ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ದೇಶದ 75ನೇ ಸ್ವಾತಂತ್ರ ದಿನಾಚರಣೆ ಅಮೃತ ಮಹೋತ್ಸವದ ನಿಮಿತ್ತ ದೇಶದ ಪ್ರತಿ ಮನೆಮನೆಯಲ್ಲೂ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ರಾಷ್ಟ್ರಾಭಿಮಾನವನ್ನು ಮೆರೆಯುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಜನತೆಗೆ ಮನವಿ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘವು ರಾಜ್ಯದ ಎಲ್ಲಾ ನೌಕರರ ಮನೆಮನೆಗಳಲ್ಲಿ ಆಗಸ್ಟ್ 13ರಿಂದ 15ರವರೆಗೆ ತ್ರಿವರ್ಣಧ್ವಜವನ್ನು ಹಾರಿಸಲು ಮಹತ್ವದ ನಿರ್ಣಯ ಕೈಗೊಂಡಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಹೇಳಿದರು.
ಅವರು ಶಿವಮೊಗ್ಗದ ತಮ್ಮ ನಿವಾಸದಲ್ಲಿ ಹರ್ ಘರ್ ತಿರಂಗಾ ಕಾರ್ಯಕ್ರಮಕ್ಕೆ ತ್ರಿವರ್ಣಧ್ವಜವನ್ನು ನೌಕರರಿಗೆ ವಿತರಿಸುವ ಮೂಲಕ ಚಾಲನೆ ನೀಡಿ ಮಾತನಾಡುತ್ತಿದ್ದರು. ಈ ಅಭಿಯಾನದ ಯಶಸ್ಸಿಗಾಗಿ ಶಿವಮೊಗ್ಗ ತಾಲೂಕಿನ ನೌಕರರಿಗೆ 4500 ರಾಷ್ಟ್ರಧ್ವಜವನ್ನು ಉಚಿತವಾಗಿ ವಿತರಿಸಲು ಉದ್ದೇಶಿಸಲಾಗಿದೆ ಎಂದವರು ತಿಳಿಸಿದರು.
ಸದರಿ ರಾಷ್ಟ್ರಧ್ವಜ ಅಭಿಯಾನವನ್ನು ರಾಜ್ಯದ ಎಲ್ಲಾ ಜಿಲ್ಲೆಗಳು ಹಾಗೂ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರು ಧ್ವಜವನ್ನು ನೌಕರರ ಸಂಘದ ಕಚೇರಿಗಳಿಂದ ಉಚಿತವಾಗಿ ಪಡೆದು ತಮ್ಮ ತಮ್ಮ ಮನೆಗಳಲ್ಲಿ ಧ್ವಜಾರೋಹಣ ನೆರವೇರಿಸಿ ಅಮೃತ ಮಹೋತ್ಸವವನ್ನು ಸಂಭ್ರಮಿಸುವAತೆ ಅವರು ತಿಳಿಸಿದ್ದಾರೆ.
ರಾಷ್ಟ್ರಾಭಿಮಾನದ ಪ್ರತೀಕವಾಗಿ ಆಚರಿಸಲಾಗುತ್ತಿರುವ ಈ ಅಭಿಯಾನವನ್ನು ಯಶಸ್ವಿಯಾಗಿ ನಡೆಸುವಂತೆ ಹಾಗೂ ಈ ಅವಧಿಯಲ್ಲಿ ನೌಕರರು ತ್ರಿವರ್ಣಧ್ವಜದ ಶಿಷ್ಟಾಚಾರಕ್ಕೆ ಚ್ಯುತಿ ಬಾರದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಿರುವ ಅವರು, ಶಿವಮೊಗ್ಗ ತಾಲೂಕಿನ ನೌಕರರು ನೌಕರರ ಸಂಘದಲ್ಲಿ ಉಚಿತವಾಗಿ ಧ್ವಜವನ್ನು ಪಡೆದುಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಆರ್.ಮೋಹನ್‌ಕುಮಾರ್, ಕಾರ್ಯದರ್ಶಿ ಕೃಷ್ಣಮೂರ್ತಿ ಸೇರಿದಂತೆ ನೌಕರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post