ಕಲ್ಪ ಮೀಡಿಯಾ ಹೌಸ್ | ಸಾಗರ (ಶಿವಮೊಗ್ಗ) |
ಸಾಗರ (Sagara) ತಾಲೂಕಿನ ಕಲ್ಗಲ್-ಹಲಕೊಟ್ಟಿಗೆ ಕ್ರಾಸ್ ಬಳಿ ಖಾಸಗಿ ಪ್ರವಾಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ ಪರಿಣಾಮ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಇಂದು ನಡೆದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ದಾವಣಗೆರೆಯ ಖಾಸಗಿ ಗಾರ್ಮೆಂಟ್ಸ್ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರು ವಾರಾಂತ್ಯದ ಹಿನ್ನೆಲೆಯಲ್ಲಿ ಪ್ರವಾಸಕ್ಕೆ ತೆರಳಿದ್ದರು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು, ಬಳಿಕ ಶರಾವತಿ ಹಿನ್ನೀರಿನಲ್ಲಿರುವ ಸಿಗಂದೂರು ಶ್ರೀ ಚೌಡೇಶ್ವರಿ ದೇವಾಲಯದತ್ತ ತೆರಳುತ್ತಿದ್ದ ವೇಳೆ ಈ ದುರ್ಘಟನೆ (accident) ಸಂಭವಿಸಿದೆ.
ಕಲ್ಗಲ್-ಹಲಕೊಟ್ಟಿಗೆ ಕ್ರಾಸ್ ಸಮೀಪದ ಕಡಿದಾದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಗೆ ಉರುಳಿ ಪಲ್ಟಿಯಾಗಿದೆ ಎನ್ನಲಾಗಿದೆ. ಬಸ್ ಪಲ್ಟಿಯಾದ ಪರಿಣಾಮ ಅದರಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.
Sagara: ಸ್ಥಳೀಯರಿಂದ ರಕ್ಷಣಾ ಕಾರ್ಯ
ಬಸ್ ಪಲ್ಟಿಯಾಗುತ್ತಿದ್ದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ವಾಹನ ಸವಾರರು ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಕ್ಕೆ ಮುಂದಾದರು. ಬಸ್ನ ಕಿಟಕಿ ಗಾಜುಗಳನ್ನು ಒಡೆದು ಒಳಗೆ ಸಿಲುಕಿಕೊಂಡಿದ್ದ ಪ್ರಯಾಣಿಕರನ್ನು ಹೊರಗೆ ಕರೆತರಲು ನೆರವಾದರು. ಬಳಿಕ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ.
ಘಟನೆಯಲ್ಲಿ ಸುಮಾರು ಮೂರರಿಂದ ನಾಲ್ಕು ಮಂದಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಇನ್ನುಳಿದ ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಹೆಚ್ಚಿನ ಅನಾಹುತ ಸಂಭವಿಸದೆ ಹಲವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
Also Read>> ಶಿಕಾರಿಪುರ ಕುಮದ್ವತಿ ಕಾಲೇಜಿನಲ್ಲಿ ಗಾಂಧೀಜಿ-ಶಾಸ್ತ್ರಿ ಜಯಂತಿ ಆಚರಣೆ
ಪೊಲೀಸರ ಭೇಟಿ, ತನಿಖೆ
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಕಾರ್ಗಲ್ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












