ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಅರಣ್ಯ ಸಂರಕ್ಷಣೆಯ ಮಹತ್ವವನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕಾದ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಆರ್. ಸೆಲ್ವಮಣಿ ಅವರು ತಿಳಿಸಿದರು.
ಅವರು ಭಾನುವಾರ ಶ್ರೀಗಂಧ ಕೋಠಿ ಆವರಣದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮತರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಹುತಾತ್ಮ ಸ್ಮಾರಕಕ್ಕೆ ಪುಷ್ಪಗುಚ್ಚ ಅರ್ಪಿಸಿ ಮಾತನಾಡಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೆ.ಎಸ್. ಮಾನು, ಗಡಿಯಲ್ಲಿ ಯೋಧರು ದೇಶವನ್ನು ರಕ್ಷಿಸುವ ಕಾರ್ಯ ಮಾಡಿದರೆ, ದೇಶದ ಒಳಗೆ ಅರಣ್ಯ ಸಂಪತ್ತನ್ನು ಸಂರಕ್ಷಿಸುವ ಮಹತ್ವದ ಕಾರ್ಯವನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ನಡೆಸುತ್ತಿದ್ದಾರೆ. ಇಂದಿನ ದಿನಗಳಲ್ಲಿ ಪ್ರಾಣಿ ಮತ್ತು ಮಾನವನ ನಡುವಿನ ಸಂಘರ್ಷಗಳು ಹೆಚ್ಚುತ್ತಿದ್ದು, ಇಂತಹ ಸಂದರ್ಭಗಳಲ್ಲಿ ಅರಣ್ಯ ಇಲಾಖೆಯ ಜವಾಬ್ದಾರಿಯೂ ಹೆಚ್ಚುತ್ತಿದೆ.

ಅರಣ್ಯ ಸಂರಕ್ಷಣೆಗಾಗಿ ತಮ್ಮ ಪ್ರಾಣ ಬಲಿದಾನ ಮಾಡಿದ ಮಹನೀಯರ ಬಲಿದಾನ ವ್ಯರ್ಥವಾಗುವುದಿಲ್ಲ. ಅರಣ್ಯ ಸಂರಕ್ಷಣೆಯ ನಮ್ಮ ಬದ್ದತೆಯನ್ನು ಇದು ಇನ್ನಷ್ಟು ಹೆಚ್ಚಿಸುತ್ತದೆ. ಅಂತಹ ಹುತಾತ್ಮರ ಕುಟುಂಬದೊಂದಿಗೆ ಇಲಾಖೆ ಸದಾ ಇರುತ್ತದೆ. ಪ್ರತಿಯೊಬ್ಬರೂ ಅರಣ್ಯ ಸಂರಕ್ಷಣೆಗಾಗಿ ಸ್ವಯಂ ಯೋಧರಾಗಬೇಕು ಎಂದು ಶಿವಮೊಗ್ಗ ವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಟಿ.ಹನುಮಂತಪ್ಪ ಅವರು ಹೇಳಿದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಈ.ಶಿವಶಂಕರ್ ಅವರು ಕರ್ತವ್ಯದ ಸಂದರ್ಭದಲ್ಲಿ ಪ್ರಾಣ ಅರ್ಪಿಸಿದ ಅಧಿಕಾರಿಗಳ ಪಟ್ಟಿಯನ್ನು ವಾಚಿಸಿದರು. ಅತಿಥಿಗಳು ಹುತಾತ್ಮ ಸ್ಮಾರಕಕ್ಕೆ ಪುಷ್ಪ ಗುಚ್ಚ ಅರ್ಪಿಸಿ ಶ್ರದ್ಧಾಂಜಲಿ ಸಲ್ಲಿಸಿದರು. ಪೊಲೀಸ್ ತಂಡದಿಂದ ಕುಶಾಲು ತೋಪು ಹಾರಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಐ.ಎಂ.ನಾಗರಾಜ ಮತ್ತಿತರರು ಉಪಸ್ಥಿತರಿದ್ದರು.









Discussion about this post