ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ನಗರದ ಪಶ್ಚಿಮ ವಲಯದಲ್ಲಿ ಕೋವಿಡ್ ಎರಡನೇ ಅಲೆ ಕಟ್ಟಿಹಾಕಲು ತೀವ್ರ ಪ್ರಯತ್ನ ನಡೆಸುತ್ತಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಭಾನುವಾರ ಪಶ್ಚಿಮ ವಲಯದ ಅಧಿಕಾರಿಗಳ ಸಭೆ ನಡೆಸಿದರು.
ಈ ಸಭೆಯ ನಂತರ ಮಾತನಾಡಿದ ಡಿಸಿಎಂ, ಪಶ್ಚಿಮ ವಿಭಾಗದಲ್ಲಿ ಪರಿಸ್ಥಿತಿಯನ್ನು ಬಹಳ ಉತ್ತಮವಾಗಿ ನಿರ್ವಹಣೆ ಮಾಡಲಾಗುತ್ತಿದೆ. ವೈದ್ಯರು ತಮ್ಮ ಜೀವನ್ನು ಪಣಕ್ಕಿಟ್ಟು ಸೇವೆ ಮಾಡುತ್ತಿದ್ದಾರೆ. ಇನ್ನೂ ಹೆಚ್ಚು ಸೇವೆ ಮಾಡಲು ಪ್ರಯತ್ನ ಮಾಡಲಾಗುತ್ತಿದೆ ಎಂದರು.
ಮಲ್ಲೇಶ್ವರದ ಕೆ.ಸಿ ಜನರಲ್ ಆಸ್ಪತ್ರೆ ಸೇರಿದಂತೆ ಎಲ್ಲೆಡೆ ಹೆಚ್ಚು ಸೋಂಕಿತರಿಗೆ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗುತ್ತಿದೆ. ಈ ಆಸ್ಪತ್ರೆಯಲ್ಲಿ ಹೊಸದಾಗಿ ಒಪಿಡಿಯೊಂದನ್ನು ತೆರೆಯಲಾಗುತ್ತಿದೆ. ಈವರೆಗೂ ಒಳರೋಗಿಗಳಿಗೂ ಚಿಕಿತ್ಸೆ ನೀಡಲು ಮಾತ್ರ ಆಂಬುಲೆನ್ಸ್ ಬಳಕೆ ಮಾಡಲಾಗುತ್ತಿತ್ತು. ಇನ್ನು ಮುಂದೆ ಹೊರ ರೋಗಿಗಳಾಗಿ ಚಿಕಿತ್ಸೆ ಪಡೆಯುವ ಸೋಂಕಿತರಿಗೂ ಆಂಬುಲೆನ್ಸ್ ಸೇವೆ ಒದಗಿಸಲಾಗುವುದು ಎಂದು ಡಿಸಿಎಂ ತಿಳಿಸಿದರು.
ಇನ್ನು ಮೂರು ದಿನಗಳಲ್ಲಿ ಈ ವಿಭಾಗದಲ್ಲಿ ಇನ್ನಷ್ಟು ಉತ್ತಮವಾಗಿ ಕೋವಿಡ್ ನಿರ್ವಹಣೆಯ ವ್ಯವಸ್ಥೆಯನ್ನು ಬಲಪಡಿಸುತ್ತೇವೆ ಎಂದು ಅವರು ತಿಳಿಸಿದರು.
ಸಂಸದ ಪಿ.ಸಿ.ಮೋಹನ್, ಪಶ್ಚಿಮ ವಲಯದ ಉಸ್ತುವಾರಿ ಐಎಎಸ್ ಅಧಿಕಾರಿ ಉಜ್ವಲ್ ಘೋಷ್ ಸೇರಿದಂತೆ ಇತರ ಅಧಿಕಾರಿಗಳು ಇದ್ದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post