ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಸರಳ ಹಾಗು ಸುಂದರವಾದ ಭಾಷೆ ಕನ್ನಡ ವಿಶ್ವಮಟ್ಟದಲ್ಲಿ ವಿಜೃಂಭಿಸುವಂತಾಗಬೇಕು. ಈ ನಿಟ್ಟಿನಲ್ಲಿ ನಾವೆಲ್ಲರೂ ಕನ್ನಡಕ್ಕೆ ಮೊದಲ ಆದ್ಯತೆ ನೀಡುವ ಮೂಲಕ ನಾಡು ಕಟ್ಟುವ ಕಾರ್ಯದಲ್ಲಿ ಮುನ್ನಡೆಯೋಣ ಎಂದು ತಹಸೀಲ್ದಾರ್ ಆರ್. ಪ್ರದೀಪ್ ಹೇಳಿದರು.
ನಗರದ ಹಳೇನಗರದ ಪುರಾಣ ಪ್ರಸಿದ್ದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಕರ್ನಾಟಕ ರಾಜ್ಯೋತ್ಸವ ಅಭಿಯಾನದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮಾತಾಡ್ ಮಾತಾಡ್ ಕನ್ನಡ, ಕನ್ನಡಕ್ಕಾಗಿ ನಾವು’ ವಿಶ್ವದಾದ್ಯಂತ ಏಕ ಕಾಲದಲ್ಲಿ ಲಕ್ಷ ಲಕ್ಷ ಕಂಠಗಳಲ್ಲಿ ಕನ್ನಡ ಗೀತ ಗಾಯನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಕನ್ನಡ ಭಾಷೆಗೆ ತನ್ನದೇ ಆದ ಭವ್ಯ ಪರಂಪರೆ ಇದ್ದು, ಅನೇಕ ಮಹಾನ್ ವ್ಯಕ್ತಿಗಳ ಪರಿಶ್ರಮದಿಂದ ಕನ್ನಡ ನಾಡು ಉದಯಿಸಿದೆ. ಅನೇಕ ಕವಿಗಳು, ಸಾಹಿತಿಗಳು ಕನ್ನಡ ಭಾಷೆಗೆ ವಿಶಿಷ್ಟವಾದ ಕೊಡುಗೆಗಳನ್ನು ನೀಡಿದ್ದಾರೆ. ಸಮೃದ್ಧವಾದ ಭಾಷೆ ಕನ್ನಡಕ್ಕೆ ಅತಿಹೆಚ್ಚು ಜ್ಞಾನಪೀಠ ಪ್ರಶಸ್ತಿಗಳು ಲಭಿಸಿವೆ. ದೇಶದಲ್ಲಿ ಭಾಷಾವಾರು ಪ್ರಾಂತ್ಯಗಳು ಉದಯವಾದ ನಂತರ ಕನ್ನಡ ನಾಡಿಗೆ 1973ರಲ್ಲಿ ಕರ್ನಾಟಕ ಎಂಬ ಹೆಸರನ್ನು ನಾಮಕರಣಗೊಳಿಸಲಾಯಿತು. ಅಂದಿನಿಂದ ನವಂಬರ್ ೧ ರಂದು ಪ್ರತಿ ವರ್ಷ ರಾಜ್ಯೋತ್ಸವ ಆಚರಿಸಿಕೊಂಡು ಬರಲಾಗುತ್ತಿದೆ ಎಂದು ತಿಳಿಸಿದರು.
ರಾಜ್ಯೋತ್ಸವ ಸಂದರ್ಭದಲ್ಲಿ ವಿಶಿಷ್ಟ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ನಾಡು, ನುಡಿ, ಸಂಸ್ಕೃತಿಯನ್ನು ಬಿಂಬಿಸುವ ಕಾರ್ಯ ಕೈಗೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಮಾತಾಡ್ ಮಾತಾಡ್ ಕನ್ನಡ, ಕನ್ನಡಕ್ಕಾಗಿ ನಾವು’ ಅಭಿಯಾನ ಅತಿ ಮಹತ್ವದ ಕಾರ್ಯಕ್ರಮವಾಗಿದೆ ಎಂದರು.
ಮೊದಲಿಗೆ ನಾಡಗೀತೆ ಗಾಯನ, ನಂತರ ನಿತ್ಯೋತ್ಸವ, ಬಾರಿಸು ಕನ್ನಡ ಡಿಂಡಿಮವ ಸೇರಿದಂತೆ ಇನ್ನಿತರ ಕನ್ನಡ ಗೀತೆಗಳ ಗಾಯನ ನಡೆಯಿತು. ನಾಡು, ಭಾಷೆ ಉಳಿಸಿಬೆಳೆಸುವ ನಿಟ್ಟಿನಲ್ಲಿ ಸಂಕಲ್ಪ ಸ್ವೀಕರಿಸಲಾಯಿತು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಪೌರಾಯುಕ್ತ ಕೆ. ಪರಮೇಶ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ಅಪೇಕ್ಷ ಮಂಜುನಾಥ್, ನಗರಸಭೆ ಸದಸ್ಯರು, ತಾಲೂಕು ಆಡಳಿತ, ನಗರಸಭೆ ಹಾಗು ತಾಲೂಕು ಪಂಚಾಯಿತಿ ಸಿಬ್ಬಂದಿಗಳು, ವಿವಿಧ ಕಲಾ ತಂಡಗಳ ಕಲಾವಿದರು, ಮಹಿಳಾ ಸಂಘಟನೆಗಳ ಪ್ರಮುಖರು, ಶಾಲಾ ಮಕ್ಕಳು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post