ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಸೌಲಭ್ಯಗಳನ್ನು ಫಲಾನುಭವಿಗಳಿಗೆ ತಲುಪಿಸಿದಾಗ ಮಾತ್ರ ಅವುಗಳಿಗೊಂದು ಸಾರ್ಥಕತೆ. ಬೇರೆ ಬೇರೆ ಕಾರಣಗಳಿಂದಾಗಿ ಸೌಲಭ್ಯಗಳಿಂದ ವಂಚಿತರಾಗಿರುವ ಫಲಾನುಭವಿಗಳನ್ನು ಗುರುತಿಸಿ, ಅವರಿಗೆ ಸೌಲಭ್ಯಗಳನ್ನು ಒದಗಿಸುವುದು ಮತ್ತು ಅವುಗಳ ಕುರಿತು ಮಾಹಿತಿ ನೀಡುವುದು ನಮ್ಮ ಮುಖ್ಯ ಗುರಿ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಹೇಳಿದರು.
ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಆಯೋಜನೆ ಮಾಡಲಾಗಿದ್ದ ಜಿಲ್ಲೆಯಲ್ಲಿ ಬಿಡುಗಡೆಯಾದ ಜೀತದಾಳುಗಳು ಮತ್ತು ಗ್ರಾಮೀಣ ಪ್ರದೇಶದಲ್ಲಿ ಗುರುತಿಸಲ್ಪಟ್ಟ ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗಳಿಗೆ ಪುನರ್ವಸತಿ ಶಿಬಿರ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸರ್ಕಾರ ಜನರಿಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಅದನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳುವುದು ಫಲಾನುಭವಿಗಳ ಕೈಯಲ್ಲಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸೌಲಭ್ಯಗಳು ದೊರೆಯುವಂತೆ ಮಾಡುವುದು ನಮ್ಮ ಉದ್ದೇಶ ಎಂದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ನ್ಯಾಯಾಧೀಶ ಬಿ. ಜಯಂತ್ ಕುಮಾರ್, ಸೌಲಭ್ಯಗಳು ಸರಿಯಾದ ವ್ಯಕ್ತಿಯನ್ನು ತಲುಪಬೇಕಾದರೆ ಸರಿಯಾದ ವಿತರಣೆ ಅಗತ್ಯ. ಆ ಕೆಲಸವನ್ನು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಮಾಡುತ್ತಿದೆ. ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು. ಕಾನೂನು ನಿಮ್ಮ ಸಹಾಯಕ್ಕೆ ಸದಾ ಇರುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್. ವೈಶಾಲಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ಎಂ. ಶಾಂತರಾಜು, ಹಿರಿಯ ಸಿವಿಲ್ ನ್ಯಾಯಾಧೀಶೆ ಸರಸ್ವತಿ ಕೆ.ಎನ್. ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
















