ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ : ಮಂಡ್ಲಿ ಕಲ್ಲೂರು ಕೈಗಾರಿಕಾ ಪ್ರದೇಶದಲ್ಲಿ ಮಾಲಿನ್ಯ ಹೆಚ್ಚಾಗುತ್ತಿರುವ ಬಗ್ಗೆ ಮಾಹಿತಿ ಇದ್ದು, ಕೂಡಲೇ ತ್ಯಾಜ್ಯ ವಸ್ತುಗಳ ಸಂಸ್ಕರಣಾ ಘಟಕವನ್ನು ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಸಂಬಂಧಿತ ಇಲಾಖಾ ಅಧಿಕಾರಿಗಳು ಹಾಗೂ ಕೈಗಾರಿಕೋದ್ಯಮಿಗಳಿಗೆ ಸೂಚಿಸಿದರು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕೈಗಾರಿಕಾ ಸ್ಪಂದನ ಸಮಿತಿಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಕೈಗಾರಿಕೆಗಳಿಂದ ಬಳಸಿಬಿಡುತ್ತಿರುವ ಕಲುಶಿತ ನೀರಿನಿಂದ ದುರ್ನಾತ ಹಾಗೂ ಹರಿದು ಹೋಗುತ್ತಿರುವ ನೀರಿನಿಂದ ಮಾಲಿನ್ಯ ಉಂಟಾಗುವ ಸಂಭವ ಹೆಚ್ಚಾಗಿದೆ ಆದ್ದರಿಂದ ಕೂಡಲೇ ಕಾರ್ಯಪ್ರವೃತ್ತರಾಗುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ ಅವರು ಪ್ರಸ್ತುತ ಸಂದರ್ಭದಲ್ಲಿ ಕೈಗಾರಿಕಾ ಪ್ರದೇಶದಿಂದ ನೀರನ್ನು ಹೊರಗೆ ಬಿಡಲು ಆರ್.ಸಿ.ಸಿ. ಡ್ರೈನೇಜ್ ನಿರ್ಮಿಸಲು ಕೆ.ಐ.ಎ.ಡಿ.ಬಿ. ಅಧಿಕಾರಿಗಳು ಅಂದಾಜು ಪಟ್ಟಿ ತಯಾರಿಸಿ ಸಲ್ಲಿಸಿರುವುದಾಗಿಯೂ ಅವರು ನುಡಿದರು.
ವ್ಯವಸ್ಥಿತ ನಿರ್ವಹಣೆಯ ಹಿನ್ನೆಲೆಯಲ್ಲಿ ಸದರಿ ಕೈಗಾರಿಕಾ ಪ್ರದೇಶವನ್ನು ಮಹಾನಗರಪಾಲಿಕೆಗೆ ಹಸ್ತಾಂತರಿಸುವ ಕುರಿತು ಶೀಘ್ರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಮಾಲೋಚನೆ ನಡೆಸುವುದಾಗಿ ತಿಳಿಸಿದ ಅವರು, ಇಲ್ಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಸುಮಾರು 80.60ಲಕ್ಷ ರೂ.ಗಳ ಅಂದಾಜುಪಟ್ಟಿ ತಯಾರಿಸಿ ಕೆ.ಐ.ಎ.ಡಿ.ಬಿ. ಕೇಂದ್ರ ಕಚೇರಿಗೆ ಸಲ್ಲಿಸಲಾಗಿದ್ದ ಪ್ರಸ್ತಾವನೆಗೆ ಅನುಮೋದನೆ ದೊರೆತಿದ್ದು, ಶೀಘ್ರದಲ್ಲಿ ಕಾರ್ಯಾದೇಶ ನೀಡುವ ಬಗ್ಗೆಯೂ ಸಂಬಂಧಿತ ಇಲಾಖಾ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಮಂಡ್ಲಿ-ಕಲ್ಲೂರು ಕೈಗಾರಿಕಾ ಪ್ರದೇಶದ ಎಲ್ಲಾ ಘಟಕಗಳಿಗೆ ಣೀರುವ ಒದಗಿಸಲು ನೆಲಮಟ್ಟದ ನೀರಿನ ತೊಟ್ಟಿ ನಿರ್ಮಾಣ ಮಾಡಲು ಅಂದಾಜು ಪಟ್ಟಿ ತಯಾರಿಸಿ ಅನುಮೊದನೆಗಾಗಿ ಸಲ್ಲಿಸಲಾಗಿದೆ. ಅದಕ್ಕೂ ಪೂರ್ವದಲ್ಲಿ ಈಗಿರುವ ಓವರ್‌ಹೆಡ್ ಟ್ಯಾಂಕಿನ ನೀರನ್ನು ಸದ್ವಿನಿಯೋಗವಾಗುತ್ತಿರುವ ಬಗ್ಗೆಯೂ ಗಮನಹರಿಸುವಂತೆ ಜಿಲ್ಲಾಧಿಕಾರಿಗಳು ಕೈಗಾರಿಕಾಧಿಕಾರಿಗಳಿಗೆ ಸೂಚಿಸಿದರು.
ಮಹಾನಗರಪಾಲಿಕೆಯ ವತಿಯಿಂದ ಈ ಕೈಗಾರಿಕಾ ಪ್ರದೇಶದ ನಿರ್ವಹಣೆ ಮತ್ತು ಸ್ವಚ್ಚತಾ ಕೆಲಸ ಸರಿಯಾಗಿ ನಡೆಯುತ್ತಿಲ್ಲ ಎಂಬ ಕೈಗಾರಿಕೋದ್ಯಮಿಗಳ ದೂರಿಗೆ ಸಂಬಂಧಿಸಿದಂತೆ ಇಲ್ಲಿನ ಸ್ವಚ್ಚತಾ ಕಾರ್ಯಗಳಿಗೆ ಪ್ರತ್ಯೇಕವಾದ ಸಿಬ್ಬಂಧಿಗಳನ್ನು ನಿರ್ವಹಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಮಾಚೇನಹಳ್ಳಿ ಕೈಗಾರಿಕೆಗಳ ಮರಳು ತ್ಯಾಜ್ಯವನ್ನು ಸೂಕ್ತವಾಗಿ ವಿಲೇವಾರಿ ಮಾಡಲು ಸ್ಥಳಾವಕಾಶದ ಅಗತ್ಯವಿದ್ದು, ಸ್ಥಳ ಗುರುತಿಸಿ ಪ್ರಸ್ತಾವನೆ ಸಲ್ಲಿಸಿದಲ್ಲಿ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು ಎಂದ ಅವರು, ಮುಂದಿನ ಸೋಮವಾರದಂದು ಕೈಗಾರಿಕಾ ಇಲಾಖಾಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.
ಸಾಗರ ರಸ್ತೆಯ ಕೈಗಾರಿಕಾ ವಸಾಹತುವಿನಲ್ಲಿ ರೂ. 10ಕೋಟಿ ವೆಚ್ಚದ ಮೂಲಭೂತ ಸೌಕರ್ಯ ಅಭಿವೃಧ್ಧಿ ಕಾರ್ಯಗಳನ್ನು ನಡೆಸಲು ಜಿಲ್ಲಾಧಿಕಾರಿಗಳು ಅನುಮತಿ ನೀಡಿ ಆದೇಶಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್.ವೈಶಾಲಿ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಉಪನಿರ್ದೇಶಕ ಗಣೇಶ್, ಜಿಲ್ಲಾ ಕೈಗಾರಿಕಾ ಕೇಂದ್ರದ ವೀರೇಶನಾಯ್ಕ್, ಗ್ರಾಮೀಣ ಕೈಗಾರಿಕಾ ಇಲಾಖೆಯ ಉಪನಿರ್ದೇಶಕ ಜಯಂತ್ ಸೇರಿದಂತೆ ಸಂಬಂಧಿತ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post