ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕನ್ನಡ ಭಾಷೆ, ನಾಡು, ನುಡಿ ಹಾಗೂ ಸಂಸ್ಕೃತಿಯ ಮಹತ್ವವನ್ನು ಸಾರುವ ಉದ್ದೇಶದಿಂದ ಶ್ರೀ ಕೃಷ್ಣ ಪದವಿ ಕಾಲೇಜಿನ (Sri Krishna College) ನವ ಚೈತನ್ಯ ಕನ್ನಡ ಬಳಗದ ವತಿಯಿಂದ 71ನೇ ಕನ್ನಡ ರಾಜ್ಯೋತ್ಸವ (Kannada Rajyothsava) ಸಮಾರಂಭವನ್ನು ನವೆಂಬರ್ 6ರಂದು ಕಾಲೇಜಿನ ಸಭಾಂಗಣದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಬಿ.ಎಂ.ಶ್ರೀ. ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಬೈರಮಂಗಲ ರಾಮೇಗೌಡ ಅವರು ಮಾತನಾಡಿ, ಕನ್ನಡ ಭಾಷೆಯ ಗೌರವವನ್ನು ಕಾಪಾಡುವುದು ಮತ್ತು ದೈನಂದಿನ ಬದುಕಿನಲ್ಲಿ ಕನ್ನಡವನ್ನು ಬಳಸುವುದು ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಕರ್ನಾಟಕದಲ್ಲಿ ನೆಲೆಸಿರುವ ಪ್ರತಿಯೊಬ್ಬರೂ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಕಲಿಯಬೇಕು. ಕನ್ನಡ ಭಾಷೆಯ ಜೊತೆಗೆ ಈ ನಾಡಿನ ನೆಲ, ಜಲ, ಸಂಸ್ಕೃತಿ ಮತ್ತು ಪರಂಪರೆಯನ್ನು ಗೌರವಿಸಬೇಕು. ಭಾಷೆಯ ಬೆಳವಣಿಗೆಗೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.
Sri Krishna College: ಕನ್ನಡ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿರುವ ಸಂಸ್ಥೆಯ ಕಾರ್ಯ ಶ್ಲಾಘನೀಯ
ಇಂದಿನ ದಿನಗಳಲ್ಲಿ ಹಲವು ಶಿಕ್ಷಣ ಸಂಸ್ಥೆಗಳು ಕನ್ನಡ ಭಾಷೆಯನ್ನು ಕಡೆಗಣಿಸಿ, ಇಂಗ್ಲಿಷ್ ಭಾಷಾ ಶಿಕ್ಷಣವನ್ನೇ ವ್ಯಾಪಾರದ ಸಾಧನವನ್ನಾಗಿ ಮಾಡಿಕೊಳ್ಳುತ್ತಿರುವುದು ವಿಷಾದನೀಯ ಸಂಗತಿಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಇಂಗ್ಲಿಷ್ ಶಿಕ್ಷಣದ ಹೆಸರಿನಲ್ಲಿ ಪೋಷಕರಿಗೆ ತಪ್ಪು ಭರವಸೆಗಳನ್ನು ನೀಡುವ ಶಿಕ್ಷಣ ಸಂಸ್ಥೆಗಳ ಬಗ್ಗೆ ಎಚ್ಚರಿಕೆಯಿಂದಿರಬೇಕು. ಇಂತಹ ಸಂದರ್ಭದಲ್ಲಿ ಪ್ರಾಥಮಿಕ ಹಂತದಿಂದ ಸ್ನಾತಕೋತ್ತರ ಪದವಿವರೆಗೂ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಕಲಿಸುತ್ತಿರುವ ಶ್ರೀ ಕೃಷ್ಣ ಸಮೂಹ ವಿದ್ಯಾಸಂಸ್ಥೆಯ ಕಾರ್ಯ ನಿಜಕ್ಕೂ ಶ್ಲಾಘನೀಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳು ಇತರ ಭಾಷೆಗಳನ್ನು ಕಲಿಯುವುದರ ಜೊತೆಗೆ ಮಾತೃಭಾಷೆಯಾದ ಕನ್ನಡದ ಮೇಲಿನ ಅಭಿಮಾನ ಮತ್ತು ಗೌರವವನ್ನು ಉಳಿಸಿಕೊಳ್ಳಬೇಕು. ಕನ್ನಡ ಭಾಷೆಯ ಬಳಕೆ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ಸೀಮಿತವಾಗದೆ ಸಮಾಜದ ಎಲ್ಲ ಕ್ಷೇತ್ರಗಳಲ್ಲಿಯೂ ಹೆಚ್ಚಾಗಬೇಕು ಎಂದು ತಿಳಿಸಿದರು.
ಕನ್ನಡದಲ್ಲಿಯೇ ವ್ಯವಹರಿಸುವ ಮೂಲಕ ಭಾಷೆಗೆ ಗೌರವ ನೀಡಿ
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀ ಕೃಷ್ಣ ಸಮೂಹ ವಿದ್ಯಾಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ. ಎಂ. ರುಕ್ಮಾಂಗದ ನಾಯ್ಡು ಮಾತನಾಡಿ, ಕರ್ನಾಟಕದಲ್ಲಿ ವಾಸಿಸುವ ಪ್ರತಿಯೊಬ್ಬರೂ ಕನ್ನಡದಲ್ಲಿಯೇ ವ್ಯವಹರಿಸುವ ಮೂಲಕ ಭಾಷೆಗೆ ಗೌರವ ನೀಡಬೇಕು ಎಂದು ಹೇಳಿದರು.
ಶಿಕ್ಷಣದ ಮೂಲಕ ಜ್ಞಾನವನ್ನು ವೃದ್ಧಿಸಿಕೊಳ್ಳುವುದರ ಜೊತೆಗೆ ವಿದ್ಯಾರ್ಥಿಗಳು ಮತ್ತು ಯುವಜನತೆ ಕನ್ನಡ ಭಾಷೆಯ ಬೆಳವಣಿಗೆಗೆ ಸಕ್ರಿಯವಾಗಿ ಕೈಜೋಡಿಸಬೇಕು. ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ತಿಳಿಸಿದರು.
Also Read>> ಕಾಕೋಳು ಶಾಲೆಯ ಅದ್ವಿಕಾ ಆರ್.ಗೆ ತಾಲೂಕು ಮಟ್ಟದಲ್ಲಿ ಗೆಲುವು: ಜಿಲ್ಲಾ ಮಟ್ಟಕ್ಕೆ ಆಯ್ಕೆ
ಸಮಾರಂಭದಲ್ಲಿ ಸ್ನಾತಕೋತ್ತರ ಪದವಿ ಕೇಂದ್ರದ ನಿರ್ದೇಶಕ ಪ್ರೊ. ವೇಣುಗೋಪಾಲ್, ಕಾಲೇಜಿನ ಶೈಕ್ಷಣಿಕ ನಿರ್ದೇಶಕ ಪ್ರೊ. ಎಸ್.ಪಿ. ಮನೋಹರ್, ಶಾಲಾ ಶೈಕ್ಷಣಿಕ ನಿರ್ದೇಶಕಿ ಶಾಂತಲಾ ರವಿಶಂಕರ್, ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್. ಉಷಾಕುಮಾರಿ, ಸಂಜೆ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಸುರೇಶ್, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಶ್ರೀನಿವಾಸ್ ರೆಡ್ಡಿ, ವಿಜ್ಞಾನ ವಿಭಾಗದ ಪ್ರಾಂಶುಪಾಲ ಮಂಜುನಾಥ್, ಕನ್ನಡ ವಿಭಾಗದ ಮುಖ್ಯಸ್ಥ ಡಾ. ಚೌಡಯ್ಯ ಸೇರಿದಂತೆ ಸಂಸ್ಥೆಯ ಗಣ್ಯರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕನ್ನಡ ಭಾಷೆಯ ಮಹತ್ವ, ನಾಡಿನ ಸಂಸ್ಕೃತಿ ಮತ್ತು ಮಾತೃಭಾಷೆಯ ಬಳಕೆಯ ಅಗತ್ಯವನ್ನು ಸಾರುವ ಮೂಲಕ ಕನ್ನಡ ರಾಜ್ಯೋತ್ಸವ ಸಮಾರಂಭ ಅರ್ಥಪೂರ್ಣವಾಗಿ ನೆರವೇರಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









