ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಾದ್ಯಂತ ಎಪ್ರಿಲ್ 22ರ ನಾಳೆಯಿಂದ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಗಳು Second PUC Final Exam ಆರಂಭವಾಗಲಿದ್ದು, ಸುಗಮವಾಗಿ ನಡೆಸಲು ಎಲ್ಲ ಸಿದ್ದತೆಗಳು ಪೂರ್ಣಗೊಂಡಿದೆ.
ಈ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ನಾಳೆಯಿಂದ ಆರಂಭವಾಗಿ ಮೇ 1-18ರವರೆಗೂ ನಡೆಯಲಿದ್ದು, ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 7,84,255 ವಿದ್ಯಾರ್ಥಿಗಳು ಬರೆಯಲಿದ್ದು, ರಾಜ್ಯದಾದ್ಯಂತ ಒಟ್ಟು 1076 ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ.
ಸಿಸಿ ಟಿವಿ ಕಣ್ಣಡಿಯಲ್ಲಿ ಪರೀಕ್ಷೆ:
ಪರೀಕ್ಷೆಗಳಲ್ಲಿ ಅಕ್ರಮ ನಡೆಯುವುದನ್ನು ತಡೆದು ಸುಗಮ ಪರೀಕ್ಷೆಗೆ ಅವಕಾಶ ಕಲ್ಪಿಸಲು ಪರೀಕ್ಷೆಗಳು ಸಿಸಿ ಟಿವಿ ಕಣ್ಗಾವಲಿನಲ್ಲಿ ನಡೆಯಲಿವೆ. ಎಲ್ಲ ಪರೀಕ್ಷಾ ಕೇಂದ್ರಗಳಿಗೂ ಸಿಸಿ ಟಿವಿಗಳನ್ನು ಅಳವಡಿಸಲಾಗಿದೆ.
ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಪೊಲೀಸ್ ಬಂದೋಬಸ್ತ್ ಸಹ ವ್ಯವಸ್ಥೆ ಮಾಡಲಾಗಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ಮೊಬೈಲ್ ತರುವುದನ್ನು ನಿಷೇಧಿಸಲಾಗಿದೆ. ಅಧೀಕ್ಷಕರಿಗೆ ಮಾತ್ರ ಕ್ಯಾಮರಾ ಇರದ ಮೊಬೈಲ್ ಇರಿಸಿಕೊಳ್ಳಲು ಅನುಮತಿ ನೀಡಲಾಗಿದೆ.
ಜಾಗೃತ ದಳ
ಪರೀಕ್ಷೆ ಅಕ್ರಮಗಳ ಬಗ್ಗೆ ಕಟ್ಟೆಚ್ಚರ ವಹಿಸಲಾಗಿದ್ದು, 2,152 ಜಾಗೃತ ದಳವನ್ನು ರಚಿಸಲಾಗಿದ್ದು, ಇದರ ಜತೆಗೆ ತಾಲೂಕು ಮಟ್ಟದಲ್ಲಿ 858 ಮತ್ತು ಜಿಲ್ಲಾ ಮಟ್ಟದಲ್ಲಿ 74 ಜಾಗೃತ ದಳಗಳು ಇದ್ದು, ಈ ಜಾಗೃತ ದಳಗಳು ಪರೀಕ್ಷಾ ಕೇಂದ್ರಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರೀಕ್ಷಾ ವ್ಯವಸ್ಥೆಗಳನ್ನು ಪರಿಶೀಲನೆ ಮಾಡಲಿದೆ.
ಹಿಜಾಬ್’ಗೆ ಅವಕಾಶವಿಲ್ಲ:
ಎಸ್’ಎಸ್’ಎಲ್’ಸಿ ಪರೀಕ್ಷೆಯಂತೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲೂ ಹಿಜಾಬ್ Hijab ಸೇರಿದಂತೆ ಯಾವುದೇ ಧರ್ಮವನ್ನು ಸಂಕೇತಿಸುವ ಉಡುಪುಗಳನ್ನು ಧರಿಸುವುದನ್ನು ನಿರ್ಬಂಧಿಸಲಾಗಿದೆ. ಪಿಯುಸಿ ಪರೀಕ್ಷೆಗೂ ಸಮವಸ್ತ್ರವನ್ನು ಸರ್ಕಾರ ಕಡ್ಡಾಯಗೊಳಿಸಿದೆ.
Also read: ಶ್ರೀರಂಗಪಟ್ಟಣ-ಚನ್ನರಾಯಪಟ್ಟಣ ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿ ಉನ್ನತೀಕರಣ
ಉಚಿತ ಬಸ್ ಪ್ರಯಾಣ
ದ್ವಿತೀಯ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸಾಮಾನ್ಯ ಹಾಗೂ ವೇಗಧೂತ ಬಸ್’ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿಗಳು ಪ್ರವೇಶಪತ್ರವನ್ನು ತೋರಿಸಿ ಪರೀಕ್ಷಾ ದಿನ ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಉಚಿತವಾಗಿ ಸರ್ಕಾರಿ ಬಸ್’ಗಳಲ್ಲಿ ಪ್ರಯಾಣಿಸಬಹುದು.
ಜೂನ್’ನಲ್ಲಿ ಫಲಿತಾಂಶ
ದ್ವಿತೀಯ ಪರೀಕ್ಷೆಗಳು ಮೇ 22ರಂದು ಪೂರ್ಣಗೊಂಡ ನಂತರ ಮೇ ಕೊನೆಯ ವಾರದಲ್ಲಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯಲಿದ್ದು, ಜೂನ್ 3ನೆಯ ವಾರದಲ್ಲಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post