ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಾನಸಿಕ ಆರೋಗ್ಯದ ಮಹತ್ವದ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಪ್ರೇರಣಾ ಎಜುಕೇಷನಲ್ ಅಂಡ್ ಸೋಷಿಯಲ್ ಟ್ರಸ್ಟ್ (ರಿ.) ವತಿಯಿಂದ ಶಿವಮೊಗ್ಗ (Shivamogga) ನಗರದ ಪಿಇಎಸ್ ಪಬ್ಲಿಕ್ ಶಾಲೆಯಲ್ಲಿ (PES Public School) ವಿಶ್ವ ಮಾನಸಿಕ ಆರೋಗ್ಯ ದಿನದ ಅಂಗವಾಗಿ ಸೃಜನಶೀಲ ಅಭಿವ್ಯಕ್ತಿ ಸ್ಪರ್ಧೆಯನ್ನು ಆಯೋಜಿಸಲಾಯಿತು.
‘ಕಲೆಯ ಮೂಲಕ ನಿಮ್ಮ ಆಲೋಚನೆಗಳನ್ನು ವ್ಯಕ್ತಪಡಿಸಿ’ ಎಂಬ ಘೋಷವಾಕ್ಯದೊಂದಿಗೆ ನಡೆದ ಈ ಸ್ಪರ್ಧೆಯಲ್ಲಿ 1,200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ವಿವಿಧ ತರಗತಿಗಳ ವಿದ್ಯಾರ್ಥಿಗಳು ತಮ್ಮ ವಯಸ್ಸು ಮತ್ತು ಗ್ರಹಿಕೆಗೆ ಅನುಗುಣವಾಗಿ ಚಿತ್ರಕಲೆಯ ಮೂಲಕ ಭಾವನೆಗಳು, ಆಲೋಚನೆಗಳು ಹಾಗೂ ಮಾನಸಿಕ ಆರೋಗ್ಯದ ಮಹತ್ವವನ್ನು ಅಭಿವ್ಯಕ್ತಪಡಿಸಿದರು.
ಚಿತ್ರಕಲೆಯ ಮೂಲಕ ಸಂತೋಷದ ಅಭಿವ್ಯಕ್ತಿ
1ರಿಂದ 4ನೇ ತರಗತಿಯ ವಿದ್ಯಾರ್ಥಿಗಳು ತಮ್ಮ ಕಲ್ಪನೆಯಲ್ಲಿ ಮೂಡಿದ ಸಂತೋಷದ ಮುಖಗಳನ್ನು ಬಣ್ಣಬಣ್ಣದ ಚಿತ್ರಗಳ ಮೂಲಕ ರೂಪಿಸಿದರು. 5ರಿಂದ 7ನೇ ತರಗತಿಯ ವಿದ್ಯಾರ್ಥಿಗಳು ಕುಟುಂಬ, ಸ್ನೇಹಿತರು, ಆಟ, ಪ್ರಕೃತಿ ಹಾಗೂ ಪುಸ್ತಕಗಳು ತಮ್ಮ ಬದುಕಿನಲ್ಲಿ ಸಂತೋಷವನ್ನು ಹೇಗೆ ತರುತ್ತವೆ ಎಂಬುದನ್ನು ಚಿತ್ರಗಳ ಮೂಲಕ ಅಭಿವ್ಯಕ್ತಿಸಿದರು.
ಇನ್ನು 8ರಿಂದ 10ನೇ ತರಗತಿಯ ವಿದ್ಯಾರ್ಥಿಗಳು ಮಾನಸಿಕ ಆರೋಗ್ಯದ ಕುರಿತು ಸಮಾಜದಲ್ಲಿರುವ ಮೂಢನಂಬಿಕೆ, ಭಯ ಮತ್ತು ಮೌನವನ್ನು ತೊಡೆದುಹಾಕುವ ಅಗತ್ಯವನ್ನು ತಮ್ಮ ಕಲಾಕೃತಿಗಳ ಮೂಲಕ ಸಾರಿದರು. ಮಾನಸಿಕ ಸಮಸ್ಯೆಗಳ ಬಗ್ಗೆ ಮುಕ್ತವಾಗಿ ಮಾತನಾಡುವುದು, ಅಗತ್ಯವಿದ್ದಾಗ ಸಹಾಯ ಪಡೆಯುವುದು ಹಾಗೂ ಭಾವನೆಗಳನ್ನು ಮುಕ್ತವಾಗಿ ವ್ಯಕ್ತಪಡಿಸುವ ಮಹತ್ವವನ್ನು ಚಿತ್ರಗಳಲ್ಲಿ ಪರಿಣಾಮಕಾರಿಯಾಗಿ ಮೂಡಿಸಿದರು.
Also Read>> ಎಐ ಯುಗದಲ್ಲಿ ಸ್ವಯಂ ಕಲಿಕೆ, ಕೌಶಲ್ಯಾಭಿವೃದ್ಧಿಗೆ ಆದ್ಯತೆ ನೀಡಿ: ಎಸ್.ಎನ್. ನಾಗರಾಜ
Shivamogga: ಅತ್ಯುತ್ತಮ ಕಲಾಕೃತಿಗಳಿಗೆ ಬಹುಮಾನ
ಸ್ಪರ್ಧೆಯಲ್ಲಿ ಭಾಗವಹಿಸಿದ ವಿವಿಧ ತರಗತಿಗಳ ವಿದ್ಯಾರ್ಥಿಗಳ ಕಲಾಕೃತಿಗಳಲ್ಲಿ ಅತ್ಯುತ್ತಮ ಮೂರು ಕಲಾಕೃತಿಗಳನ್ನು ಆಯ್ಕೆ ಮಾಡಿ ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು.
ಕಾರ್ಯಕ್ರಮದ ಸಂಯೋಜಕರಾದ ಡಾ. ಐಶ್ವರ್ಯ ವಿ.ಎಚ್. ಮತ್ತು ಜಾನವಿ ಕೆ.ಪಿ. ಅವರು ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯದ ಮಹತ್ವದ ಕುರಿತು ಮಾಹಿತಿ ನೀಡಿದರು. ಮಾನಸಿಕ ಆರೋಗ್ಯವು ದೈಹಿಕ ಆರೋಗ್ಯದಷ್ಟೇ ಮುಖ್ಯವಾಗಿದ್ದು, ಅದನ್ನು ಕಾಪಾಡಿಕೊಳ್ಳುವುದು ಪ್ರತಿಯೊಬ್ಬರಿಗೂ ಅಗತ್ಯವಾಗಿದೆ ಎಂದು ಮಕ್ಕಳಿಗೆ ತಿಳಿಹೇಳಿದರು.
ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ಭಾವನಾತ್ಮಕ ಬುದ್ಧಿಮತ್ತೆ ಹಾಗೂ ಮಾನಸಿಕ ಆರೋಗ್ಯದ ಕುರಿತು ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಯಿತು. ಕಲೆಯ ಮೂಲಕ ತಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆಯನ್ನು ಒದಗಿಸಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











