ಕಲ್ಪ ಮೀಡಿಯಾ ಹೌಸ್
ಚಳ್ಳಕೆರೆ: ಕೊರೋನಾ ಸೋಂಕನ್ನು ತಡೆಯವಲ್ಲಿ ತಾಲೂಕು ಆಡಳಿತ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಕರ್ನಾಟಕ ಕನ್ನಡ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷ ಸ್ವಪ್ನ ವೆಂಕಟೇಶ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಸರ್ಕಾರ ಆಸ್ಪತ್ರೆಗಳಿಗೆ ಸಾಕಷ್ಟು ಸೌಲಭ್ಯಗಳನ್ನು ಒದಗಿಸಿದೆ. ಈ ಸೌಲಭ್ಯಗಳು ವೈದ್ಯರು ಹಾಗೂ ಅಧಿಕಾರಿಗಳು ಸಮರ್ಪಕವಾಗಿ ಬಳಕೆ ಮಾಡುತ್ತಿಲ್ಲ. ಇದರಿಂದ ರೋಗಿಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ತಾಲೂಕಿನಲ್ಲಿ ಎಲ್ಲೆಡೆ ಸೋಂಕಿನ ಪ್ರಕರಣಗಳು ಹೆಚ್ಚುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.
ತಾಲೂಕಿನಲ್ಲಿ ಬಡ ಜನರು ಸೋಂಕಿಗೆ ಬಲಿಯಾಗಿದ್ದಾರೆ. ಮತ್ತು ಆಸ್ಪತ್ರೆಗೆ ಬಂದ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡದೆ ಅವರನ್ನು ಕೂಡಲೇ ಜಿಲ್ಲಾ ಕೇಂದ್ರಕ್ಕೆ ಕಳುಹಿಸುತ್ತಾರೆ. ಆಕ್ಸಿಜನ್, ಬೆಡ್ ಹಾಗೂ ವೆಂಟಿಲೇಟರ್ ಸಿಗದೆ ಸಾಕಷ್ಟು ಜನರು ಸಾವನ್ನಪ್ಪಿದ್ದಾರೆ ಎಂದು ದೂರಿದರು.

ಕೊರೋನಾ ನೆಪದಲ್ಲಿ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳು, ಸೋಂಕಿತರಿಂದ 6-7 ಲಕ್ಷಗಟ್ಟಲೆ ವಸೂಲಿ ಮಾಡುವ ದಂಧೆಗೆ ಇಳಿದಿದ್ದಾರೆ. ಈ ದಂಧೆಯನ್ನು ಕೂಡಲೇ ನಿಯಂತ್ರಿಸಬೇಕು ಎಂದು ಆಗ್ರಹಿಸಿದರು.
ಕನ್ನಡ ರಕ್ಷಣಾ ವೇದಿಕೆ ಕಾರ್ಯದರ್ಶಿ ಚೇತನ್ ಕುಮಾರ್(ಕುಂಸಿ), ಪೊಲೀಸ್ ಅಧಿಕಾರಿಗಳ ಬೇಜವಾಬ್ದಾರಿತನದಿಂದ ನಗರದಲ್ಲಿ ಕಾರು, ಬೈಕ್, ಆಟೋ ಸಂಚಾರ ಸಾಮಾನ್ಯವಾಗಿದೆ. ಅನಗತ್ಯವಾಗಿ ಓಡಾಟ ನಡೆಸುವವರ ಸಂಖ್ಯೆ ಹೆಚ್ಚಾಗಿದೆ ಎಂದು ದೂರಿದರು.
ಹಿರಿಯ ನಾಗರಿಕ ಟಿ.ಜೆ. ತಿಪ್ಪೇಸ್ವಾಮಿ, ಕುಮಾರ್, ಬುಜ್ಜಿ, ವೆಂಕಟೇಶ್, ನಾಗರಾಜ, ಕೆ. ತೀರ್ಥ, ಮಂಜುನಾಥ, ರಂಗಸ್ವಾಮಿ ಇದ್ದರು.
(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















