ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ (Shivamogga) ಜಿಲ್ಲೆಯ ಭಾರತ್ ಜೋಡೋ ಯುವ ಸಂಘದ ನೂತನ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ಅವರನ್ನು ನೇಮಕ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ (Madhu Bangarappa) ಅವರು ಬೆಂಗಳೂರಿನ ತಮ್ಮ ಗೃಹ ಕಚೇರಿಯಲ್ಲಿ ಗೀತೇಂದ್ರ ಅವರನ್ನು ಅಭಿನಂದಿಸಿ ಶುಭ ಹಾರೈಸಿದರು.
Shivamogga: ಯುವ ಸಬಲೀಕರಣಕ್ಕೆ ಆದ್ಯತೆ
ಕರ್ನಾಟಕ ಸರ್ಕಾರವು ಯುವ ಸಬಲೀಕರಣ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ಯುವಕರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವ ಉದ್ದೇಶದಿಂದ ಭಾರತ್ ಜೋಡೋ ಯುವ ಸಂಘ (BJYS) ಯೋಜನೆಯನ್ನು ಜಾರಿಗೆ ತಂದಿದೆ.
ಈ ಯೋಜನೆಯ ಆಶಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಗೀತೇಂದ್ರ ಅವರು ಕಾರ್ಯನಿರ್ವಹಿಸಬೇಕು ಎಂದು ಸಚಿವ ಮಧು ಬಂಗಾರಪ್ಪ ಸಲಹೆ ನೀಡಿದರು. ಜಿಲ್ಲೆಯ ಯುವಕರನ್ನು ಸಂಘಟಿಸಿ, ಅವರನ್ನು ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಮಾಡುವ ಮೂಲಕ ಸಂಘದ ಉದ್ದೇಶಗಳನ್ನು ಸಾಕಾರಗೊಳಿಸಬೇಕು ಎಂದು ಪ್ರೋತ್ಸಾಹಿಸಿದರು.
Also Read>> ಶಿವಮೊಗ್ಗದ ಇಎಸ್ಐ ಫಲಾನುಭವಿಗಳ ನೆರವಿಗೆ ಧಾವಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಗಣ್ಯರ ಉಪಸ್ಥಿತಿ
ಈ ಸಂದರ್ಭದಲ್ಲಿ ಮಾಜಿ ಶಾಸಕ ಆಯನೂರು ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ಆರ್. ಪ್ರಸನ್ನಕುಮಾರ್, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕಲಗೋಡು ರತ್ನಾಕರ್, ಒಬಿಸಿ ರಾಜ್ಯ ಘಟಕದ ಸಂಯೋಜಕ ಜಿ.ಡಿ. ಮಂಜುನಾಥ್, ಹಾಪ್ಕಾಮ್ಸ್ ಅಧ್ಯಕ್ಷ ವಿಜಯ್ ಕುಮಾರ್ ಹಾಗೂ ಶರತ್ ಮರಿಯಪ್ಪ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











