಕ ಜಯಮ್ಮ ಅವರ ಮೇಲೂ ಹಲ್ಲೆ ನಡೆಸಲಾಗಿದೆ ಎಂದು ಅವರು ದೂರಿನಲ್ಲಿ ತಿಳಿಸಿದ್ದರು. ಈ ಸಂಬಂಧ ಸಿ. ಮಹೇಶ್ ಕುಮಾರ್ ಅವರು 2010ರ ಮೇ 22ರಂದು ಭದ್ರಾವತಿಯ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಬಿ.ಕೆ. ಸಂಗಮೇಶ್ ಸೇರಿದಂತೆ ಇತರರ ವಿರುದ್ಧ ದೂರು ದಾಖಲಿಸಿದ್ದರು.
ಗಂಭೀರ ಆರೋಪಗಳಡಿ ಪ್ರಕರಣ ದಾಖಲು
ದೂರು ಆಧರಿಸಿ ಪೇಪರ್ ಟೌನ್ ಠಾಣೆ ಪೊಲೀಸರು ಭಾರತೀಯ ದಂಡ ಸಂಹಿತೆ (IPC)-1860ರ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿದ್ದರು. ಪ್ರಕರಣದಲ್ಲಿ ಕಲಂ 120(ಬಿ) – ಅಪರಾಧಿಕ ಪಿತೂರಿ, ಕಲಂ 147 – ಗಲಭೆ, ಕಲಂ 307 – ಕೊಲೆ ಯತ್ನ ಹಾಗೂ ಕಲಂ 326 – ಅಪಾಯಕಾರಿ ಆಯುಧ ಬಳಸಿ ಗಂಭೀರ ಗಾಯ ಉಂಟು ಮಾಡುವುದು ಸೇರಿದಂತೆ ಹಲವು ಆರೋಪಗಳನ್ನು ದಾಖಲಿಸಲಾಗಿತ್ತು.
ದೀರ್ಘಕಾಲದ ವಿಚಾರಣೆಯ ಬಳಿಕ ಪ್ರಕರಣ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ವಿಚಾರಣೆಗೆ ಬಂದಿತ್ತು. ಆರೋಪಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಾಧಾರಗಳು ಮತ್ತು ಸಾಕ್ಷಿಗಳ ಹೇಳಿಕೆಗಳನ್ನು ಪರಿಶೀಲಿಸಿ ಅಂತಿಮವಾಗಿ ಆರೋಪಗಳನ್ನು ಸಾಬೀತುಪಡಿಸಲು ಸಾಧ್ಯವಾಗಿಲ್ಲ ಎಂಬ ಹಿನ್ನೆಲೆಯಲ್ಲಿ ಬಿ.ಕೆ. ಸಂಗಮೇಶ್ ಸೇರಿದಂತೆ ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸಿದೆ.
ಈ ಮೂಲಕ ಸುಮಾರು 16 ವರ್ಷಗಳ ಹಿಂದೆ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದಲ್ಲಿ ಶಾಸಕ ಬಿ.ಕೆ. ಸಂಗಮೇಶ್ ಅವರಿಗೆ ನ್ಯಾಯಾಲಯದಿಂದ ಮಹತ್ವದ ಪರಿಹಾರ ದೊರೆತಂತಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 








