ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ (Shivamogga) ನಗರದ ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿ ಒಂದಾದ ಗಾಂಧಿ ಬಜಾರ್ ಮುಖ್ಯ ರಸ್ತೆ ಹಾಗೂ ಶಿವಪ್ಪನಾಯಕ ಹೂವಿನ ಮಾರುಕಟ್ಟೆಯ ಬಹುಮಹಡಿ ಪಾರ್ಕಿಂಗ್ ಕಟ್ಟಡದ ಮುಂಭಾಗ ಫುಟ್ಪಾತ್ (Footpath) ಅತಿಕ್ರಮಿಸಿ ವ್ಯಾಪಾರ ನಡೆಸುತ್ತಿರುವವರ ವಿರುದ್ಧ ಸಂಚಾರಿ ಪೊಲೀಸರು ಮತ್ತೆ ತೆರವು ಕಾರ್ಯಾಚರಣೆ ನಡೆಸಿದರು.
ಕಳೆದ ಹಲವು ದಿನಗಳಿಂದ ಈ ಪ್ರದೇಶಗಳಲ್ಲಿ ಫುಟ್ಪಾತ್ಗಳನ್ನು ಅತಿಕ್ರಮಿಸಿ ವ್ಯಾಪಾರ ನಡೆಸುತ್ತಿರುವವರನ್ನು ಪೊಲೀಸರು ಹಲವು ಬಾರಿ ತೆರವುಗೊಳಿಸಿದ್ದರು. ಆದರೆ, ಪೊಲೀಸರು ಕಾರ್ಯಾಚರಣೆ ನಡೆಸಿದ ಕೆಲವೇ ದಿನಗಳಲ್ಲಿ ವ್ಯಾಪಾರಸ್ಥರು ಮತ್ತೆ ಅದೇ ಸ್ಥಳಗಳಲ್ಲಿ ವ್ಯಾಪಾರ ಆರಂಭಿಸುತ್ತಿರುವುದು ಕಂಡುಬಂದಿದೆ. ಇದರಿಂದ ಪಾದಚಾರಿಗಳು ಫುಟ್ಪಾತ್ ಬದಲಿಗೆ ರಸ್ತೆಯಲ್ಲಿಯೇ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದ್ದು, ವಾಹನ ಸವಾರರಿಗೂ ತೊಂದರೆಯಾಗುತ್ತಿದೆ.
ಸಂಚಾರಿ ಪೊಲೀಸ್ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಕಾರ್ಯಾಚರಣೆ
ಈ ಹಿನ್ನೆಲೆಯಲ್ಲಿ ಸಂಚಾರಿ ಪೊಲೀಸ್ ಇನ್ಸ್ಪೆಕ್ಟರ್ ದೇವರಾಜ್ ಅವರ ನೇತೃತ್ವದಲ್ಲಿ ಇಂದು ಮತ್ತೆ ತೆರವು ಕಾರ್ಯಾಚರಣೆ ಕೈಗೊಳ್ಳಲಾಯಿತು. ಸಂಚಾರಿ ಪೊಲೀಸ್ ಸಿಬ್ಬಂದಿಗಳು ಮಹಾನಗರ ಪಾಲಿಕೆ ಸಿಬ್ಬಂದಿಯ ಸಹಕಾರದೊಂದಿಗೆ ಫುಟ್ಪಾತ್ಗಳ ಮೇಲಿನ ಅತಿಕ್ರಮಣ ತೆರವುಗೊಳಿಸಿ, ಸಾರ್ವಜನಿಕರು ಹಾಗೂ ಪಾದಚಾರಿಗಳ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದರು.
Also Read>> ಬೆಂಗಳೂರು–ಮಂಗಳೂರು–ಗೋವಾ ನಡುವೆ ವಂದೇ ಭಾರತ್: ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ!
Shivamogga: ವ್ಯಾಪಾರಸ್ಥರಿಗೆ ಅಂತಿಮ ಎಚ್ಚರಿಕೆ
ಕಾರ್ಯಾಚರಣೆ ವೇಳೆ ಫುಟ್ಪಾತ್ಗಳನ್ನು ಅತಿಕ್ರಮಿಸಿ ವ್ಯಾಪಾರ ನಡೆಸದಂತೆ ಸಂಬಂಧಪಟ್ಟ ವ್ಯಾಪಾರಸ್ಥರಿಗೆ ಪೊಲೀಸರು ಅಂತಿಮ ಎಚ್ಚರಿಕೆ ನೀಡಿದರು. ಸಾರ್ವಜನಿಕರು ಮತ್ತು ಪಾದಚಾರಿಗಳ ಸಂಚಾರಕ್ಕೆ ಅಡ್ಡಿಯಾಗದ ರೀತಿಯಲ್ಲಿ ವ್ಯಾಪಾರ ನಡೆಸಬೇಕು. ಪದೇಪದೇ ಅತಿಕ್ರಮಣ ಮಾಡುವುದು ಸರಿಯಲ್ಲ ಎಂಬ ಸೂಚನೆಯನ್ನು ನೀಡಲಾಯಿತು.
ನಗರದ ಪ್ರಮುಖ ಮಾರುಕಟ್ಟೆ ಪ್ರದೇಶಗಳಲ್ಲಿ ಪಾದಚಾರಿಗಳ ಅನುಕೂಲ ಹಾಗೂ ಸುಗಮ ವಾಹನ ಸಂಚಾರದ ದೃಷ್ಟಿಯಿಂದ ಫುಟ್ಪಾತ್ಗಳು ಅತಿಕ್ರಮಣ ಮುಕ್ತವಾಗಿರುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಪೊಲೀಸರು ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳು ನಿರಂತರ ನಿಗಾ ವಹಿಸಬೇಕಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










