ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ (Shivamogga) ಜಿಲ್ಲಾ ಸಹಕಾರ ಯೂನಿಯನ್ ವತಿಯಿಂದ 73ನೇ ರಾಜ್ಯಮಟ್ಟದ ಸಹಕಾರ ಸಪ್ತಾಹದ (Cooperative Week) ನಾಲ್ಕನೇ ದಿನದ ಕಾರ್ಯಕ್ರಮವನ್ನು ನವೆಂಬರ್ 17ರಂದು ಬೆಳಗ್ಗೆ 10 ಗಂಟೆಗೆ ಶಿವಮೊಗ್ಗದ ಸಾಗರ ರಸ್ತೆಯಲ್ಲಿರುವ ಲಗನ್ ಕಲ್ಯಾಣಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ತಿಳಿಸಿದರು.
ನಗರದಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 73ನೇ ರಾಜ್ಯಮಟ್ಟದ ಸಹಕಾರ ಸಪ್ತಾಹವನ್ನು ನವೆಂಬರ್ 14ರಿಂದ 20ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಚರಿಸಲಾಗುತ್ತಿದೆ. ನವೆಂಬರ್ 14ರಂದು ಬೆಂಗಳೂರಿನಲ್ಲಿ ಸಪ್ತಾಹಕ್ಕೆ ಚಾಲನೆ ದೊರೆಯಲಿದ್ದು, ನವೆಂಬರ್ 20ರಂದು ಮಂಗಳೂರಿನಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಇದರ ಅಂಗವಾಗಿ ನಾಲ್ಕನೇ ದಿನದ ರಾಜ್ಯಮಟ್ಟದ ಕಾರ್ಯಕ್ರಮಕ್ಕೆ ಶಿವಮೊಗ್ಗ ಆತಿಥ್ಯ ವಹಿಸಲಿದೆ ಎಂದು ತಿಳಿಸಿದರು.
ಸಹಕಾರ ಶಿಕ್ಷಣ, ತರಬೇತಿ ಮತ್ತು ಪ್ರಚಾರಕ್ಕೆ ಆದ್ಯತೆ
ನವೆಂಬರ್ 17ರಂದು ನಡೆಯುವ ಕಾರ್ಯಕ್ರಮದಲ್ಲಿ ಸಹಕಾರ ಶಿಕ್ಷಣ, ತರಬೇತಿ ಹಾಗೂ ಪ್ರಚಾರದ ಮೂಲಕ ಸಹಕಾರ ಸಂಸ್ಥೆಗಳಲ್ಲಿ ಪರಿಣಾಮಕಾರಿ ಬದಲಾವಣೆ ತರುವ ಉದ್ದೇಶ ಹೊಂದಲಾಗಿದೆ. ಸಹಕಾರ ಕ್ಷೇತ್ರದ ಬೆಳವಣಿಗೆ, ಸಂಸ್ಥೆಗಳ ಕಾರ್ಯಕ್ಷಮತೆ ಹೆಚ್ಚಿಸುವುದು ಹಾಗೂ ಸಹಕಾರ ಚಳವಳಿಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಲಾಗಿದೆ ಎಂದರು.
ಕಾರ್ಯಕ್ರಮವನ್ನು ಸಹಕಾರ ಸಚಿವ ಲಕ್ಷ್ಮಣ ಸಂಗಪ್ಪ ಸವದಿ ಉದ್ಘಾಟಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸಹಕಾರ ಧ್ವಜಾರೋಹಣ ನೆರವೇರಿಸುವರು. ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ. ದೇವೇಗೌಡ ಅವರು ಸಹಕಾರ ಪಿತಾಮಹ ಸಿದ್ಧನಗೌಡ ಸಣ್ಣರಾಮನಗೌಡ ಪಾಟೀಲ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವರು. ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರು ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ವಹಿಸಲಿದ್ದಾರೆ. ಸಚಿವರಾದ ಟಿ. ರಘುಮೂರ್ತಿ, ಕೆ.ಎಸ್. ಬಸವಂತಪ್ಪ, ಶಾಸಕರಾದ ಬಿ.ಕೆ. ಸಂಗಮೇಶ್, ಗೋಪಾಲಕೃಷ್ಣ ಬೇಳೂರು, ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್. ರವಿ ಸೇರಿದಂತೆ ಜಿಲ್ಲೆಯ ಸಂಸದರು, ವಿಧಾನ ಪರಿಷತ್ ಸದಸ್ಯರು, ರಾಜ್ಯ ಹಾಗೂ ಜಿಲ್ಲಾ ಮಟ್ಟದ ಸಹಕಾರ ಸಂಸ್ಥೆಗಳ ಅಧ್ಯಕ್ಷರು ಮತ್ತು ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು.
Shivamogga: ಜಿಲ್ಲೆಯ ಏಳು ತಾಲೂಕುಗಳಲ್ಲೂ ಸಹಕಾರ ಸಪ್ತಾಹ
ರಾಜ್ಯಮಟ್ಟದ ಕಾರ್ಯಕ್ರಮದ ಜೊತೆಗೆ ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲೂ ನವೆಂಬರ್ 14ರಿಂದ 20ರವರೆಗೆ ವಿವಿಧ ವಿಷಯಗಳೊಂದಿಗೆ ಸಹಕಾರ ಸಪ್ತಾಹ ಆಚರಿಸಲಾಗುವುದು.
ನವೆಂಬರ್ 14 – ಸೊರಬ
ನವೆಂಬರ್ 15 – ಹೊಸನಗರ
ನವೆಂಬರ್ 16 – ಶಿಕಾರಿಪುರ
ನವೆಂಬರ್ 17 – ಶಿವಮೊಗ್ಗ
ನವೆಂಬರ್ 18 – ಸಾಗರ
ನವೆಂಬರ್ 19 – ಭದ್ರಾವತಿ
ನವೆಂಬರ್ 20 – ತೀರ್ಥಹಳ್ಳಿ
Also Read>> ಶಿವಮೊಗ್ಗ ಇ.ಎಸ್.ಐ. ಕಾರ್ಮಿಕರ ಒಪಿಡಿ ಸಮಸ್ಯೆ: ತಕ್ಷಣ ಪರಿಹಾರಕ್ಕೆ ಶಾಸಕ ಚನ್ನಬಸಪ್ಪ ಆಗ್ರಹ
ಈ ಎಲ್ಲಾ ಕಾರ್ಯಕ್ರಮಗಳ ನೇತೃತ್ವವನ್ನು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ, ರಾಜ್ಯ ಸಹಕಾರ ಮಹಾಮಂಡಳದ ಉಪಾಧ್ಯಕ್ಷ ಬಿ.ಕೆ. ಶಿವಕುಮಾರ್, ಹಾಲು ಒಕ್ಕೂಟದ ಅಧ್ಯಕ್ಷ ಹೆಚ್.ಎನ್. ವಿದ್ಯಾಧರ್ ಹಾಗೂ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಹನುಮಂತಪ್ಪ ಸಿ. ಆಗರದಹಳ್ಳಿ ವಹಿಸಲಿದ್ದಾರೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುಧೀರ್, ಮಾಜಿ ಉಪಾಧ್ಯಕ್ಷ ಎಸ್.ಕೆ. ಮರಿಯಪ್ಪ, ಹಾಲು ಒಕ್ಕೂಟದ ಅಧ್ಯಕ್ಷ ಹೆಚ್.ಎನ್. ವಿದ್ಯಾಧರ್, ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಹನುಮಂತಪ್ಪ ಸಿ. ಆಗರದಹಳ್ಳಿ, ಹೆಚ್.ಬಿ. ದಿನೇಶ್, ಮಹಾಲಿಂಗಶಾಸ್ತ್ರಿ ಹಾಗೂ ಸಿಇಒ ಯಶವಂತಕುಮಾರ್ ಹೆಚ್. ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









