ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಮಾರಕ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 23ರ ಒಳಗಾಗಿ ಎಲ್ಲ ಶಾಲೆಗಳ ಪರೀಕ್ಷೆಗಳನ್ನು ಮುಕ್ತಾಯಗೊಳಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಈ ಕುರಿತಂತೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಇದರಂತೆ ಮಾರ್ಚ್ 11ರ ನಾಳೆಯಿಂದಲೇ ಒಂದರಿಂದ ಐದನೆಯ ತರಗತಿಯ ಪರೀಕ್ಷೆಗಳು ನಡೆಯಬೇಕಿದೆ. ಆರರಿಂದ ಒಂಬತ್ತನೆಯ ತರಗತಿ ಪರೀಕ್ಷೆಗಳನ್ನು ಮಾರ್ಚ್ 23ರ ಒಳಗಾಗಿ ಮುಕ್ತಾಯಗೊಳಿಸುವಂತೆ ಸೂಚಿಸಲಾಗಿದೆ.
ಇನ್ನು, ಎಸ್’ಎಸ್’ಎಲ್’ಸಿ ಪರೀಕ್ಷಾ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆಯಿಲ್ಲ. ಈ ಮೊದಲು ನಿಗದಿಯಾದಂತೆಯೇ ನಡೆಯಲಿದೆ ಎಂದು ಸ್ಪಷ್ಟಪಡಿಸಲಾಗಿದೆ.
ಶಾಲೆ ನಡೆಯುವ ದಿನಗಳಲ್ಲಿ ಪ್ರಾರ್ಥನೆ ಸಮಯದಲ್ಲಿ ಎಲ್ಲ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಬೇಕು. ಒಂದು ವೇಳೆ ಯಾವುದೇ ವಿದ್ಯಾರ್ಥಿಗಳಲ್ಲಿ ಜ್ವರ, ಕೆಮ್ಮು, ನೆಗಡಿ ಅಥವಾ ಇನ್ನಾವುದೇ ರೀತಿಯ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವುದು ಕಂಡು ಬಂದರೆ ಅಂತಹ ವಿದ್ಯಾರ್ಥಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ತತಕ್ಷಣವೇ ಸೂಕ್ತ ಚಿಕಿತ್ಸೆ ನೀಡಿ, ಕಡ್ಡಾಯ ರಜೆ ನೀಡಬೇಕು ಎಂದು ಸೂಚಿಸಲಾಗಿದೆ.
ಇನ್ನು, ಮುಂಜಾಗ್ರತಾ ಕ್ರಮವಾಗಿ ಯಾವುದೇ ವಿದ್ಯಾರ್ಥಿ ಮಾಸ್ಕ್ ಹಾಕಿಕೊಂಡೇ ಪರೀಕ್ಷೆ ಬರೆಯಲು ಇಚ್ಛಿಸಿದರೆ ಅಂತಹ ವಿದ್ಯಾರ್ಥಿಗಳಿಗೆ ಅನುಮತಿ ನೀಡಬೇಕು ಎಂದು ಆದೇಶಿಸಲಾಗಿದೆ.
ಬೆಂಗಳೂರಿನಲ್ಲಿ ಈ ಶಾಲೆಗಳಿಗೆ ರಜೆ
ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಪೂರ್ವ ಪ್ರಾಥಮಿಕ, ಎಲ್’ಕೆಜಿ ಹಾಗೂ ಯುಕೆಜಿ ಶಾಲೆಗಳಿಗೆ ನಿನ್ನೆಯಿಂದಲೇ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಲಾಗಿದ್ದು, ಮುಂದಿನ ಆದೇಶದವರೆಗೂ ಈ ಹಂತದ ಯಾವುದೇ ಶಾಲೆಗಳನ್ನು ತೆರೆಯದಂತೆ ಸೂಚಿಸಲಾಗಿದೆ.
(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
Get in Touch With Us info@kalpa.news Whatsapp: 9481252093
Discussion about this post