ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಅವಧಿಯಿಂದಲೂ ಆರಂಭವಾಗಿದ್ದ ಟಿಪ್ಪು ಜಯಂತಿ ವಿವಾದಕ್ಕೆ ಹೊಸ ತಿರುವು ಪಡೆದುಕೊಂಡಿದ್ದು, ಟಿಪ್ಪು ಜಯಂತಿಯನ್ನು ರದ್ದು ಮಾಡುವ ಜೊತೆಯಲ್ಲಿ ರಾಜ್ಯ ಪಠ್ಯದಿಂದ ಟಿಪ್ಪು ಸುಲ್ತಾನ್ ವಿಚಾರವನ್ನು ತೆಗೆದುಹಾಕುವ ಸೂಚನೆಯನ್ನು ಸ್ವತಃ ಮುಖ್ಯಮಂತ್ರಿಗಳು ನೀಡಿದ್ದಾರೆ.
ಬೆಂಗಳೂರು ಪ್ರೆಸ್ ಕ್ಲಬ್ ಸಂವಾದದಲ್ಲಿ ಮಾತನಾಡಿದ ಅವರು, ಪಠ್ಯಪುಸ್ತಕದಿಂದ ಟಿಪ್ಪು ಪಠ್ಯವನ್ನು ತೆಗೆಯುವ ಕುರಿತಾಗಿ ಪರಿಶೀಲಿಸಿ ನಿರ್ಧಾರವನ್ನು ತೆಗೆದುಕೊಳ್ಳಲಾಗುತ್ತದೆ. ಟಿಪ್ಪು ಜಯಂತಿ ಆಚರಣೆಗೆ ಸಂಬಂಧಿಸಿದಂತೆ ಈ ಹಿಂದಿನ ಸರಕಾರ ಹೊರಡಿಸಿರುವ ಎಲ್ಲಾ ಆದೇಶಗಳನ್ನು ವಾಪಾಸು ಪಡೆಯುತ್ತಿರುವುದಾಗಿ ಅವರು ತಿಳಿಸಿದರು.
ಶಾಸಕರಾದ ಕೆ.ಜಿ. ಬೋಪಯ್ಯ ಹಾಗೂ ಅಪ್ಪಚ್ಚು ರಂಜನ್ ಅವರು ಶಾಲಾ ಪಠ್ಯದಿಂದ ಟಿಪ್ಪುವಿನ ಕುರಿತಾಗಿರುವ ಪಠ್ಯಗಳನ್ನು ತೆಗೆದುಹಾಕಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಮನವಿಪತ್ರ ಸಲ್ಲಿಸಿದ್ದರು.

















