ಕಲ್ಪ ಮೀಡಿಯಾ ಹೌಸ್ | ಗುವಾಹಟಿ (ಅಸ್ಸಾಂ) |
ಅಸ್ಸಾಂನ (Assam) ಕಾಜಿರಂಗದಲ್ಲಿ ಗುರುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 25 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಟ್ರಕ್ ಮತ್ತು ಮಿನಿ ಬಸ್ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಿಂದ (Truck Minibus Accident) ಈ ದುರ್ಘಟನೆ ಸಂಭವಿಸಿದೆ. ಗಾಯಗೊಂಡ 17 ಪ್ರಯಾಣಿಕರ ಪೈಕಿ ಆರು ಮಂದಿಯ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕ ವ್ಯಕ್ತವಾಗಿದೆ.
ಕಾಜಿರಂಗ ಸಮೀಪದ ರೊಂಗಾಜನ್ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಬೊಕಾಖಾಟ್ನಿಂದ ನಗಾಂವ್ ಕಡೆಗೆ ಪ್ರಯಾಣಿಸುತ್ತಿದ್ದ ಮಿನಿ ಬಸ್ಗೆ ಟ್ರಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮಿನಿ ಬಸ್ ಸಂಪೂರ್ಣವಾಗಿ ಜಖಂಗೊಂಡಿದ್ದು, ಹಲವು ಪ್ರಯಾಣಿಕರು ವಾಹನದ ಅವಶೇಷಗಳೊಳಗೆ ಸಿಲುಕಿಕೊಂಡಿದ್ದರು.
ಜಖಂಗೊಂಡ ಬಸ್ನಲ್ಲಿ ಸಿಲುಕಿದ್ದ ಪ್ರಯಾಣಿಕರು
ಅಪಘಾತದ ತೀವ್ರತೆಗೆ ಮಿನಿ ಬಸ್ನ ಮುಂಭಾಗ ಸೇರಿದಂತೆ ಹಲವು ಭಾಗಗಳು ನಜ್ಜುಗುಜ್ಜಾಗಿವೆ. ಪ್ರಯಾಣಿಕರು ವಾಹನದೊಳಗೆ ಸಿಲುಕಿಕೊಂಡಿದ್ದರಿಂದ ರಕ್ಷಣಾ ಕಾರ್ಯಾಚರಣೆ ಸವಾಲಿನ ಕೆಲಸವಾಗಿತ್ತು. ಮಾಹಿತಿ ತಿಳಿದ ತಕ್ಷಣ ಪೊಲೀಸರು ಹಾಗೂ ಸ್ಥಳೀಯ ನಿವಾಸಿಗಳು ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು.
ವಾಹನದ ಅವಶೇಷಗಳಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಹೊರತೆಗೆಯಲು ಹರಸಾಹಸ ನಡೆಸಲಾಯಿತು. ಗಾಯಾಳುಗಳನ್ನು ತಕ್ಷಣ ಕೋಹೋರಾ ಮಾದರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡಿರುವ ಆರು ಮಂದಿಗೆ ತುರ್ತು ಚಿಕಿತ್ಸೆ ಮುಂದುವರಿದಿದೆ.
ವೇಗದ ಚಾಲನೆಯೇ ಅಪಘಾತಕ್ಕೆ ಕಾರಣವೇ?
ಅಪಘಾತದ ಕುರಿತು ಪ್ರತಿಕ್ರಿಯಿಸಿರುವ ಗೋಲಾಘಾಟ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ವಪ್ನನೀಲ್ ಡೇಕಾ, ಪ್ರಾಥಮಿಕ ವರದಿಯ ಪ್ರಕಾರ ಏಳು ಮಂದಿ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿತ್ತು. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಬಸ್ನಿಂದ ಮೃತದೇಹಗಳನ್ನು ಹೊರತೆಗೆಯಲಾಗುತ್ತಿದೆ. ಹೀಗಾಗಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದರು.
ಮಿನಿ ಬಸ್ ಅತಿಯಾದ ವೇಗದಲ್ಲಿ ಸಂಚರಿಸುತ್ತಿತ್ತು. ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ವಿಧಿಸಲಾಗಿದ್ದ ವೇಗದ ನಿರ್ಬಂಧಗಳನ್ನು ಉಲ್ಲಂಘಿಸಿರುವ ಸಾಧ್ಯತೆಯಿದೆ. ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಮಿನಿ ಬಸ್ ಕಂಟೇನರ್ ಟ್ರಕ್ಗೆ ಡಿಕ್ಕಿ ಹೊಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಅಪಘಾತದ ನಿಖರ ಕಾರಣದ ಕುರಿತು ತನಿಖೆ ಮುಂದುವರಿದಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯೂ ಮುಂದುವರಿದಿದೆ.
Also Read>> ‘ನಮ್ಮ ಸಹಕಾರದಿಂದಲೇ ಮೆಟ್ರೋ ಶತಕ’: ಡಿಕೆಶಿ ಸಮ್ಮುಖದಲ್ಲೇ ಕೇಂದ್ರದ ಕೊಡುಗೆ ಬಿಚ್ಚಿಟ್ಟ ಮೋದಿ!
Assam: ದುರ್ಘಟನೆಗೆ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸಂತಾಪ
ಕಾಜಿರಂಗದಲ್ಲಿ ಸಂಭವಿಸಿದ ಭೀಕರ ಅಪಘಾತಕ್ಕೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಕಾಜಿರಂಗದಲ್ಲಿ ನಡೆದ ಭೀಕರ ಅಪಘಾತದಿಂದ ತೀವ್ರ ದುಃಖಿತನಾಗಿದ್ದೇನೆ. ಈ ದುರಂತದಿಂದ ಸಂಭವಿಸಿರುವ ಜೀವಹಾನಿ ಎಲ್ಲರನ್ನೂ ಬೆಚ್ಚಿಬೀಳಿಸಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳ ನೋವಿನಲ್ಲಿ ಇಡೀ ಅಸ್ಸಾಂ ರಾಜ್ಯ ಭಾಗಿಯಾಗಿದೆ. ಅವರ ದುಃಖವನ್ನು ಯಾವುದೇ ಮಾತುಗಳಿಂದ ಕಡಿಮೆ ಮಾಡಲು ಸಾಧ್ಯವಿಲ್ಲ. ಈ ಕಷ್ಟದ ಸಮಯದಲ್ಲಿ ನಾವೆಲ್ಲರೂ ಅವರೊಂದಿಗಿದ್ದೇವೆ ಎಂದು ಸಂತಾಪ ಸೂಚಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









