ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ವತಿಯಿಂದ ಶಿವಮೊಗ್ಗ (Shivamogga) ನಗರದ ನವುಲೆ ಕೆಎಸ್ಸಿಎ ಮೈದಾನದಲ್ಲಿ ನಿರ್ಮಾಣಗೊಳ್ಳಲಿರುವ ಒಳಾಂಗಣ ಕ್ರೀಡಾಂಗಣದ ಕಾಮಗಾರಿಗೆ ಇಂದು ಸಂಜೆ 5 ಗಂಟೆಗೆ ಶಂಕುಸ್ಥಾಪನೆ ನೆರವೇರಲಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕೆಎಸ್ಸಿಎ ನಿರ್ದೇಶಕ ಡಿ.ಎಸ್. ಅರುಣ್ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಲೆನಾಡಿನಲ್ಲಿ ಮಳೆಗಾಲದಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವುದರಿಂದ ವಿವಿಧ ವಯೋಮಾನದ ಕ್ರಿಕೆಟಿಗರಿಗೆ ನಿರಂತರ ಅಭ್ಯಾಸ ನಡೆಸಲು ತೊಂದರೆಯಾಗುತ್ತಿದೆ. ಹಲವು ವರ್ಷಗಳಿಂದ ಇದ್ದ ಬೇಡಿಕೆಯ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಸುಸಜ್ಜಿತ ಒಳಾಂಗಣ ಅಭ್ಯಾಸ ವ್ಯವಸ್ಥೆ ನಿರ್ಮಿಸಲಾಗುತ್ತಿದೆ ಎಂದರು.
₹4.90 ಕೋಟಿ ವೆಚ್ಚದಲ್ಲಿ ಒಳಾಂಗಣ ಕ್ರೀಡಾಂಗಣ
ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ಸುಮಾರು ₹4.90 ಕೋಟಿ ವೆಚ್ಚವಾಗಲಿದೆ. ಹೊರಾಂಗಣ ಮೈದಾನದಲ್ಲಿ ಆಡುವ ಅನುಭವ ದೊರೆಯುವ ರೀತಿಯಲ್ಲಿ ಒಳಾಂಗಣ ಟರ್ಫ್ ವ್ಯವಸ್ಥೆ ಕಲ್ಪಿಸಲಾಗುವುದು. ನಾಲ್ಕು ಪಿಚ್ಗಳನ್ನು ನಿರ್ಮಿಸುವುದರ ಜತೆಗೆ ಆಟಗಾರರಿಗೆ ಜಿಮ್ ಸೇರಿದಂತೆ ಅಗತ್ಯ ತರಬೇತಿ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಡಿ.ಎಸ್. ಅರುಣ್ ಹೇಳಿದರು.
ಗಣ್ಯರ ಉಪಸ್ಥಿತಿಯಲ್ಲಿ ಶಂಕುಸ್ಥಾಪನೆ
ಕೆಎಸ್ಸಿಎ ಅಧ್ಯಕ್ಷ ಬಿ.ಕೆ. ವೆಂಕಟೇಶ್ ಪ್ರಸಾದ್ ಅವರ ನೇತೃತ್ವದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಸಂಸದ ಬಿ.ವೈ. ರಾಘವೇಂದ್ರ ಉದ್ಘಾಟಿಸಲಿದ್ದಾರೆ. ಶಾಸಕ ಎಸ್.ಎನ್. ಚನ್ನಬಸಪ್ಪ, ಜಿಲ್ಲಾಧಿಕಾರಿ ಪ್ರಭುಲಿಂಗ ಕವಲಿಕಟ್ಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
Also Read>> ಶಿಕಾರಿಪುರದಲ್ಲಿ ‘ನಮೋ ಸೇವಾ ಗಾಥಾ’ ನಾಟಕ ಪ್ರದರ್ಶನ
ಕೆಎಸ್ಸಿಎ ಉಪಾಧ್ಯಕ್ಷ ಸುಜಿತ್ ಸೋಮಸುಂದರ್, ಕಾರ್ಯದರ್ಶಿ ಸಂತೋಷ್ ಮೆನನ್, ಖಜಾಂಚಿ ಬಿ.ಎನ್. ಮಧುಕರ ಸೇರಿದಂತೆ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿರುವರು. ಕೆಎಸ್ಸಿಎ ಶಿವಮೊಗ್ಗ ವಲಯದ ಅಧ್ಯಕ್ಷ ನಾಗೇಂದ್ರ ಕೆ. ಪಂಡಿತ್, ವ್ಯವಸ್ಥಾಪನಾ ಸಮಿತಿ ಸದಸ್ಯ ಹಾಗೂ ಶಿವಮೊಗ್ಗ ವಲಯದ ಸಂಚಾಲಕ ಡಿ.ಎಸ್. ಅರುಣ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಕ್ರಿಕೆಟ್ ಕ್ಲಬ್ಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
₹5.80 ಕೋಟಿ ವೆಚ್ಚದಲ್ಲಿ ಕೆರೆ ಅಭಿವೃದ್ಧಿ
ಕೆಎಸ್ಸಿಎ ಮೈದಾನದ ಸಮೀಪದಲ್ಲಿರುವ ಕೆರೆಯ ಅಭಿವೃದ್ಧಿಗೂ ಕ್ರಮ ಕೈಗೊಳ್ಳಲಾಗುತ್ತಿದೆ. ಸುಮಾರು ₹5.80 ಕೋಟಿ ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮುಂದಿನ ಹಂತದ ಅನುಮೋದನೆಗಾಗಿ ಪೌರಾಡಳಿತ ನಿರ್ದೇಶನಾಲಯಕ್ಕೆ (ಡಿಎಂಎ) ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅರುಣ್ ತಿಳಿಸಿದರು.
Shivamogga: ಶಿವಮೊಗ್ಗವನ್ನು ಕ್ರಿಕೆಟ್ ಹಬ್ ಮಾಡುವ ಗುರಿ
ಶಿವಮೊಗ್ಗವನ್ನು ಕ್ರಿಕೆಟ್ ಹಬ್ ಆಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮೂಲಸೌಕರ್ಯ, ಪಂದ್ಯಾವಳಿ ಹಾಗೂ ತರಬೇತಿ ವ್ಯವಸ್ಥೆಗಳನ್ನು ಹಂತ ಹಂತವಾಗಿ ವಿಸ್ತರಿಸಲಾಗುತ್ತಿದೆ. ಈಗಾಗಲೇ ಗೋವಾದ ಮಾಜಿ ಕ್ರಿಕೆಟಿಗರು ಶಿವಮೊಗ್ಗಕ್ಕೆ ಆಗಮಿಸಿ ಪಂದ್ಯಗಳನ್ನು ಆಡಿದ್ದಾರೆ. ಮುಂದಿನ ದಿನಗಳಲ್ಲಿ ಶ್ರೀಲಂಕಾ ಹಾಗೂ ಆಸ್ಟ್ರೇಲಿಯಾ ತಂಡಗಳು ಶಿವಮೊಗ್ಗಕ್ಕೆ ಆಗಮಿಸಿ ಪಂದ್ಯಗಳನ್ನು ಆಡುವ ಸಾಧ್ಯತೆಯಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ನಾಗೇಂದ್ರ ಪಂಡಿತ್, ಸುಕುಮಾರ್ ಪಟೇಲ್, ಶೈಲೇಶ್ ಕುಮಾರ್, ಸುಬ್ರಹ್ಮಣ್ಯ, ಸಂಜಯ್ ಕುಮಾರ್, ಕಿರಣ್, ಯಶವಂತ್ ನಾಯ್ಕ್ ಹಾಗೂ ಆರ್.ಪಿ. ನಾಗರಾಜ್ ಉಪಸ್ಥಿತರಿದ್ದರು.
“2027ರ ರಣಜಿ ಟ್ರೋಫಿ ಪಂದ್ಯಾವಳಿಯ ಕರ್ನಾಟಕ–ಪಂಜಾಬ್ ನಡುವಿನ ಪಂದ್ಯವು ಫೆಬ್ರುವರಿ 1ರಿಂದ ನಗರದ ಕೆಎಸ್ಸಿಎ ನವುಲೆ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ.”
— ಡಿ.ಎಸ್. ಅರುಣ್, ವಿಧಾನ ಪರಿಷತ್ ಸದಸ್ಯ ಹಾಗೂ ಕೆಎಸ್ಸಿಎ ನಿರ್ದೇಶಕ
ನವುಲೆ ಕ್ರೀಡಾಂಗಣದಲ್ಲಿ ಶೀಘ್ರ ಫ್ಲಡ್ಲೈಟ್ ವ್ಯವಸ್ಥೆ
ನವುಲೆ ಕೆಎಸ್ಸಿಎ ಕ್ರೀಡಾಂಗಣದಲ್ಲಿ ಆಧುನಿಕ ಫ್ಲಡ್ಲೈಟ್ ವ್ಯವಸ್ಥೆ ಕಲ್ಪಿಸುವಂತೆ ಸಂಬಂಧಪಟ್ಟವರಿಗೆ ಈಗಾಗಲೇ ಮನವಿ ಸಲ್ಲಿಸಲಾಗಿದೆ. ಶೀಘ್ರದಲ್ಲೇ ಈ ವ್ಯವಸ್ಥೆ ಅನುಷ್ಠಾನಗೊಳ್ಳುವ ನಿರೀಕ್ಷೆಯಿದೆ ಎಂದು ಡಿ.ಎಸ್. ಅರುಣ್ ಹೇಳಿದರು.
ಫ್ಲಡ್ಲೈಟ್ ವ್ಯವಸ್ಥೆ ಕಲ್ಪಿಸಿದರೆ ರಾತ್ರಿ ವೇಳೆಯಲ್ಲಿಯೂ ಕ್ರಿಕೆಟ್ ತರಬೇತಿ ಹಾಗೂ ಪಂದ್ಯಗಳನ್ನು ಆಯೋಜಿಸಲು ಅನುಕೂಲವಾಗಲಿದೆ. 2027ರೊಳಗೆ ಫ್ಲಡ್ಲೈಟ್ ವ್ಯವಸ್ಥೆ ಜಾರಿಯಾದಲ್ಲಿ ಮಹಾರಾಜ ಟ್ರೋಫಿ ಟೂರ್ನಿಯ ಪಂದ್ಯಗಳನ್ನು ಶಿವಮೊಗ್ಗದಲ್ಲೇ ಆಯೋಜಿಸುವ ಕುರಿತು ಚಿಂತನೆ ನಡೆಸಲಾಗುವುದು ಎಂದರು.
2026ರ ಮಹಾರಾಜ ಟ್ರೋಫಿ ಟೂರ್ನಿಯ ಫೈನಲ್ನಲ್ಲಿ ಶಿವಮೊಗ್ಗ ಯೋಧಾಸ್ ತಂಡವು ಕಲ್ಯಾಣಿ ಬೆಂಗಳೂರು ಬ್ಲಾಸ್ಟರ್ಸ್ ತಂಡವನ್ನು ಸೋಲಿಸಿ ಟ್ರೋಫಿ ಗೆದ್ದಿದೆ. ಶಿವಮೊಗ್ಗದಲ್ಲಿ ಕ್ರಿಕೆಟ್ಗೆ ಉತ್ತಮ ಸ್ಪಂದನೆ ದೊರೆಯುತ್ತಿರುವ ಹಿನ್ನೆಲೆಯಲ್ಲಿ ಕ್ರೀಡಾಪಟುಗಳಿಗೆ ಆಧುನಿಕ ಮೂಲಸೌಕರ್ಯ ಕಲ್ಪಿಸಿ ಕ್ರಿಕೆಟ್ ಚಟುವಟಿಕೆಗಳಿಗೆ ಮತ್ತಷ್ಟು ಉತ್ತೇಜನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










