ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲಾ ನೂತನ ಉಸ್ತುವಾರಿ ಸಚಿವರಾಗಿ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿರುವ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಇಂದು ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಮೇಘರಾಜ್, ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ ಸೇರಿದಂತೆ ಹಲವು ಬಿಜೆಪಿ ಮುಖಂಡರು ಅದ್ದೂರಿ ಸ್ವಾಗತ ಕೋರಿದರು.
ಈ ವೇಳೆ ಮಾತನಾಡಿದ ಸಚಿವ ಡಾ. ನಾರಾಯಣಗೌಡ, ನಾನು ಬಿಜೆಪಿಗೆ ಬಂದು ಸಚಿವನಾಗುವುದಕ್ಕೆ ಯಡಿಯೂರಪ್ಪ ಅವರೇ ಕಾರಣ. ಅವರ ಮಾರ್ಗದರ್ಶನದಲ್ಲಿ, ಸಚಿವ ಈಶ್ವರಪ್ಪ ಹಾಗೂ ಎಲ್ಲಾ ಬಿಜೆಪಿ ಮುಖಂಡರ ನೇತೃತ್ವದಲ್ಲಿ ಅಭಿವೃದ್ದಿ ಕೆಲಸಗಳಿಗೆ ಕೈ ಜೋಡಿಸುವುದಾಗಿ ಸಚಿವ ಡಾ. ನಾರಾಯಣಗೌಡ ಅವರು ಹೇಳಿದರು.
ಎಲ್ಲಾ ರಾಜ್ಯದಲ್ಲಿ ತವರು ಜಿಲ್ಲೆಯ ಸಚಿವರನ್ನ ಬೇರೆ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನಾಗಿ ನೇಮಿಸುವ ತೀರ್ಮಾನವನ್ನು ಹೈಕಮಾಂಡ್ ತೆಗೆದುಕೊಂಡಿದೆ. ನಮ್ಮ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿ ಡಾ. ನಾರಾಯಣಗೌಡ ಅವರು ನೇಮಕವಾಗಿರುವುದು ಸಂತೋಷ ತಂದಿದೆ. ಅವರಿಗೆ ಜಿಲ್ಲೆ ಬಿಜೆಪಿಯಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದರು.
ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷ ಮೇಘರಾಜ್ ಮಾತನಾಡಿ, ಯಡಿಯೂರಪ್ಪನವರು ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವುದಕ್ಕೆ ಸಚಿವ ಡಾ. ನಾರಾಯಣಗೌಡ ಅವರ ತ್ಯಾಗ ಕೂಡ ಕಾರಣ. ನಮ್ಮ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿರುವುದು ಸಂತಸ ತಂದಿದೆ. ಅವರಿಗೆ ಜಿಲ್ಲಾ ಬಿಜೆಪಿ ವತಿಯಿಂದ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಮೇಘರಾಜ್ ಹೇಳಿದರು.
ಶಿವಮೊಗ್ಗ ಗ್ರಾಮಾಂತರ ಶಾಸಕ ಅಶೋಕ್ ನಾಯ್ಕ್ ಅವರು ಮಾತನಾಡಿ, ಡಾ.ನಾರಾಯಣಗೌಡ ಅವರು ಉಸ್ತುವಾರಿ ಸಚಿವರಾಗಿ ಬಂದಿರುವುದು ಸಂತೋಷವಾಗಿದೆ. ಅವರನ್ನು ಅತ್ಯಂತ ಆತ್ಮೀಯವಾಗಿ ಸ್ವಾಗತಿಸುತ್ತೇನೆ. ಜಿಲ್ಲೆಯ ಅಭಿವೃದ್ಧಿ ಹಾಗೂ ಪಕ್ಷ ಸಂಘಟನೆಗೆ ಸಾಥ್ ನೀಡುವುದಾಗಿ ಅಶೋಕ ನಾಯ್ಕ್ ಅವರು ತಿಳಿಸಿದರು.
ಶಿವಮೊಗ್ಗ ಗ್ರಾಮಾಂತರ ಶಾಸಕ ಅಶೋಕ್ ನಾಯ್ಕ್, ವಿಧಾನ ಪರಿಷತ್ ಸದಸ್ಯ ರುದ್ರೇಗೌಡ, ಶಿವಮೊಗ್ಗ ಮೇಯರ್ ಸುನೀತಾ ಅಣ್ಣಪ್ಪ ಸೇರಿದಂತೆ ಜಿಲ್ಲಾ ಬಿಜೆಪಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post