ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ಶಿವಮೊಗ್ಗ (Shivamogga) ಜಿಲ್ಲಾ ಕಾಂಗ್ರೆಸ್ (Congress) ವತಿಯಿಂದ ಸೋಮವಾರ ನಗರದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ಜ್ಞಾನೇಶ್ ಕುಮಾರ್ ಅವರ ಪ್ರತಿಕೃತಿ ದಹಿಸಿ, ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ಕಾಂಗ್ರೆಸ್ ಆಕ್ಷೇಪ
ಚುನಾವಣಾ ಆಯೋಗವು ಪ್ರಜಾಪ್ರಭುತ್ವದ ಪ್ರಮುಖ ಸಂಸ್ಥೆಯಾಗಿದ್ದು, ಅದರ ಕಾರ್ಯವೈಖರಿ ಕುರಿತು ಸಾರ್ವಜನಿಕವಾಗಿ ಹಾಗೂ ವಿವಿಧ ರಾಜಕೀಯ ಪಕ್ಷಗಳಿಂದ ಪ್ರಶ್ನೆಗಳು ವ್ಯಕ್ತವಾಗಿವೆ ಎಂದು ಪ್ರತಿಭಟನಾಕಾರರು ಹೇಳಿದರು. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ನೇತೃತ್ವದ ಆಯೋಗದ ಕಾರ್ಯವೈಖರಿ ಕುರಿತು ಗಂಭೀರ ಅನುಮಾನಗಳು ಮೂಡಿವೆ ಎಂದು ಅವರು ಆರೋಪಿಸಿದರು.
ವಿಶೇಷವಾಗಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಹಲವು ಆಕ್ಷೇಪಗಳನ್ನು ವ್ಯಕ್ತಪಡಿಸುತ್ತಿವೆ. ಇದೇ ವಿಚಾರವಾಗಿ ದೇಶದ ವಿವಿಧೆಡೆ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿರುವುದಾಗಿ ವರದಿಯಾಗಿದೆ.
SIR ಪ್ರಕ್ರಿಯೆ ನಿಲ್ಲಿಸುವಂತೆ ಒತ್ತಾಯ
ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪಗಳ ಕುರಿತು ಸ್ವತಂತ್ರ ತನಿಖೆ ನಡೆಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಮನವಿಯಲ್ಲಿ ಒತ್ತಾಯಿಸಿದೆ.
ಪರಿಷ್ಕರಣೆ ಪ್ರಕ್ರಿಯೆಯಿಂದ ಅರ್ಹ ಮತದಾರರು, ಅದರಲ್ಲೂ ಶೋಷಿತ, ಬಡ ಹಾಗೂ ಅಂಚಿನ ಸಮುದಾಯಗಳಿಗೆ ಸೇರಿದ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯುವ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಪ್ರತಿಭಟನಾಕಾರರು ಆತಂಕ ವ್ಯಕ್ತಪಡಿಸಿದರು. ಆದ್ದರಿಂದ ಪರಿಷ್ಕರಣೆ ಪ್ರಕ್ರಿಯೆಯನ್ನು ತಕ್ಷಣ ಸ್ಥಗಿತಗೊಳಿಸಿ, ಅರ್ಹ ಮತದಾರರ ಹೆಸರುಗಳು ಪಟ್ಟಿಯಿಂದ ಹೊರಬಿದ್ದಿವೆಯೇ ಎಂಬುದರ ಕುರಿತು ಸ್ವತಂತ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಮತದಾನದ ಹಕ್ಕು ರಕ್ಷಿಸುವಂತೆ ಮನವಿ
ಯಾವುದೇ ದುರ್ಬಲ ವರ್ಗದ ಮತದಾರರು ತಮ್ಮ ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡರು ಒತ್ತಾಯಿಸಿದರು.
ಅಲ್ಲದೆ, ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ವ್ಯಕ್ತವಾಗಿರುವ ಅನುಮಾನಗಳನ್ನು ಪರಿಶೀಲಿಸಿ, ಅಗತ್ಯವಿದ್ದಲ್ಲಿ ಸೂಕ್ತ ಸಂವಿಧಾನಿಕ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಆರೋಪಗಳ ಕುರಿತು ಕಾನೂನುಬದ್ಧ ಪರಿಶೀಲನೆಗೆ ಆಗ್ರಹ
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಕಾರ್ಯವೈಖರಿ ಕುರಿತು ವ್ಯಕ್ತವಾಗಿರುವ ಗಂಭೀರ ಆರೋಪಗಳನ್ನು ಸೂಕ್ತ ಸಂವಿಧಾನಿಕ ಪ್ರಕ್ರಿಯೆಯ ಮೂಲಕ ಪರಿಶೀಲಿಸಬೇಕು. ಆರೋಪಗಳು ಸತ್ಯವೆಂದು ದೃಢಪಟ್ಟಲ್ಲಿ ಕಾನೂನುಬದ್ಧ ಕ್ರಮ ಜರುಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಜ್ಞಾನೇಶ್ ಕುಮಾರ್ ವಿರುದ್ಧ ಸಂಸತ್ತಿನಲ್ಲಿ ಅವರನ್ನು ಹುದ್ದೆಯಿಂದ ತೆಗೆದುಹಾಕುವ ಪ್ರಸ್ತಾವನೆ ತರಲು ವಿರೋಧ ಪಕ್ಷಗಳು ಸಿದ್ಧತೆ ನಡೆಸಿರುವ ಬಗ್ಗೆ ರಾಷ್ಟ್ರೀಯ ಮಟ್ಟದಲ್ಲೂ ವರದಿಗಳು ಪ್ರಕಟವಾಗಿವೆ.
Also Read>> ವಿಜಯೇಂದ್ರರನ್ನು ಸೋಲಿಸುವುದೇ ನಮ್ಮ ಗುರಿ: ಮಧು ಬಂಗಾರಪ್ಪ
Shivamogga: ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರು ಭಾಗಿ
ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಸಿ. ಯೋಗೀಶ್, ಮಾಜಿ ಅಧ್ಯಕ್ಷ ಆರ್. ಪ್ರಸನ್ನಕುಮಾರ್, ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು, ಎನ್. ರಮೇಶ್, ಆರ್.ಎಂ. ಮಂಜುನಾಥ ಗೌಡ, ಎಂ. ಶ್ರೀಕಾಂತ್, ಇಸ್ಮಾಯಿಲ್ ಖಾನ್, ಚೇತನ್ ಗೌಡ, ಡಾ. ಶ್ರೀನಿವಾಸ್ ಕರಿಯಣ್ಣ, ಶ್ವೇತಾ ಬಂಡಿ, ರಮೇಶ್ ಶಂಕರಘಟ್ಟ, ಚಂದ್ರಭೂಪಾಲ್, ಶಿವಣ್ಣ, ಎಸ್.ಟಿ. ಹಾಲಪ್ಪ, ಶರತ್ ಮರಿಯಪ್ಪ, ಶಾಂತವೀರ ನಾಯ್ಕ, ಜಿ.ಡಿ. ಮಂಜುನಾಥ್, ಮಧುಸೂದನ್, ಹಾಪ್‌ಕಾಮ್ಸ್ ಅಧ್ಯಕ್ಷ ವಿಜಯ್ ಕುಮಾರ್ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ದಕ್ಷಿಣ ಮತ್ತು ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಲೀಂ ಪಾಷ ಹಾಗೂ ಶಿವಕುಮಾರ್, ಹೆಚ್.ಪಿ. ಗಿರೀಶ್, ನೇತ್ರಾವತಿ ಗೌಡ, ಪಾಲಾಕ್ಷಿ, ನಾಗರಾಜ್ ಕಂಕಾರಿ, ಷಡಾಕ್ಷರಿ, ವಿಜಯಲಕ್ಷ್ಮಿ ಪಾಟೀಲ್, ಸುವರ್ಣಾ ನಾಗರಾಜ್, ಚಿನ್ನಪ್ಪ, ಸ್ಟೆಲಾ ಮಾರ್ಟಿನ್, ತಂಗರಾಜ್, ದೇವೇಂದ್ರಪ್ಪ ಸೇರಿದಂತೆ ಹಲವು ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











