ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಕಬಡ್ಡಿ ಪಂದ್ಯಾವಳಿ ಫೈನಲ್ಸ್ ವೇಳೆಯಲ್ಲಿ ನಡೆದ ಗುಂಪು ಘರ್ಷಣೆ ಬೆನ್ನಲ್ಲೇ ನಗರದಲ್ಲಿ ಮುಂಜಾಗ್ರತಾ ಕ್ರಮವಾಗಿ 144 ಸೆಕ್ಷನ್ ಜಾರಿ ಮಾಡಲಾಗಿದ್ದು, ಆಯಕಟ್ಟಿನ ಸ್ಥಳಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಈ ಕುರಿತಂತೆ ಆದೇಶ ಹೊರಡಿಸಿರುವ ತಹಶೀಲ್ದಾರ್ ಜಿ. ಸಂತೋಷ್ ಕುಮಾರ್, ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿನ್ನಲೆಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಮಾ.5ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದಿದ್ದಾರೆ.
ಫೆ.27 ಮತ್ತು 28ರಂದು ಹಳೇನಗರದ ಕನಕಮಂಟಪ ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಮುಕ್ತಾಯದ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರ ನಡುವೆ ಉಂಟಾದ ಗಲಭೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಗುಪ್ತ ವರದಿ ಆಧರಿಸಿ ಮಾ.2ರ ಮಧ್ಯಾಹ್ನ 11 ಗಂಟೆಯಿಂದ ಮಾ.5ರ ಮಧ್ಯರಾತ್ರಿ 12 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.
ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್:
ಅಹಿತಕರ ಘಟನೆ ನಡೆದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರದ ಹಲವು ಕಡೆಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮಾಧವಾಚಾರ್ ವೃತ್ತ, ರಂಗಪ್ಪ ವೃತ್ತ, ಬಸವೇಶ್ವರ ವೃತ್ತ ಸೇರಿದಂತೆ ನಗರದ ಪ್ರಮುಖ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದ್ದು, ಕೆಎಸ್’ಆರ್’ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post