ಕಲ್ಪ ಮೀಡಿಯಾ ಹೌಸ್ | ಧಾರವಾಡ |
ಎಸ್ಎಸ್ಎಲ್ಸಿ (SSLC) ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಈ ಬಾರಿ ಶೇ.100ರಷ್ಟು ಫಲಿತಾಂಶ ದಾಖಲಿಸುವ ಗುರಿಯೊಂದಿಗೆ ಶಿಕ್ಷಕರು ಸಂಕಲ್ಪ ಮಾಡಬೇಕು. ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ಹೆಚ್ಚಿಸಿ, ಉತ್ತಮ ಫಲಿತಾಂಶ ಸಾಧಿಸಲು ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ (Madhu Bangarappa)ಕರೆ ನೀಡಿದರು.
ಐಐಟಿ ಧಾರವಾಡದಲ್ಲಿ ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಂಯುಕ್ತವಾಗಿ ಆಯೋಜಿಸಿದ್ದ 2026-27ನೇ ಸಾಲಿನ ರಾಜ್ಯಮಟ್ಟದ ‘ಮಿಷನ್-60+’ (Karnataka Mission 60 plus) ಕಾರ್ಯಕ್ರಮಕ್ಕೆ ಧಾರವಾಡ ವಿಭಾಗ ಮಟ್ಟದ ಸಂಪನ್ಮೂಲ ಶಿಕ್ಷಕರ ಕಾರ್ಯಾಗಾರದ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಕಳೆದ ಸಾಲಿನ ಫಲಿತಾಂಶ ಸಾರ್ವಕಾಲಿಕ ದಾಖಲೆ
ಕಳೆದ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಬಹುತೇಕ ಶಾಲೆಗಳಲ್ಲಿ ಶಿಕ್ಷಕರು ವಿಶೇಷ ಆಸಕ್ತಿ ವಹಿಸಿ ಹೆಚ್ಚುವರಿ ತರಗತಿಗಳನ್ನು ನಡೆಸಿ, ಮಕ್ಕಳಿಗೆ ಹೆಚ್ಚಿನ ಕಲಿಕಾ ಅವಕಾಶಗಳನ್ನು ಕಲ್ಪಿಸಿದ ಪರಿಣಾಮ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.98.08 ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.92.25ರಷ್ಟು ಫಲಿತಾಂಶ ದಾಖಲಾಗಿದೆ. ಇದು ರಾಜ್ಯದ ಸಾರ್ವಕಾಲಿಕ ದಾಖಲೆಯಾಗಿದೆ. ಈ ಬಾರಿ ಅದನ್ನು ಮತ್ತಷ್ಟು ಸುಧಾರಿಸಿ ಶೇ.100ರಷ್ಟು ಫಲಿತಾಂಶ ಸಾಧಿಸುವ ಗುರಿ ಹೊಂದಲಾಗಿದೆ ಎಂದರು.
ಕಳೆದ ವರ್ಷದ ಉತ್ತಮ ಫಲಿತಾಂಶದ ಹಿಂದೆ ಶಿಕ್ಷಕರ ವಿಶೇಷ ಪರಿಶ್ರಮವಿದೆ. ಮಾಡೆಲ್ ಪ್ರಶ್ನೆಪತ್ರಿಕೆಗಳನ್ನು ಬಿಡಿಸುವ ಅಭ್ಯಾಸದಿಂದ ಮಕ್ಕಳಲ್ಲಿ ಪರೀಕ್ಷೆಯ ಆತ್ಮವಿಶ್ವಾಸ ಹೆಚ್ಚಾಗಿದೆ ಎಂದು ಅನೇಕ ಪೋಷಕರು ಹಾಗೂ ವಿದ್ಯಾರ್ಥಿಗಳು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಹೀಗಾಗಿ ಹಿಂದಿನ ವರ್ಷದ ಪ್ರಶ್ನೆಪತ್ರಿಕೆಗಳನ್ನು ಸಮಗ್ರವಾಗಿ ಅವಲೋಕಿಸಿ, ಮಾದರಿ ಪ್ರಶ್ನೆಪತ್ರಿಕೆಗಳ ಅಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡಬೇಕು. ಪರೀಕ್ಷೆಗೆ ಇನ್ನೂ ಸಾಕಷ್ಟು ಸಮಯವಿದ್ದು, ಈಗಿನಿಂದಲೇ ಯೋಜನಾಬದ್ಧವಾಗಿ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.
ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು
ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ತಂದೆ-ತಾಯಿ ಮಕ್ಕಳಿಗೆ ಜನ್ಮ ನೀಡಿದರೆ, ಶಿಕ್ಷಕರು ಅವರ ಭವಿಷ್ಯವನ್ನು ರೂಪಿಸುತ್ತಾರೆ. ಪೋಷಕರಿಗಿಂತ ಹೆಚ್ಚಿನ ಸಮಯವನ್ನು ಮಕ್ಕಳೊಂದಿಗೆ ಕಳೆಯುವ ಶಿಕ್ಷಕರು ಅವರ ಬದುಕಿಗೆ ದಾರಿದೀಪವಾಗಿದ್ದಾರೆ. ತಾವು ಇಂದು ಉತ್ತಮ ಶಿಕ್ಷಣ ಸಚಿವನಾಗಿ ಕಾರ್ಯನಿರ್ವಹಿಸಲು ಶಿಕ್ಷಕರೇ ಕಾರಣ. ಶಿಕ್ಷಕರ ಬಗ್ಗೆ ಅಪಾರ ಹೆಮ್ಮೆ ಮತ್ತು ಗೌರವವಿದ್ದು, ಅವರಿಗೆ ಅಗತ್ಯವಿರುವ ಎಲ್ಲ ಸಹಕಾರ ನೀಡಲು ಬದ್ಧನಾಗಿದ್ದೇನೆ ಎಂದು ತಿಳಿಸಿದರು.
ಮಕ್ಕಳಲ್ಲಿ ಕೇವಲ ಶೈಕ್ಷಣಿಕ ಪ್ರತಿಭೆಯನ್ನಷ್ಟೇ ಗುರುತಿಸಿದರೆ ಸಾಲದು. ಕ್ರೀಡೆ, ಸಂಗೀತ, ವಿಜ್ಞಾನ, ರಂಗಭೂಮಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಆಸಕ್ತಿ ಮತ್ತು ಪ್ರತಿಭೆ ಹೊಂದಿರುವ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಉತ್ತಮ ಮೌಲ್ಯಗಳನ್ನು ಬೆಳೆಸುವುದರ ಜೊತೆಗೆ ಅವರ ವ್ಯಕ್ತಿತ್ವ ವಿಕಸನಕ್ಕೂ ಆದ್ಯತೆ ನೀಡಬೇಕು. ಶಿಕ್ಷಣ ಇಲಾಖೆಯಲ್ಲಿರುವ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದರು.
ತಮ್ಮ ತಂದೆ, ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ದೇಶದಲ್ಲೇ ಮೊದಲ ಬಾರಿಗೆ ಗ್ರಾಮೀಣ ಕೃಪಾಂಕ ಯೋಜನೆ ಜಾರಿಗೆ ತಂದಿದ್ದರು. ಅವರು ಸರ್ಕಾರಿ ಶಾಲೆಯಲ್ಲಿಯೇ ಶಿಕ್ಷಣ ಪಡೆದವರು. ಸರ್ಕಾರಿ ಶಾಲೆಗಳ ಮಹತ್ವ ಮತ್ತು ಶಕ್ತಿಗೆ ಇದು ಸಾಕ್ಷಿಯಾಗಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಸರ್ಕಾರಿ ಶಾಲೆಯಲ್ಲಿ ಓದಿದವರು. ಶಿಕ್ಷಕರು ಮಕ್ಕಳ ಭವಿಷ್ಯ ರೂಪಿಸಿದರೆ, ರೈತರು ದೇಶಕ್ಕೆ ಅನ್ನ ನೀಡುತ್ತಾರೆ. ಹೀಗಾಗಿ ಶಿಕ್ಷಕರು ಮತ್ತು ರೈತರ ಬಗ್ಗೆ ಅಪಾರ ಗೌರವ ಹೊಂದಿರಬೇಕು ಎಂದು ಹೇಳಿದರು.
ಪ್ರತಿ ಮಗುವಿಗೂ ಪರೀಕ್ಷೆ ಬರೆಯುವ ಅವಕಾಶ ಕಲ್ಪಿಸುವುದು ನಮ್ಮ ಜವಾಬ್ದಾರಿ
ಎಸ್ಎಸ್ಎಲ್ಸಿ ಪರೀಕ್ಷೆಗೆ ಎರಡು ಅವಕಾಶಗಳನ್ನು ನೀಡುವ ವ್ಯವಸ್ಥೆ ಜಾರಿಗೆ ತರಲಾಗಿದೆ. ಒಂದು ಬಾರಿ ಅನುತ್ತೀರ್ಣರಾದ ಕಾರಣಕ್ಕೆ ವಿದ್ಯಾರ್ಥಿಗಳು ಮತ್ತೊಂದು ವರ್ಷ ಕಾಯುವ ಪರಿಸ್ಥಿತಿ ಬರಬಾರದು ಎಂಬುದು ಇದರ ಉದ್ದೇಶವಾಗಿದೆ. ಅವಕಾಶಗಳ ಕೊರತೆಯಿಂದ ಯಾವುದೇ ಮಗು ಶಿಕ್ಷಣದಿಂದ ಹಿಂದೆ ಉಳಿಯಬಾರದು. ಪರೀಕ್ಷೆಯಲ್ಲಿ ನಕಲು ಮಾಡುವುದರಿಂದ ತಾತ್ಕಾಲಿಕವಾಗಿ ಅಂಕ ಗಳಿಸಬಹುದೇ ಹೊರತು, ಭವಿಷ್ಯವನ್ನು ಕಟ್ಟಿಕೊಳ್ಳಲು ಸಾಧ್ಯವಿಲ್ಲ. ಪರೀಕ್ಷಾ ಅಕ್ರಮ ತಡೆಗಟ್ಟಲು ರಾಜ್ಯದಲ್ಲಿ ದೇಶದಲ್ಲೇ ಮೊದಲ ಬಾರಿಗೆ ವೆಬ್ಕಾಸ್ಟಿಂಗ್ ವ್ಯವಸ್ಥೆ ಪರಿಚಯಿಸಲಾಗಿದೆ. ನಮ್ಮ ಎರಡು ಪರೀಕ್ಷೆಗಳ ಮಾದರಿಯನ್ನು ಕೇಂದ್ರ ಸರ್ಕಾರವೂ ಅಳವಡಿಸಿಕೊಳ್ಳುತ್ತಿದೆ ಎಂದು ತಿಳಿಸಿದರು.
ಕಳೆದ ವರ್ಷ ಸುಮಾರು 60 ಸಾವಿರ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿರಲಿಲ್ಲ ಎಂಬುದು ಗಂಭೀರವಾಗಿ ಪರಿಗಣಿಸಬೇಕಾದ ಸಂಗತಿಯಾಗಿದೆ. ಇದಕ್ಕೆ ಮಕ್ಕಳ ವೈಯಕ್ತಿಕ ಹಾಗೂ ಕೌಟುಂಬಿಕ ಸಮಸ್ಯೆಗಳು ಕಾರಣವಾಗಿರಬಹುದು. ಶಿವಮೊಗ್ಗ ಜಿಲ್ಲೆಯಲ್ಲಿ ಪರೀಕ್ಷೆಯ ದಿನವೇ ವಿದ್ಯಾರ್ಥಿಯೊಬ್ಬರ ಪೋಷಕರು ಮೃತಪಟ್ಟಿದ್ದರೂ, ಅಧಿಕಾರಿಗಳು ಮರುದಿನ ಆ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ್ದರು. ಆ ವಿದ್ಯಾರ್ಥಿ ನಂತರ ರ್ಯಾಂಕ್ ಪಡೆದರು. ಇಂತಹ ಘಟನೆಗಳು ಮಕ್ಕಳಿಗೆ ಸೂಕ್ತ ಸಮಯದಲ್ಲಿ ಅವಕಾಶ ಕಲ್ಪಿಸುವ ಮಹತ್ವವನ್ನು ತೋರಿಸುತ್ತವೆ. ಯಾವುದೇ ಕಾರಣಕ್ಕೂ ಮಕ್ಕಳು ಪರೀಕ್ಷೆಯಿಂದ ವಂಚಿತರಾಗದಂತೆ ಶಿಕ್ಷಕರು ಮತ್ತು ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದರು.
Also Read>> ಕಾರ್ಯಕರ್ತನಿಂದ ನಿರ್ದೇಶಕನ ಹುದ್ದೆಯವರೆಗೆ | ಹೆಚ್.ಪಿ. ಗಿರೀಶ್ 2 ದಶಕಗಳ ಹೋರಾಟಕ್ಕೆ ಸಂದ ಮನ್ನಣೆ
ಮಿಷನ್-60+ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಶಿಕ್ಷಕರು ಹಾಗೂ ಅಧಿಕಾರಿಗಳು ಮುಕ್ತ ಮನಸ್ಸಿನಿಂದ ಸಹಕರಿಸಬೇಕು. ಮಕ್ಕಳ ಕಲಿಕಾ ಸಾಮರ್ಥ್ಯ ಹೆಚ್ಚಿಸುವುದರ ಜೊತೆಗೆ ಅವರಲ್ಲಿ ಸಕಾರಾತ್ಮಕ ಬದಲಾವಣೆ ತರಲು ಪ್ರಯತ್ನಿಸಬೇಕು ಎಂದು ಮನವಿ ಮಾಡಿದರು.
ಕಾರ್ಯಾಗಾರದಲ್ಲಿ ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಯ ಸಂಪನ್ಮೂಲ ಶಿಕ್ಷಕರು ಭಾಗವಹಿಸಿದ್ದರು. ನವಲಗುಂದ ಶಾಸಕ ಎನ್.ಎಚ್. ಕೋನರಡ್ಡಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ವಿ. ರಶ್ಮಿ ಮಹೇಶ್, ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕ ಎಸ್. ಭರತ್, ಡಾ. ಈಶ್ವರ್ ಉಳ್ಳಾಗಡ್ಡಿ ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Karnataka Mission 60 plus ಏನಿದು ಮಿಷನ್-60+?
2025-26ನೇ ಶೈಕ್ಷಣಿಕ ಸಾಲಿನಲ್ಲಿ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ ಸುಧಾರಿಸುವ ಉದ್ದೇಶದಿಂದ ಶಿಕ್ಷಣ ಇಲಾಖೆ ‘ಮಿಷನ್-40+’ ಕಾರ್ಯಕ್ರಮವನ್ನು ಪರಿಚಯಿಸಿತ್ತು. ಇದೀಗ 2026-27ನೇ ಸಾಲಿನಲ್ಲಿ ಈ ಅಭಿಯಾನವನ್ನು ಮತ್ತಷ್ಟು ವಿಸ್ತರಿಸಿ ‘ಮಿಷನ್-60+’ ಕಾರ್ಯಕ್ರಮ ರೂಪಿಸಲಾಗಿದೆ.
ಪ್ರತಿ ವಿದ್ಯಾರ್ಥಿಯೂ ಪರೀಕ್ಷೆಯಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಗಳಿಸುವಂತೆ ಸಿದ್ಧಗೊಳಿಸುವುದು ಹಾಗೂ ಶಾಲೆ ಮತ್ತು ಕಾಲೇಜುಗಳಲ್ಲಿ ಶೇ.100ರಷ್ಟು ಉತ್ತೀರ್ಣ ಫಲಿತಾಂಶ ದಾಖಲಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಹೆಚ್ಚಿಸಿ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ರಾಜ್ಯದ ಫಲಿತಾಂಶವನ್ನು ಶೇ.100ಕ್ಕೆ ತಲುಪಿಸುವ ಗುರಿ ಹೊಂದಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










