ಕಲ್ಪ ಮೀಡಿಯಾ ಹೌಸ್ | ಧರ್ಮಸ್ಥಳ |
ಶ್ರೀ ಧರ್ಮಸ್ಥಳ (Dharmasthala) ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ 28ನೇ ವರ್ಷದ ಭಜನಾ ಕಮ್ಮಟ (Bhajana Kammata) ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಲಿದೆ ಎಂದು ಭಜನಾ ಕಮ್ಮಟದ ಕಾರ್ಯದರ್ಶಿ ಎ.ವಿ. ಶೆಟ್ಟಿ ತಿಳಿಸಿದ್ದಾರೆ.
ಭಜನೆ, ಭಕ್ತಿ, ಸಂಸ್ಕೃತಿ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಪ್ರತಿವರ್ಷ ಆಯೋಜಿಸಲಾಗುತ್ತಿರುವ ಭಜನಾ ಕಮ್ಮಟದಲ್ಲಿ ಈ ಬಾರಿಯೂ ವಿವಿಧ ಜಿಲ್ಲೆಗಳ ಭಜನಾ ಮಂಡಳಿಗಳು ಹಾಗೂ ಭಜನಾ ಪಟುಗಳು ಭಾಗವಹಿಸಲಿದ್ದಾರೆ.
ಸೆ.28ರಂದು ಭಜನಾ ಕಮ್ಮಟಕ್ಕೆ ಚಾಲನೆ
ಭಜನಾ ಕಮ್ಮಟದ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 28ರಂದು ಬೆಳಿಗ್ಗೆ 11 ಗಂಟೆಗೆ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ.
ಜಗದ್ಗುರು ಶ್ರೀ ಮಧ್ವಾಚಾರ್ಯ ಮಹಾಸಂಸ್ಥಾನ ಶ್ರೀ ಸುಬ್ರಹ್ಮಣ್ಯ ಮಠದ ಪರಮಪೂಜ್ಯ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದಂಗಳವರು ಭಜನಾ ಕಮ್ಮಟವನ್ನು ಉದ್ಘಾಟಿಸಲಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಸೇವಾ ಪ್ರತಿಷ್ಠಾನದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರು ದಿವ್ಯ ಉಪಸ್ಥಿತಿ ವಹಿಸಲಿದ್ದಾರೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ಉಪಾಧ್ಯಕ್ಷರಾದ ಡಾ. ಹೇಮಾವತಿ ವೀ. ಹೆಗ್ಗಡೆ ಹಾಗೂ ಡಿ. ಹರ್ಷೇಂದ್ರ ಕುಮಾರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
Also read>> ಕಿರಿಯ ಕಲಾ ಪ್ರತಿಭೆಗಳಿಗೆ ವೇದಿಕೆ: ಸೆ.27ರಂದು ಬೆಂಗಳೂರಿನಲ್ಲಿ ‘ನೃತ್ಯ ನೀರಾಜನ–14’ ನೃತ್ಯೋತ್ಸವ
Dharmasthala : ಅ.4ರಂದು ಸಮಾರೋಪ ಸಮಾರಂಭ
ಒಂದು ವಾರದ ಭಜನಾ ಕಮ್ಮಟದ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಬೆಳಿಗ್ಗೆ 11 ಗಂಟೆಗೆ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿದೆ.
ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠ, ಸುತ್ತೂರಿನ ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಲಿದ್ದಾರೆ. ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಭಜನಾ ಕಮ್ಮಟದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದಂಗಳವರು ಸಮಾರೋಪ ಸಮಾರಂಭದಲ್ಲಿಯೂ ದಿವ್ಯ ಉಪಸ್ಥಿತಿ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ಮಂಗಳೂರು ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಡಾ. ಹೇಮಾವತಿ ವೀ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್ ಹಾಗೂ ಉಜಿರೆ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಡಿ. ಸುರೇಂದ್ರ ಕುಮಾರ್ ಭಾಗವಹಿಸಲಿದ್ದಾರೆ.
ಭಜನಾ ಕಮ್ಮಟದ ಸಂಚಾಲಕ ಜಿ. ಸುಬ್ರಹ್ಮಣ್ಯ ಪ್ರಸಾದ್, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಾದೇಶಿಕ ಭಜನಾ ಪರಿಷತ್ ಅಧ್ಯಕ್ಷ ಚಂದ್ರಶೇಖರ್ ಸಾಲಿಯಾನ್, ಕಾರ್ಯದರ್ಶಿ ಎ.ವಿ. ಶೆಟ್ಟಿ, ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಬನ್ನೂರು ಸೇರಿದಂತೆ ಪರಿಷತ್‌ನ ವಿವಿಧ ಪದಾಧಿಕಾರಿಗಳು ಉಪಸ್ಥಿತರಿರುವರು.
400 ಭಜನಾ ತಂಡಗಳು, 6,000ಕ್ಕೂ ಅಧಿಕ ಭಜನಾ ಪಟುಗಳ ಸಂಗಮ
ಭಜನಾ ಕಮ್ಮಟದ ಪ್ರಮುಖ ಆಕರ್ಷಣೆಯಾಗಿರುವ ಭಜನೋತ್ಸವ ಅಕ್ಟೋಬರ್ 4ರಂದು ನಡೆಯಲಿದೆ. ಅಂದು ಬೆಳಿಗ್ಗೆ 9.30ಕ್ಕೆ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕಾಸರಗೋಡು ಜಿಲ್ಲೆಗಳ ಆಯ್ದ ಭಜನಾ ಮಂಡಳಿಗಳ ಸುಮಾರು 400 ತಂಡಗಳ 6,000ಕ್ಕೂ ಅಧಿಕ ಭಜನಾ ಪಟುಗಳು ಭಾಗವಹಿಸಲಿರುವ ಶೋಭಾಯಾತ್ರೆ ನಡೆಯಲಿದೆ.
ವಿವಿಧ ಜಿಲ್ಲೆಗಳಿಂದ ಆಗಮಿಸುವ ಭಜನಾ ತಂಡಗಳು ಶೋಭಾಯಾತ್ರೆಯಲ್ಲಿ ಪಾಲ್ಗೊಂಡು ಭಕ್ತಿಗೀತೆ ಹಾಗೂ ಭಜನೆಯ ಮೂಲಕ ಧಾರ್ಮಿಕ ಮತ್ತು ಸಾಂಸ್ಕೃತಿಕ ವಾತಾವರಣವನ್ನು ನಿರ್ಮಿಸಲಿವೆ.
ಶೋಭಾಯಾತ್ರೆಯ ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಭಜನೆಯೊಂದಿಗೆ ನೃತ್ಯ ಭಜನಾ ಕಾರ್ಯಕ್ರಮ ನಡೆಯಲಿದೆ. ನೂರಾರು ಭಜನಾ ತಂಡಗಳ ಸಾವಿರಾರು ಭಜನಾ ಪಟುಗಳು ಒಂದೇ ವೇದಿಕೆಯಲ್ಲಿ ಭಜನೆ ಮತ್ತು ನೃತ್ಯದ ಮೂಲಕ ಭಕ್ತಿಭಾವವನ್ನು ಅಭಿವ್ಯಕ್ತಪಡಿಸಲಿದ್ದಾರೆ.
ಭಜನಾ ಕಮ್ಮಟವು ಭಜನಾ ಪರಂಪರೆಯ ಸಂರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಅದರ ಮಹತ್ವವನ್ನು ಪರಿಚಯಿಸುವುದರ ಜತೆಗೆ, ವಿವಿಧ ಜಿಲ್ಲೆಗಳ ಭಜನಾ ತಂಡಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಸಾಂಸ್ಕೃತಿಕ ಸೇತುವೆಯಾಗಿ ಕಾರ್ಯನಿರ್ವಹಿಸಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 








