ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಗೌರಿಬಿದನೂರು: ಗ್ರಾಮದಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯವನ್ನು ಕಾಪಾಡುವ ಮೂಲಕ ಆರೋಗ್ಯಕರ ವಾತಾವರಣವನ್ನು ನಿರ್ಮಾಣ ಮಾಡಬೇಕಾಗಿದೆ ಎಂದು ಶಾಸಕ ಎನ್.ಎಚ್. ಶಿವಶಂಕರರೆಡ್ಡಿ ತಿಳಿಸಿದರು.
ತಾಲೂಕಿನ ವಾಟದಹೊಸಹಳ್ಳಿಯಲ್ಲಿ ಬಹು ಗ್ರಾಮ ಪಂಚಾಯ್ತಿಗಳ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೂಮಿ ಪೂಜೆ ಮಾಡಿ ಅವರು ಮಾತನಾಡಿದರು.
ಪ್ರತೀ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿನ ಗ್ರಾಮದಲ್ಲಿ ನಿತ್ಯ ಸಂಗ್ರಹಿಸುವ ಕಸವನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಿ ಎಲ್ಲೆಡೆ ಸ್ವಚ್ಛತೆಯನ್ನು ಕಾಪಾಡಬೇಕಾಗಿದೆ. ಇದರಿಂದ ಗ್ರಾಮಗಳ ನೈರ್ಮಲ್ಯ ಹಾಗೂ ಉತ್ತಮ ಆರೋಗ್ಯವನ್ನು ನಿರ್ಮಾಣ ಮಾಡಲು ಸಹಕಾರಿಯಾಗಲಿದೆ. ಗ್ರಾಮೀಣ ಪ್ರದೇಶಗಳ ಸರ್ವಾಂಗೀಣ ಅಭಿವೃದ್ಧಿಯ ಜೊತೆಗೆ ಅವಶ್ಯಕವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಬದ್ಧರಾಗಿದ್ದೇವೆ ಎಂದರು.
ತಾಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಎನ್. ಮುನಿರಾಜು ಮಾತನಾಡಿ, ಗ್ರಾಮ ಪಂಚಾಯ್ತಿ ವತಿಯಿಂದ ಗ್ರಾಮಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವ ಉದ್ಧೇಶದಿಂದ ವಿಶೇಷ ಕಾಳಜಿಯನ್ನು ವಹಿಸಲಾಗಿದೆ. ಅಲ್ಲದೆ ಪರಿಸರ ಸಂರಕ್ಷಣೆ ಹಾಗೂ ತ್ಯಾಜ್ಯ ವಿಲೇವಾರಿಯನ್ನು ವ್ಯವಸ್ಥಿತವಾಗಿ ಮಾಡುವ ಮೂಲಕ ಸ್ವಚ್ಛ ಭಾರತ್ ಅಭಿಯಾನವನ್ನು ಯಶಸ್ವಿಯಾಗಿ ಪೂರೈಸಲಾಗುವುದು ಎಂದರು.
ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಕೆ.ಎನ್. ಕೇಶವ ರೆಡ್ಡಿ ಮಾತನಾಡಿ, ತಾಲೂಕನ್ನು ಮಾದರಿಯನ್ನಾಗಿ ನಿರ್ಮಾಣ ಮಾಡಲು ಶಾಸಕರು ವಿಶೇಷ ಅನುದಾನವನ್ನು ಮಂಜೂರು ಮಾಡಿಸಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಮುಂದಾಗಿದ್ದಾರೆ. ಇದರಿಂದ ಎಲ್ಲಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಸರ್ವಾಂಗೀಣ ಅಭಿವೃದ್ಧಿಯಾಗಲು ಸಾಧ್ಯವಾಗುತ್ತದೆ. ಇದಕ್ಕೆ ಅಧಿಕಾರಿಗಳ ಹಾಗೂ ಸ್ಥಳೀಯ ನಾಗರಿಕರ ಸಹಕಾರ ಅತ್ಯಗತ್ಯವಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ವಾಟದಹೊಸಹಳ್ಳಿ, ನಗರಗೆರೆ ಹಾಗೂ ಜಿ. ಕೊತ್ತೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿನ ಗ್ರಾಮಗಳ ತ್ಯಾಜ್ಯವನ್ನು ಒಂದೆಡೆ ಸಂಗ್ರಹಿಸಲು ತ್ಯಾಜ್ಯ ವಿಲೇವಾರಿ ಘಟಕಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ತಾಪಂ ಅಧ್ಯಕ್ಷ ಆರ್. ಲೋಕೇಶ್, ಗ್ರಾಮ ಪಂಚಾಯ್ತಿ ಅಧ್ಯಕ್ಷ ನವೀನ್ ಕುಮಾರ್, ಪಿಡಿಒ ಬಾಲಕೃಷ್ಣ, ಈರೇಗೌಡ, ಮಲ್ಲಿಕಾರ್ಜುನ ಸ್ವಾಮಿ, ಮುಖಂಡರಾದ ಮಂಜುನಾಥ್, ನರಸಿಂಹಮೂರ್ತಿ, ಕೃಷ್ಣಪ್ಪ, ಗಂಗಾಧರ್ ನರೇಗಾ ಇಂಜಿನಿಯರ್ ಅನಿಲ್, ಗ್ರಾಮ ಪಂಚಾಯ್ತಿ ಸದಸ್ಯರು, ಸಿಬ್ಬಂದಿ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.
(ವರದಿ: ಬಿ.ಎಂ. ಅಜಯ್, ಗೌರಿಬಿದನೂರು)
Get in Touch With Us info@kalpa.news Whatsapp: 9481252093
Discussion about this post